Jewargi | ಮತ ರಕ್ಷಣೆ ಪ್ರಜಾಪ್ರಭುತ್ವದ ಅಡಿಪಾಯ: ಜಗದೇವ ಗುತ್ತೇದಾರ್
ಮತದಾರರ ಹಕ್ಕು ರಕ್ಷಣೆಗೆ ಕಾಂಗ್ರೆಸ್ ‘ಮತ ರಕ್ಷಣೆ’ ತರಬೇತಿ ಕಾರ್ಯಾಗಾರ
ಜೇವರ್ಗಿ: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಹಿನ್ನೆಲೆಯಲ್ಲಿ ಮತದಾರರ ಹಕ್ಕುಗಳ ರಕ್ಷಣೆ ಹಾಗೂ ಬೂತ್ ಮಟ್ಟದ ಕಾರ್ಯಕರ್ತರಿಗೆ ಅರಿವು ಮೂಡಿಸುವ ಉದ್ದೇಶದಿಂದ ಜೇವರ್ಗಿ ಮತ್ತು ಯಡ್ರಾಮಿ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ವತಿಯಿಂದ ‘ಮತ ರಕ್ಷಣೆ’ ತರಬೇತಿ ಕಾರ್ಯಾಗಾರವನ್ನು ಜೇವರ್ಗಿಯ ಧರ್ಮಸಿಂಗ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಕಲಬುರಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ್, ಪ್ರಜಾಪ್ರಭುತ್ವದಲ್ಲಿ ಪ್ರತಿಯೊಂದು ಮತವೂ ಅಮೂಲ್ಯವಾಗಿದ್ದು, ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಯಾವುದೇ ಅರ್ಹ ಮತದಾರರ ಹೆಸರು ಕೈಬಿಡದಂತೆ ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ಮುಖ್ಯ ಅತಿಥಿಯಾಗಿದ್ದ ಚಿಂಚೋಳಿ ಕಾಂಗ್ರೆಸ್ ಮುಖಂಡ ಸುಭಾಷ್ ರಾಠೋಡ, ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಅಂಶಗಳು, ಬೂತ್ ಮಟ್ಟದಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಮತದಾರರ ಪಟ್ಟಿಯ ಪರಿಶೀಲನೆ ಕುರಿತು ಕಾರ್ಯಕರ್ತರಿಗೆ ಸವಿಸ್ತಾರವಾಗಿ ಮಾರ್ಗದರ್ಶನ ನೀಡಿದರು.
ಜೇವರ್ಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದಲಿಂಗರೆಡ್ಡಿ ಇಟಗಿ ಹಾಗೂ ಯಡ್ರಾಮಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರುಕ್ಕು ಪಟೇಲ್ ಇಜೇರಿ ಅಧ್ಯಕ್ಷತೆ ವಹಿಸಿ, ಇಂತಹ ತರಬೇತಿ ಕಾರ್ಯಾಗಾರಗಳು ಪಕ್ಷವನ್ನು ತಳಮಟ್ಟದಲ್ಲಿ ಮತ್ತಷ್ಟು ಬಲಪಡಿಸುವುದರ ಜೊತೆಗೆ ಮತದಾರರ ಹಕ್ಕುಗಳ ಸಂರಕ್ಷಣೆಗೆ ಸಹಕಾರಿಯಾಗಲಿವೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಾಗಾರದಲ್ಲಿ ಪಕ್ಷದ ವತಿಯಿಂದ ನೇಮಕಗೊಂಡಿರುವ ಬೂತ್ ಮಟ್ಟದ ಏಜೆಂಟರು (BLA-2), ಹಿರಿಯ ಮುಖಂಡರು, ಯುವ ನಾಯಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮತದಾರರ ಪಟ್ಟಿ ಪರಿಷ್ಕರಣೆ, ಮತ ರಕ್ಷಣೆ ಹಾಗೂ ಸಂಘಟನೆ ಬಲವರ್ಧನೆ ಕುರಿತು ತರಬೇತಿ ಪಡೆದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಜಗೋಪಾಲರೆಡ್ಡಿ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.