ಕಲಬುರಗಿ : ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 2023ರ ವಿಧಾನಸಭಾ ಚುನಾವಣೆಗೆ ಹೋಲಿಸಿದರೆ 2026ರ ಅಂತಿಮ ಮತದಾರರ ಪಟ್ಟಿಯಲ್ಲಿ 32,826 ಮತದಾರರು ಕಡಿಮೆಯಾಗಿರುವ ಕುರಿತು ಕಮಲಾಬಾಯಿ ದತ್ತಾತ್ರೇಯ ಕುಡಕಿ ಆತಂಕ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಮಗ್ರ ಪರಿಶೀಲನೆ ನಡೆಸಿ, ಅರ್ಹ ಮತದಾರರ ಹೆಸರುಗಳನ್ನು ಮರು ಸೇರ್ಪಡೆಗೊಳಿಸುವಂತೆ ರಾಜ್ಯದ ಮುಖ್ಯ ಚುನಾವಣಾಧಿಕಾರಿಯನ್ನು ಒತ್ತಾಯಿಸಿದ್ದಾರೆ.

2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಆಳಂದ ಕ್ಷೇತ್ರದಲ್ಲಿ 2,41,750 ಮತದಾರರಿದ್ದರು. ಆದರೆ, 2026ರ ಅಂತಿಮ ಮತದಾರರ ಪಟ್ಟಿಯ ಪ್ರಕಾರ ಈ ಸಂಖ್ಯೆ 2,08,924ಕ್ಕೆ ಇಳಿದಿದೆ. ಅಂದರೆ, ಒಟ್ಟು 32,826 ಮತದಾರರ ಕಡಿತವಾಗಿದೆ. ಇವರಲ್ಲಿ 16,469 ಪುರುಷರು ಹಾಗೂ 16,357 ಮಹಿಳೆಯರಿದ್ದಾರೆ. ಇತರೆ ಮತದಾರರ ಸಂಖ್ಯೆ 34ರಲ್ಲೇ ಉಳಿದಿದೆ.

ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಮತದಾರರ ಸಂಖ್ಯೆಯಲ್ಲಿ ಕಂಡುಬಂದಿರುವ ಈ ಭಾರೀ ಇಳಿಕೆಯು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಉದ್ಯೋಗ ಹಾಗೂ ಜೀವನೋಪಾಯಕ್ಕಾಗಿ ಬೇರೆ ನಗರಗಳಿಗೆ ವಲಸೆ ಹೋಗಿರುವ ಆಳಂದ ತಾಲೂಕಿನ ಜನರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಉಳಿಸಿಕೊಳ್ಳುವ ವಿಚಾರದಲ್ಲಿ ಆತಂಕ ಎದುರಿಸುತ್ತಿದ್ದಾರೆ. ಜನ್ಮಸ್ಥಳಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸುವಂತೆ ಅಧಿಕಾರಿಗಳು ಸೂಚಿಸುತ್ತಿರುವುದರಿಂದ ವಲಸೆ ಕಾರ್ಮಿಕರು ಹಾಗೂ ಇತರ ಅರ್ಹ ಮತದಾರರಿಗೆ ತೊಂದರೆಯಾಗುವ ಸಾಧ್ಯತೆಯಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಮತದಾನದ ಹಕ್ಕು ದೊರೆಯುವುದು ಪ್ರಜಾಪ್ರಭುತ್ವದ ಮೂಲ ಆಶಯವಾಗಿದೆ. ಹೀಗಾಗಿ, ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವ ಪ್ರಕರಣಗಳನ್ನು ನಿಯಮಾನುಸಾರ ಪರಿಶೀಲಿಸಬೇಕು. ದಾಖಲೆಗಳ ಕೊರತೆ ಅಥವಾ ವಲಸೆಯ ಕಾರಣದಿಂದ ಅರ್ಹ ನಾಗರಿಕರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಚುನಾವಣಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಆಳಂದ ಕ್ಷೇತ್ರದಲ್ಲಿ ಕಡಿತವಾಗಿರುವ 32,826 ಮತದಾರರ ಪ್ರಕರಣಗಳನ್ನು ಸಮಗ್ರವಾಗಿ ಪರಿಶೀಲಿಸಿ, ಅರ್ಹರೆಂದು ದೃಢಪಟ್ಟವರ ಹೆಸರುಗಳನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕಮಲಾಬಾಯಿ ದತ್ತಾತ್ರೇಯ ಕುಡಕಿ ರಾಜ್ಯದ ಮುಖ್ಯ ಚುನಾವಣಾಧಿಕಾರಿಯನ್ನು ಒತ್ತಾಯಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor