ಜ್ಞಾನೇಶ್ ಕುಮಾರ್ ವಜಾ, ಎಸ್‌ಐಆರ್ ರದ್ದತಿಗೆ ಆಗ್ರಹ : ಕಲಬುರಗಿಯಲ್ಲಿ ರೈಲ್ವೆ ಹಳಿಯ ಮೇಲೆ ಎಡಪಕ್ಷಗಳು, ಯುವಜನರಿಂದ ಪ್ರತಿಭಟನೆ
ಕಲಬುರಗಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ರದ್ದುಗೊಳಿಸಬೇಕು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಎಡಪಕ್ಷಗಳು ಮತ್ತು ವಿದ್ಯಾರ್ಥಿ-ಯುವಜನ ಸಂಘಟನೆಗಳ ಕಾರ್ಯಕರ್ತರು ಶನಿವಾರ ಕಲಬುರಗಿಯಲ್ಲಿ ರೈಲ್ವೆ ಹಳಿಯ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು.
ಸಿಪಿಐ(ಎಂ), ಸಿಪಿಐ ಹಾಗೂ ಎಸ್‌ಯುಸಿಐ(ಸಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳ ಕಾರ್ಯಕರ್ತರು ಪಾಲ್ಗೊಂಡಿದ್ದರು. ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಸುಮಾರು ಎರಡು ಗಂಟೆಗಳ ಕಾಲ ಸಭೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದು, ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.
ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಕೆ. ನೀಲಾ ಮಾತನಾಡಿ, ಎಸ್‌ಐಆರ್ ಮೂಲಕ ಕೋಟ್ಯಂತರ ಜನರನ್ನು ಮತದಾನದ ಹಕ್ಕಿನಿಂದ ವಂಚಿಸುವ ಅಪಾಯವಿದೆ. ಇದು ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಮಾರಕವಾದ ಕ್ರಮವಾಗಿದೆ ಎಂದು ಆರೋಪಿಸಿದರು. ದಿಲ್ಲಿಯಲ್ಲಿ ಪ್ರತಿಭಟನಾಕಾರರ ಸಂಚಾರಕ್ಕೆ ನಿರ್ಬಂಧ ವಿಧಿಸಿ, ಮೆಟ್ರೊ ಹಾಗೂ ರೈಲುಗಳ ಸಂಚಾರಕ್ಕೆ ಅಡ್ಡಿಪಡಿಸುವ ಮೂಲಕ ಜನಾಂದೋಲನವನ್ನು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ ಎಂದು ದೂರಿದರು.
ಸಿಪಿಐ ಜಿಲ್ಲಾ ಕಾರ್ಯದರ್ಶಿ ಮಹೇಶಕುಮಾರ ರಾಠೋಡ್ ಮಾತನಾಡಿ, ಎಸ್‌ಐಆರ್ ಅಸಂವಿಧಾನಿಕವಾಗಿದ್ದು, ಅದನ್ನು ರದ್ದುಗೊಳಿಸುವುದೇ ಪರಿಹಾರವಾಗಿದೆ. ಮುಖ್ಯ ಚುನಾವಣಾ ಆಯುಕ್ತರು ಆಡಳಿತಾರೂಢ ಬಿಜೆಪಿಯ ಪರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಿ, ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ಅಂತ್ಯ ಹಾಡಬೇಕು ಎಂದು ಆಗ್ರಹಿಸಿದರು.
ಎಸ್‌ಯುಸಿಐ(ಸಿ) ಜಿಲ್ಲಾ ಮುಖಂಡ ಶರ್ಮಾ ಮಾತನಾಡಿ, ಪ್ರತಿಭಟನಾಕಾರರ ಮೇಲೆ ಬಲಪ್ರಯೋಗ ಮಾಡುವ ಮೂಲಕ ಹೋರಾಟದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯ ವಾತಾವರಣ ನಿರ್ಮಾಣವಾಗಿದ್ದು, ಇದರ ವಿರುದ್ಧ ಜನರು ಸಂಘಟಿತ ಹೋರಾಟ ನಡೆಸಬೇಕು ಎಂದರು.
ಡಿವೈಎಫ್‌ಐ ರಾಜ್ಯ ಘಟಕದ ಅಧ್ಯಕ್ಷ ಲವಿತ್ರ ಮಾತನಾಡಿ, ಪ್ರತಿಭಟನೆಯಲ್ಲಿ ಜನರು ಪಾಲ್ಗೊಳ್ಳದಂತೆ ಸಾರಿಗೆ ವ್ಯವಸ್ಥೆಗೆ ನಿರ್ಬಂಧ ವಿಧಿಸುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದರು. ರೈಲು ಸಂಚಾರಕ್ಕೆ ಅಡ್ಡಿಪಡಿಸಿದರೂ ರೈಲ್ವೆ ನಿಲ್ದಾಣವನ್ನೇ ಹೋರಾಟದ ಅಂಗಳವನ್ನಾಗಿ ಮಾಡುತ್ತೇವೆ. ಪ್ರಜಾಪ್ರಭುತ್ವದ ರಕ್ಷಣೆಗಾಗಿ ಯುವಜನರು ಹೋರಾಟ ಮುಂದುವರಿಸಲಿದ್ದಾರೆ ಎಂದು ಹೇಳಿದರು.
ಎಸ್‌ಎಫ್‌ಐ ವಿದ್ಯಾರ್ಥಿ ನಾಯಕ ಗಣೇಶ ರಾಠೋಡ್ ಮಾತನಾಡಿ, ಮತದಾನದ ಹಕ್ಕು ಮತ್ತು ಯುವಜನರ ಭವಿಷ್ಯದ ರಕ್ಷಣೆಗೆ ವಿದ್ಯಾರ್ಥಿಗಳು ಬೀದಿಗಿಳಿದು ಹೋರಾಡಲಿದ್ದಾರೆ ಎಂದರು.
ಪ್ರತಿಭಟನೆಯಲ್ಲಿ ವಿದ್ಯಾರ್ಥಿ ನಾಯಕ ತುಳಜಾರಾಂ, ಮಹಿಳಾ ಸಂಘಟನೆಯ ರಾಧಾ, ಸುಧಾಮ ಧನ್ನಿ, ಭೀಮಶೆಟ್ಟಿ ಯಂಪಳ್ಳಿ, ಪಾಂಡುರಂಗ ಮಾವಿನಕರ್, ನಾಗಪ್ಪ ರಾಯಚೂರಕರ್, ಅಫಜಲ್ ಅಹಮದ್, ಸಾಹಿದ್ ಅಹಮದ್, ಡಾ. ಮೀನಾಕ್ಷಿ ಬಾಳಿ, ಕೋದಂಡರಾಮಪ್ಪ, ಮಹೇಶ ಎಸ್.ಪಿ., ಸುಜಾತಾ ಕುಸನೂರು ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಎಸ್‌ಐಆರ್ ರದ್ದು, ಮುಖ್ಯ ಚುನಾವಣಾ ಆಯುಕ್ತರ ವಜಾ ಮತ್ತು ಪ್ರಜಾಸತ್ತಾತ್ಮಕ ಪ್ರತಿಭಟನೆಯ ಹಕ್ಕಿನ ರಕ್ಷಣೆಗೆ ಆಗ್ರಹಿಸಿ ಹೋರಾಟವನ್ನು ಮುಂದುವರಿಸುವುದಾಗಿ ಸಂಘಟನೆಗಳ ಮುಖಂಡರು ತಿಳಿಸಿದರು.