Kalaburagi | ಪಂಚ ಗ್ಯಾರಂಟಿ ಅನುಷ್ಠಾನದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮವಹಿಸಿ : ಚಂದ್ರಿಕಾ ಪರಮೇಶ್ವರ್
ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ
ಕಲಬುರಗಿ: ಜಿಲ್ಲೆಯಲ್ಲಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆಯುವಲ್ಲಿ ಸಾರ್ವಜನಿಕರಿಗೆ ಯಾವುದೇ ಗೊಂದಲ ಉಂಟಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಅವುಗಳನ್ನು ತಕ್ಷಣವೇ ಪರಿಹರಿಸಬೇಕು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗುರುವಾರ ಜಿಲ್ಲಾ ಪಂಚಾಯತ್‌ನ ಹೊಸ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗೃಹಲಕ್ಷ್ಮಿ ಯೋಜನೆಯಡಿ ತಾಂತ್ರಿಕ ಕಾರಣಗಳಿಂದ ಹಣ ಜಮೆಯಾಗದ ಮಹಿಳೆಯರು ಅಗತ್ಯ ದಾಖಲೆಗಳೊಂದಿಗೆ ಸಂಬಂಧಿತ ತಾಲೂಕಿನ ಸಿಡಿಪಿಒ ಕಚೇರಿಯನ್ನು ಸಂಪರ್ಕಿಸುವಂತೆ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸರ್ಕಾರದ ಗ್ಯಾರಂಟಿ ಯೋಜನೆಗಳ ಹಣವನ್ನು ಫಲಾನುಭವಿಗಳ ಹಳೆಯ ಸಾಲಗಳಿಗೆ ಬ್ಯಾಂಕ್‌ಗಳು ಹೊಂದಾಣಿಕೆ ಮಾಡಿಕೊಳ್ಳಬಾರದು. ಬ್ಯಾಂಕ್ ಸಿಬ್ಬಂದಿ ಸಾರ್ವಜನಿಕರೊಂದಿಗೆ ಸ್ಥಳೀಯ ಭಾಷೆಯಲ್ಲಿಯೇ ವ್ಯವಹರಿಸಬೇಕು ಎಂದು ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು.
ಗೃಹಲಕ್ಷ್ಮಿ ಯೋಜನೆಯಡಿ ಜಿಲ್ಲೆಯಲ್ಲಿ 5,97,166 ಮಹಿಳೆಯರು ನೋಂದಾಯಿತರಾಗಿದ್ದಾರೆ. 2023-24ರಿಂದ 2026-27ರ ಏಪ್ರಿಲ್‌ವರೆಗೆ ಒಟ್ಟು 3,018.39 ಕೋಟಿ ರೂ. ಮೊತ್ತವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗಿದೆ. ಇದರಿಂದ ವಿವಿಧ ವರ್ಗಗಳ ಲಕ್ಷಾಂತರ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ನೆರವಾಗಿದೆ ಎಂದು ಚಂದ್ರಿಕಾ ಪರಮೇಶ್ವರ್ ತಿಳಿಸಿದರು.
ಜಿಲ್ಲಾ ಪಂಚಾಯತ್ ಸಿಇಒ ರಾಹುಲ ಎಸ್. ಸಂಕನೂರ ಮಾತನಾಡಿ, ಅನರ್ಹರಿಗೆ ಗೃಹಲಕ್ಷ್ಮಿ ಸೌಲಭ್ಯ ದೊರೆಯದಂತೆ ವಿಶೇಷ ಪರಿಶೀಲನೆ ನಡೆಯುತ್ತಿದೆ. ಗುರುತಿಸಲಾದ 9,156 ಮೃತ ಫಲಾನುಭವಿಗಳ ಪೈಕಿ 3,820 ಖಾತೆಗಳಿಗೆ ತಪ್ಪಾಗಿ ಜಮೆಯಾಗಿದ್ದ 44.34 ಲಕ್ಷ ರೂ. ವನ್ನು ಲೀಡ್ ಬ್ಯಾಂಕ್‌ಗಳ ಸಹಯೋಗದಲ್ಲಿ ವಸೂಲಿ ಮಾಡಿ ಸರ್ಕಾರಕ್ಕೆ ಜಮೆ ಮಾಡಲಾಗಿದೆ. ಉಳಿದ ಹಣ ಮರುಪಾವತಿ ಪ್ರಕ್ರಿಯೆಯಲ್ಲಿದೆ ಎಂದು ತಿಳಿಸಿದರು.
ಗೃಹಜ್ಯೋತಿ ಯೋಜನೆಯಡಿ 5.86 ಲಕ್ಷಕ್ಕೂ ಅಧಿಕ ಗ್ರಾಹಕರು ನೋಂದಾಯಿಸಿಕೊಂಡಿದ್ದು, ಹೆಚ್ಚುವರಿ ವಿದ್ಯುತ್ ಬಿಲ್ ಕುರಿತು ಉಂಟಾಗಿರುವ ಗೊಂದಲ ನಿವಾರಿಸಲು ಜೆಸ್ಕಾಂ ವಿಶೇಷ ತಂಡಗಳನ್ನು ರಚಿಸಿದೆ. ಈ ತಂಡಗಳು ಪ್ರತಿದಿನ ಸುಮಾರು 3,000 ಅರ್ಜಿಗಳನ್ನು ಇತ್ಯರ್ಥಪಡಿಸುತ್ತಿವೆ. ಹಳೆಯ ಬಾಕಿ ಅಥವಾ ಕಳೆದ ಒಂದು ವರ್ಷದ ಸರಾಸರಿ ಬಳಕೆಯನ್ನು ಮೀರಿದ ಬಳಕೆ ಇದ್ದಲ್ಲಿ ಮಾತ್ರ ಹೆಚ್ಚುವರಿ ಮೊತ್ತ ಪಾವತಿಸಬೇಕಾಗುತ್ತದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 31,807ಕ್ಕೂ ಹೆಚ್ಚು ನಿರುದ್ಯೋಗಿ ಯುವಕರು ನೋಂದಾಯಿಸಿಕೊಂಡಿದ್ದು, ಕಲಬುರಗಿ ಜಿಲ್ಲೆ ರಾಜ್ಯದಲ್ಲೇ ಎರಡನೇ ಸ್ಥಾನದಲ್ಲಿದೆ. ಫಲಾನುಭವಿಗಳು ಪ್ರತಿ ತಿಂಗಳು ಸ್ವಯಂ ಘೋಷಣೆ ಸಲ್ಲಿಸಿ ಭತ್ಯೆಯ ಜೊತೆಗೆ ‘ಯುವನಿಧಿ ಪ್ಲಸ್’ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿಯ ಸೌಲಭ್ಯ ಪಡೆಯಬಹುದು ಎಂದು ಅಧಿಕಾರಿಗಳು ತಿಳಿಸಿದರು.
ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ 22 ಕೋಟಿಗೂ ಹೆಚ್ಚು ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.
ಅನ್ನಭಾಗ್ಯ ಯೋಜನೆ ಕುರಿತು ಚರ್ಚೆ ವೇಳೆ ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವ ಪ್ರಕರಣಗಳು ಕಂಡುಬಂದರೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗಳನ್ನು ತಕ್ಷಣ ಅಮಾನತುಗೊಳಿಸಬೇಕು. ಅಧಿಕಾರಿಗಳು ನಿಯಮಿತವಾಗಿ ಸ್ಥಳ ಪರಿಶೀಲನೆ ನಡೆಸಬೇಕು ಹಾಗೂ ಪ್ರತಿ ನ್ಯಾಯಬೆಲೆ ಅಂಗಡಿಯ ಮುಂಭಾಗದಲ್ಲಿ ದೂರು ಸಲ್ಲಿಕೆ ಸಹಾಯವಾಣಿ ಸಂಖ್ಯೆಯನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಚಂದ್ರಿಕಾ ಪರಮೇಶ್ವರ್ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರುಗಳಾದ ಸೋಮಶೇಖರ ಹಿರೇಮಠ, ವಿಜಯಕುಮಾರ ಕಟ್ಟಿಮನಿ, ನಿರ್ಮಲಾ ಬರ್ಗಲಿ, ಸುರೇಶ ತಿಪ್ಪಶೆಟ್ಟಿ, ನರಸಿಂಹಲು ಕುಂಬಾರ ಸೇರಿದಂತೆ ಜಿಲ್ಲಾ ಸಮಿತಿ ಸದಸ್ಯರು, ತಾಲೂಕಿನ ಅಧ್ಯಕ್ಷರು-ಉಪಾಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಸಿ.ಪಿ.ಓ ಮಧುಮತಿ ಹೊಸಮನಿ ಉಪಸ್ಥಿತರಿದ್ದರು.