ಜೇವರ್ಗಿ: ಶಾಖಾ ಕಾಲುವೆಯಡಿ ಬರುವ ವಿತರಣಾ ಕಾಲುವೆ ಸಂಖ್ಯೆ 14 ಮತ್ತು 18ರ ವ್ಯಾಪ್ತಿಯ ಸುಮಾರು 20ರಿಂದ 25 ಹಳ್ಳಿಗಳಿಗೆ ನೀರು ಪೂರೈಕೆಯಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ರೈತರು ವಿಜಯಪುರ ರಸ್ತೆಯ ಸೊನ್ನ ಕ್ರಾಸ್ ಬಳಿ ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಸ್. ಸಲಗರ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಾಗೂ ಹಿಂಗಾರು ಬೆಳೆಗಳಿಗೆ ಮಳೆ ಬಾರದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅನ್ನದಾತರ ಬದುಕು ಅಕ್ಷರಶಃ ಬೀದಿಗೆ ಬಂದಿದೆ. ಜಾನುವಾರುಗಳ ಕುಡಿಯುವ ನೀರಿಗೂ ಹಾಗೂ ಅಳಿದುಳಿದ ಬೆಳೆಗಳಿಗೆ ನೀರು ಹಾಯಿಸಲೂ ಸಾಧ್ಯವಾಗದೆ ರೈತರು ಪರದಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಜೆಬಿಸಿ ಕಾಲುವೆಗಳಿಗೆ ಹನಿ ನೀರೂ ಬರುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುಮಾರು ಐದಾರು ಗಂಟೆಗಳ ಕಾಲ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು ಕೃಷ್ಣಾ ಭಾಗ್ಯ ಜಲನಿಗಮದ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಯಲ್ಲಪ್ಪ ಸುಬೇದಾರ ಹಾಗೂ ಕೃಷ್ಣಾ ಭಾಗ್ಯ ಜಲನಿಗಮದ ಅಧಿಕಾರಿ ಅರುಣಕುಮಾರ ಅವರು, 14, 15 ಮತ್ತು 18ನೇ ವಿತರಣಾ ಕಾಲುವೆಗಳಿಗೆ ಶುಕ್ರವಾರ ರಾತ್ರಿಯೇ ನೀರು ಹರಿಸುವುದಾಗಿ ಭರವಸೆ ನೀಡಿದರು. ಅಧಿಕಾರಿಗಳ ಭರವಸೆಯ ಬಳಿಕ ರೈತರು ಪ್ರತಿಭಟನೆಯನ್ನು ಹಿಂಪಡೆದರು.

ಪ್ರತಿಭಟನೆಯಲ್ಲಿ ಶರಬು ಕಲ್ಯಾಣಿ, ಬಾಪುಗೌಡ ಪಾಟೀಲ ಕಲ್ಲಹಂಗರಗಾ, ದೊಡ್ಡಪ್ಪಗೌಡ ಪಾಟೀಲ ಕಲ್ಲಹಂಗರಗಾ, ಮಾಳಪ್ಪ ಪೂಜಾರಿ ಸೊನ್ನ, ಸಿದ್ದಣ್ಣ ನೀರಲಕೂಡ, ಮಲ್ಲಿಕಾರ್ಜುನ ಅಕ್ಕಿ ಸೊನ್ನ, ಈರಣ್ಣ ಧನ್ನೂರ, ವಿಜಯಕುಮಾರ ಧರೇನ್, ಮುತ್ತಣ್ಣ ಪೂಜಾರಿ, ನಿಂಗಣ್ಣ ಕುಂಬಾರ ಕಲ್ಲಹಂಗರಗಾ ಸೇರಿದಂತೆ ಸಾವಿರಾರು ರೈತರು ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಾಜಿದ್‌ ಅಲಿ/ವಾರ್ತಾಭಾರತಿ

ಕಲಬುರಗಿ ಜಿಲ್ಲಾ ವರದಿಗಾರರು

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ