ಚಿಂಚೋಳಿ:  ಕಲ್ಲೂರು ರೋಡ್ ಗ್ರಾಮದಲ್ಲಿ ಮನೆ ಮುಂದಿನ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮೂರು ವರ್ಷದ ಬಾಲಕನ ಮೇಲೆ ಲಾರಿ ಹರಿದು ಬಾಲಕ ಮೃತಪಟ್ಟಿರುವ ಘಟನೆ ಶನಿವಾರ ಸಂಜೆ ಸಂಭವಿಸಿದೆ.

ಪ್ರಕಾಶ್ ಎಂಬುವವರ ಮೂರು ವರ್ಷದ ಪುತ್ರ ಓಂಕಾರ ಮೃತಪಟ್ಟ ದುರ್ದೈವಿ.

ಘಟನೆಯ ವಿವರ: ಶನಿವಾರ ಸಂಜೆ ಬಾಲಕ ಓಂಕಾರ ಮನೆ ಮುಂದಿನ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬಂದ ಲಾರಿಯೊಂದರ ಚಕ್ರಗಳು ಬಾಲಕನ ಎರಡೂ ಕಾಲುಗಳ ಮೇಲೆ ಹರಿದಿವೆ. ಪರಿಣಾಮ ತೀವ್ರವಾಗಿ ಗಾಯಗೊಂಡ ಬಾಲಕನನ್ನು ತಕ್ಷಣವೇ ಕಲಬುರಗಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಲಾಯಿತು. ತದನಂತರ ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‌ಗೆ ಕರೆದೊಯ್ಯುವ ಮಾರ್ಗಮಧ್ಯೆ ಬಾಲಕ ಕೊನೆಯುಸಿರೆಳೆದಿದ್ದಾನೆ.

ಗ್ರಾಪಂ ಆಡಳಿತದ ವಿರುದ್ಧ ಆಕ್ರೋಶ:

ಕುಡಿಯುವ ನೀರಿನ ಕಾಮಗಾರಿಗಾಗಿ ಗ್ರಾಮ ಪಂಚಾಯಿತಿ ವತಿಯಿಂದ ಅಗೆದಿದ್ದ ಗುಂಡಿಯನ್ನು ಮುಚ್ಚದೆ ಹಾಗೆಯೇ ಬಿಟ್ಟು ನಿರ್ಲಕ್ಷ್ಯ ವಹಿಸಿದ್ದೇ ಈ ದುರಂತಕ್ಕೆ ನೇರ ಕಾರಣ ಎಂದು ಮೃತನ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆರೋಪಿಸಿದ್ದಾರೆ. ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯ ಬೇಜವಾಬ್ದಾರಿತನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಸೋಮವಾರ ರಾಷ್ಟ್ರೀಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ನಡೆಸಿದರು.

ರಸ್ತೆ ತಡೆಯಿಂದಾಗಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಯಿತು. ಸ್ಥಳೀಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು (ಪಿಡಿಒ) ತಕ್ಷಣವೇ ವರ್ಗಾವಣೆ ಮಾಡಬೇಕು ಮತ್ತು ದುರಂತಕ್ಕೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor