Kalaburagi | ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಪತ್ನಿ ಹತ್ಯೆ: ಆರೋಪಿ ಪತಿ ಪೊಲೀಸ್ ವಶಕ್ಕೆ
ಸಿದ್ದಮ್ಮ
ಕಲಬುರಗಿ: ಕೌಟುಂಬಿಕ ಕಲಹದ ಹಿನ್ನೆಲೆ ಪತಿಯೊಬ್ಬ ತನ್ನ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ಗುರುವಾರ ಮುಂಜಾನೆ ಜೇವರ್ಗಿ ತಾಲೂಕಿನ ಕಲ್ಲೂರ (ಕೆ) ಗ್ರಾಮದಲ್ಲಿ ನಡೆದಿದೆ.
ಸಿದ್ದಮ್ಮ (35) ಮೃತ ಮಹಿಳೆ.
ಪೊಲೀಸ್ ಮೂಲಗಳ ಪ್ರಕಾರ, ದಂಪತಿ ನಡುವೆ ಕಳೆದ ಕೆಲವು ದಿನಗಳಿಂದ ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯಗಳು ಉಂಟಾಗಿದ್ದವು. ಈ ಹಿನ್ನೆಲೆಯಲ್ಲಿ ಗುರುವಾರ ಮುಂಜಾನೆ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಅದು ತೀವ್ರ ಸ್ವರೂಪ ಪಡೆದುಕೊಂಡಿದೆ ಎನ್ನಲಾಗಿದೆ.
ವಾದ-ವಿವಾದದ ವೇಳೆ ಆಕ್ರೋಶಗೊಂಡ ಪತಿ ಭೂತಾಳಿ ನಾಯಿಕೋಡಿ, ಮನೆಯಲ್ಲಿದ್ದ ಹರಿತವಾದ ಆಯುಧದಿಂದ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಸಿದ್ದಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ನೆಲೋಗಿ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪ್ರಕರಣದ ಬಳಿಕ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.