ಕಲಬುರಗಿ | ದ್ವೇಷ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ, ಪೊಲೀಸ್ ಇಲಾಖೆ ವಿಫಲ : ಕೆ.ನೀಲಾ ಆರೋಪ
ಕಲಬುರಗಿ: ಜಿಲ್ಲೆಯಲ್ಲಿ ದ್ವೇಷ ಭಾಷಣ ಮಾಡುವವರ ವಿರುದ್ಧ ಯಾವುದೇ ಸುಮೋಟೋ ಕೇಸ್ ದಾಖಲಿಸದಿರುವುದು ಗಮನಿಸಿದರೆ ಜಿಲ್ಲಾಡಳಿತದ ವೈಫಲ್ಯ ಬಹಿರಂಗವಾಗಿದೆ ಎಂದು ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ.ನೀಲಾ ಆರೋಪಿಸಿದ್ದಾರೆ.
ನಗರದಲ್ಲಿ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ದ್ವೇಷ ಭಾಷಣಗಳನ್ನು ತಡೆಗಟ್ಟಲು ಸುಪ್ರೀಂ ಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದರೂ, ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕೈಕಟ್ಟಿ ಕುಳಿತಿದೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ದ್ವೇಷ ಭಾಷಣಗಳು ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟಿ ಸೌಹಾರ್ದ ಜಿಲ್ಲೆಯನ್ನಾಗಿ ಮಾಡಲು ಸುಪ್ರಿಂಕೋರ್ಟ್ ನ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.
ಕರ್ನಲ್ ಸೋಫಿಯಾ ಖುರೇಶಿ, ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಅವರ ಬಗ್ಗೆ ಬಿಜೆಪಿಗರು ಆಡಿರುವ ಮಾತುಗಳನ್ನು ಕೋರ್ಟ್ ಗಳೇ ಗಂಭೀರವಾಗಿ ಪರಿಗಣಿಸುತ್ತಿವೆ. ಕೋಮು ಗಲಭೆಗೆ ಪ್ರಚೋದನೆ ಭಾಷಣಗಳನ್ನು ಮಾಡುತ್ತಿರುವ ಬಿಜೆಪಿ ಮುಖಂಡರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣಗಳನ್ನು ಪೊಲೀಸರು ದಾಖಲಿಸುತ್ತಿಲ್ಲ, ಅಂಥವರ ವಿರುದ್ಧ ಸಾಮಾನ್ಯ ಜನರು ಪೊಲೀಸ್ ಠಾಣೆಗಳಿಗೆ ಹೋಗಿ ದೂರು ಕೊಡುವ ಪರಿಸ್ಥಿತಿ ಬಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ದ್ವೇಷ ಭಾಷಣಕಾರರು ದಿನೇ ದಿನೇ ಹೆಚ್ಚುತ್ತಿದ್ದಾರೆ. ಇಂತಹ ಪ್ರಕರಣಗಳು ಕೇವಲ ಉತ್ತರ ಭಾರತದ ರಾಜ್ಯಗಳಲ್ಲಿ ನಡೆಯುತ್ತಿದ್ದವು. ಈಗ ಇದು ಕಲ್ಯಾಣ ಕರ್ನಾಟಕದಲ್ಲೂ ನಡೆಯುತ್ತಿವೆ. ಅಂಥವರ ವಿರುದ್ಧ ಕ್ರಮ ಕೈಗೊಳ್ಳಲು ಕಾಂಗ್ರೆಸ್ ಸರ್ಕಾರದಿಂದ ಯಾವುದೇ ದೃಢತೆ ಇಲ್ಲ ಎಂದ ಅವರು, ರಾಜ್ಯದಲ್ಲಿ ಕೋಮುವಾದ ನಿಷೇಧ ಕಾಯ್ದೆ ಜಾರಿಗೆ ತರಬೇಕೆಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಸುಧಾಮ್ ಧನ್ನಿ, ಪಾಂಡುರಂಗ ಮಾವಿನಕರ್, ಸಲ್ಮಾನ್ ಖಾನ್ ನಗರ್, ವಿರುಪಾಕ್ಷಪ್ಪ ತಡಕಲ್ ಸೇರಿದಂತೆ ಮತ್ತಿತರರು ಇದ್ದರು.