Kalaburagi | ಶರಣಬಸವ ವಿವಿ ಕ್ಯಾಂಪಸ್ ನೇಮಕಾತಿಯಲ್ಲಿ 30 ವಿದ್ಯಾರ್ಥಿಗಳು ಆಯ್ಕೆ
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯ ಹಾಗೂ ಸುರಪುರದ ವೀರಪ್ಪ ನಿಷ್ಠಿ ಎಂಜಿನಿಯರಿಂಗ್ ಕಾಲೇಜಿನ ಒಟ್ಟು 30 ವಿದ್ಯಾರ್ಥಿಗಳು ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಯಲ್ಲಿ ಉದ್ಯೋಗಕ್ಕೆ ಆಯ್ಕೆಯಾಗಿದ್ದು, ವಾರ್ಷಿಕ 3 ಲಕ್ಷ ರೂ. ವೇತನ ಪ್ಯಾಕೇಜ್‌ನೊಂದಿಗೆ ಉದ್ಯೋಗಾವಕಾಶ ಪಡೆದಿದ್ದಾರೆ.
ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ಎಕೋ ಬ್ರೇನ್ ಟೆಕ್ನಾಲಜೀಸ್ ಹಾಗೂ ಡೆಕ್ಸ್ಟ್ರಿಸ್ ಇನ್ಫೋ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ಸಹಯೋಗದಲ್ಲಿ ಕ್ಯಾಂಪಸ್ ನೇಮಕಾತಿ ಆಯೋಜಿಸಲಾಗಿತ್ತು. ವಿಶ್ವವಿದ್ಯಾಲಯದ ವಿವಿಧ ಎಂಜಿನಿಯರಿಂಗ್ ವಿಭಾಗಗಳ ಸುಮಾರು 500 ವಿದ್ಯಾರ್ಥಿಗಳು ಹಾಗೂ ಸುರಪುರದ ವೀರಪ್ಪ ನಿಷ್ಠಿ ಎಂಜಿನಿಯರಿಂಗ್ ಕಾಲೇಜಿನ 70 ವಿದ್ಯಾರ್ಥಿಗಳು ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು.
ನೇಮಕಾತಿಯಲ್ಲಿ ಶರಣಬಸವ ವಿಶ್ವವಿದ್ಯಾಲಯದ 26 ವಿದ್ಯಾರ್ಥಿಗಳು ಹಾಗೂ ವೀರಪ್ಪ ನಿಷ್ಠಿ ಎಂಜಿನಿಯರಿಂಗ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಆಯ್ಕೆಯಾದ ವಿದ್ಯಾರ್ಥಿಗಳು ತಮ್ಮ ಎಂಜಿನಿಯರಿಂಗ್ ಪದವಿ ಕೋರ್ಸ್‌ನ ಭಾಗವಾಗಿ ಬೆಂಗಳೂರಿನ ಎಕೋ ಬ್ರೇನ್ ಟೆಕ್ನಾಲಜೀಸ್ ಸಂಸ್ಥೆಯಲ್ಲಿ ಮೂರು ತಿಂಗಳ ಕಡ್ಡಾಯ ಇಂಟರ್ನ್‌ಶಿಪ್ ಪೂರ್ಣಗೊಳಿಸಬೇಕು. ಇಂಟರ್ನ್‌ಶಿಪ್ ಯಶಸ್ವಿಯಾಗಿ ಪೂರ್ಣಗೊಳಿಸಿದ ಬಳಿಕ ಸಂಸ್ಥೆಯಲ್ಲಿ ಖಾಯಂ ಉದ್ಯೋಗಕ್ಕೆ ನೇಮಕ ಮಾಡಿಕೊಳ್ಳಲಾಗುವುದು ಎಂದು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಮಾತೋಶ್ರೀ ಪೂಜ್ಯ ಡಾ. ದಾಕ್ಷಾಯಿಣಿ ಅವ್ವಾಜಿ ಹಾಗೂ ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿ ಪೂಜ್ಯ ದೊಡ್ಡಪ್ಪ ಅಪ್ಪಾಜಿ ಅವರು ಶುಭ ಹಾರೈಸಿದ್ದಾರೆ.
ವಿಶ್ವವಿದ್ಯಾಲಯದ ಕುಲಸಚಿವೆ ಡಾ. ಲಕ್ಷ್ಮಿ ಪಾಟೀಲ ಮಕಾ, ಮೌಲ್ಯಮಾಪನ ಕುಲಸಚಿವ ಡಾ. ಎಸ್.ಎಚ್. ಹೊನ್ನಳ್ಳಿ, ಡೀನ್ ಡಾ. ಶಿವಕುಮಾರ ಜವಳಿಗಿ ಹಾಗೂ ಹಣಕಾಸು ಅಧಿಕಾರಿ ಡಾ. ಕಿರಣ ಮಕಾ ಅವರು ಆಯ್ಕೆಯಾದ ವಿದ್ಯಾರ್ಥಿಗಳು ಹಾಗೂ ಅವರಿಗೆ ಮಾರ್ಗದರ್ಶನ ನೀಡಿದ ಬೋಧಕ ಸಿಬ್ಬಂದಿಯನ್ನು ಅಭಿನಂದಿಸಿದ್ದಾರೆ.