ಕಲಬುರಗಿ | ದ್ವಿತೀಯ ಪಿಯುಸಿ, ಎಸೆಸೆಲ್ಸಿ ವಿದ್ಯಾರ್ಥಿಗಳು ಪರೀಕ್ಷೆ ಪ್ರವೇಶ ಪತ್ರ ತೋರಿಸಿ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಿ: ಕೆಕೆಆರ್‌ಟಿಸಿ
ಕಲಬುರಗಿ : ಪ್ರಸಕ್ತ 2024-25ನೇ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾ.1 ರಿಂದ 20 ಮತ್ತು ಎಸೆಸೆಲ್ಸಿ ಪರೀಕ್ಷೆ ಮಾ. 21 ರಿಂದ ಏಪ್ರಿಲ್ 4ರ ವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷೆ ಪ್ರವೇಶ ಪತ್ರ ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತ ಪ್ರಯಾಣ ಮಾಡಬಹುದಾಗಿದೆ ಎಂದು ಕೆ.ಕೆ.ಆರ್.ಟಿ.ಸಿ. ಮುಖ್ಯ ಸಂಚಾರಿ ವ್ಯವಸ್ಥಾಪಕರು ಪ್ರಕಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳ ವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಲಾಗಿದೆ.
ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸುಗಳ ಕಾರ್ಯಾಚರಣಾ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸದರಿ ಮಾರ್ಗಗಳಲ್ಲಿ ಕೋರಿಕೆ ಮೇರೆ ಬಸ್ ನಿಲುಗಡೆ ನೀಡಲು ಕ್ರಮಕೈಗೊಳ್ಳುವಂತೆ ಚಾಲನಾ ಸಿಬ್ಬಂದಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.