×
Ad

Kalaburagi | ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ

Update: 2026-07-13 20:56 IST

ಸಾಂದರ್ಭಿಕ ಚಿತ್ರ (AI)

ಕಲಬುರಗಿ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯಾಗಲು ಕಾರಣವಾದ ಪ್ರಕರಣದಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 25,000 ರೂ. ದಂಡ ವಿಧಿಸಿ ಕಲಬುರಗಿಯ ವಿಶೇಷ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ.

ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ ಭೀಮಶ್ಯಾ ರೇವಣಸಿದ್ದಪ್ಪ ಗಡೇದ (45) ಎಂಬಾತ ಶಿಕ್ಷೆಗೆ ಗುರಿಯಾದ ಆರೋಪಿ.

ಪ್ರಕರಣದ ವಿವರದಂತೆ, 2024ರ ಸೆಪ್ಟೆಂಬರ್ 10ರಂದು ಅಪ್ರಾಪ್ತ ಬಾಲಕಿ ತನ್ನ ಹೊಲದಲ್ಲಿ ಹೆಸರು ಕೀಳುವ ಕೆಲಸ ಮಾಡುತ್ತಿದ್ದ ವೇಳೆ, ಅದೇ ಹೊಲದಲ್ಲಿ ಕೂಲಿ ಕೆಲಸಕ್ಕೆ ಬಂದಿದ್ದ ಆರೋಪಿ ಮಧ್ಯಾಹ್ನ ವೇಳೆ ಆಕೆಯನ್ನು ಬಲವಂತವಾಗಿ ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಮರ್ಯಾದೆ ಹಾಳು ಮಾಡುವುದಾಗಿ ಬೆದರಿಕೆ ಹಾಕಿದ್ದನೆಂದು ದೂರಿನಲ್ಲಿ ತಿಳಿಸಲಾಗಿತ್ತು.

ಕೆಲವು ತಿಂಗಳ ಬಳಿಕ ಬಾಲಕಿಗೆ ಮಾಸಿಕ ಋತುಚಕ್ರವಾಗದೆ ಇದ್ದ ಹಿನ್ನೆಲೆಯಲ್ಲಿ ಪೋಷಕರು ವಿವಿಧ ಆಸ್ಪತ್ರೆಗಳಲ್ಲಿ ತಪಾಸಣೆ ನಡೆಸಿದಾಗ, ಆಕೆ ಸುಮಾರು ಎಂಟು ತಿಂಗಳ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿತ್ತು. ನಂತರ 2025ರ ಮೇ 18ರಂದು ವಿಜಯಪುರದ ಖಾಸಗಿ ಆಸ್ಪತ್ರೆಯಲ್ಲಿ ಸಿಜೇರಿಯನ್ ಶಸ್ತ್ರಚಿಕಿತ್ಸೆಯ ಮೂಲಕ ಗಂಡು ಮಗುವಿಗೆ ಜನ್ಮ ನೀಡಿದ್ದಳು.

ಪ್ರಕರಣ ದಾಖಲಿಸಿಕೊಂಡ ನೆಲೋಗಿ ಪೊಲೀಸ್ ಠಾಣೆಯ ತನಿಖಾಧಿಕಾರಿಗಳು ಸಮಗ್ರ ತನಿಖೆ ನಡೆಸಿ, ಭಾರತೀಯ ನ್ಯಾಯ ಸಂಹಿತೆ (BNS) ಹಾಗೂ ಪೊಕ್ಸೋ ಕಾಯ್ದೆಯ ಸಂಬಂಧಿತ ಕಲಂಗಳಡಿ ಆರೋಪಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆಯನ್ನು ಕಲಬುರಗಿಯ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ವಿಶೇಷ ಪೋಕ್ಸೋ ನ್ಯಾಯಾಲಯ–ಎಫ್‌ಟಿಎಸ್‌ಸಿ–1) ನ್ಯಾಯಾಧೀಶ ಎಸ್.ಎಲ್. ಚವ್ಹಾಣ ನಡೆಸಿ, ಸಾಕ್ಷ್ಯಾಧಾರಗಳು ಮತ್ತು ಸಾಕ್ಷಿದಾರರ ಹೇಳಿಕೆಗಳ ಆಧಾರದ ಮೇಲೆ ಆರೋಪ ಸಾಬೀತಾಗಿರುವ ಹಿನ್ನೆಲೆ ಆರೋಪಿ ಭೀಮಶ್ಯಾಗೆ ಪೊಕ್ಸೋ ಕಾಯ್ದೆಯ ಕಲಂ 6ರಡಿ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 25,000 ರೂ. ದಂಡ ವಿಧಿಸಲಾಗಿದೆ. ದಂಡ ಪಾವತಿಸದಿದ್ದರೆ ಹೆಚ್ಚುವರಿಯಾಗಿ ಆರು ತಿಂಗಳ ಸರಳ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ಆದೇಶ ಹೊರಡಿಸಿದ್ದಾರೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ. ತುಪ್ಪದ ವಾದ ಮಂಡಿಸಿದ್ದರು. ಪ್ರಕರಣದ ವಿಚಾರಣೆ ವೇಳೆ ಸಾಕ್ಷಿದಾರರನ್ನು ಹಾಜರುಪಡಿಸುವಲ್ಲಿ ನೆಲೋಗಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಬಸವರಾಜ ಪಾಟೀಲ ಪ್ರಮುಖ ಪಾತ್ರವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News