Kalaburagi | ಬೆಳೆ ಪರಿಹಾರ ಹಣ ಸಾಲದ ಖಾತೆಗೆ ಹೊಂದಾಣಿಕೆ ಮಾಡುವಂತಿಲ್ಲ: ಬ್ಯಾಂಕ್‌ಗಳಿಗೆ ಡಿಸಿ ಫೌಝಿಯಾ ತರನ್ನುಮ್ ಎಚ್ಚರಿಕೆ
ಕಲಬುರಗಿ : ಪ್ರಸಕ್ತ 2025ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಾದ್ಯಂತ ಅಪಾರ ಪ್ರಮಾಣದ ಮಳೆ ಹಾಗೂ ಅತಿವೃಷ್ಟಿಯಿಂದ ಬೆಳೆ ಹಾನಿಯಾದ ರೈತರಿಗೆ 498.72 ಕೋಟಿ ರೂ. ಇನ್ಪುಟ್ ಸಬ್ಸಿಡಿ ಪರಿಹಾರ ಬಿಡುಗಡೆಯಾಗಿದ್ದು, ಸದರಿ ಹಣವನ್ನು ರೈತರ ಸಾಲದ ಖಾತೆಗೆ ಹೊಂದಾಣಿಕೆ ಅಥವಾ ಜಮೆ ಮಾಡುವಂತಿಲ್ಲ. ಇದನ್ನು ಉಲ್ಲಂಘಿಸಿದಲ್ಲಿ ಬ್ಯಾಂಕ್ ಮ್ಯಾನೇಜರ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಎಚ್ಚರಿಕೆ ನೀಡಿದ್ದಾರೆ.
ಸೋಮವಾರ ತಮ್ಮ ಕಚೇರಿಯಿಂದ ಜಿಲ್ಲೆಯ ಬ್ಯಾಂಕರ್ಸ್‌ಗಳೊಂದಿಗೆ ಆನ್‌ಲೈನ್ ಸಭೆ ನಡೆಸಿದ ಅವರು, ಬೆಳೆ ಪರಿಹಾರ ಯಾವುದೇ ಕಾರಣಕ್ಕೂ ಸಾಲದ ಖಾತೆಗೆ ಹೊಂದಾಣಿಕೆ ಮಾಡಬಾರದೆಂದು ಸ್ಪಷ್ಟವಾದ ಸೂಚನೆ ಬ್ಯಾಂಕ್ ಅಧಿಕಾರಿಗಳಿಗೆ ನೀಡಿದರು.
ಅತಿವೃಷ್ಟಿಯಿಂದ ಬೆಳೆ ಹಾನಿಯಾದ 3,26,183 ರೈತರಿಗೆ ಎನ್.ಡಿ.ಆರ್.ಎಫ್ ಮಾರ್ಗಸೂಚಿಯನ್ವಯ ಪರಿಹಾರದ ಜೊತೆಗೆ ಪ್ರತಿ ಹೆಕ್ಟೇರ್ ಗೆ ರಾಜ್ಯ ಸರಕಾರದಿಂದ ಹೆಚ್ಚುವರಿ 8,500 ರೂ. ಪರಿಹಾರ ಹಣ ಸೇರಿದಂತೆ ಒಟ್ಟಾರೆ ಜಿಲ್ಲೆಗೆ 498.72 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಈಗಾಗಲೇ ರೈತರ ಬ್ಯಾಂಕ್ ಖಾತೆಗೆ ಡಿ.ಬಿ.ಟಿ. ಮೂಲಕ ಪಾವತಿಸಿದೆ ಎಂದರು.
ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್, ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ರವಿಗೌಡ ಸೇರಿದಂತೆ ವಿವಿಧ ಬ್ಯಾಂಕಿನ ಅಧಿಕಾರಿಗಳು ಆನ್‌ಲೈನ್ ಸಭೆಯಲ್ಲಿ ಭಾಗಿಯಾಗಿದ್ದರು.