ಅನಿಲ್ ಕುಮಾರ್

ಕಲಬುರಗಿ: ಜಾಮೀನು ಪಡೆದ ವ್ಯಕ್ತಿಯ ಹಾಜರಾತಿ ದಾಖಲಿಸುವ ವಿಚಾರದಲ್ಲಿ 3 ಸಾವಿರ ರೂ. ಲಂಚ ಪಡೆದ ಆರೋಪದ ಮೇರೆಗೆ ಸುಲೇಪೇಟ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಅನಿಲ್ ಕುಮಾರ್ ಅವರನ್ನು ಕರ್ನಾಟಕ ಲೋಕಾಯುಕ್ತ ಪೊಲೀಸರು ಬಲೆಗೆ ಬೀಳಿಸಿಕೊಂಡಿದ್ದಾರೆ.

ಚಿಂಚೋಳಿ ತಾಲೂಕಿನ ಸುಲೇಪೇಟ ಪೊಲೀಸ್ ಠಾಣೆ ವ್ಯಾಪ್ತಿಯ ಗಡಿಕೇಶ್ವರ ಗ್ರಾಮದ ಚಂದ್ರಕಾಂತ ರಂಗನೂರು ನೀಡಿದ ದೂರಿನ ಆಧಾರದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.

ದೂರುದಾರರು ನ್ಯಾಯಾಲಯದಿಂದ ಜಾಮೀನು ಪಡೆದಿದ್ದು, ಪ್ರತಿತಿಂಗಳು ಸುಲೇಪೇಟ ಪೊಲೀಸ್ ಠಾಣೆಯ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ನ್ಯಾಯಾಲಯ ಸೂಚಿಸಿತ್ತು ಎನ್ನಲಾಗಿದೆ. ಆದರೆ ಠಾಣೆಯ ರೈಟರ್ ಆಗಿದ್ದ ಕಾನ್‌ಸ್ಟೆಬಲ್ ಅನಿಲ್ ಕುಮಾರ್ ಅವರು ಪ್ರತಿ ರವಿವಾರ ಠಾಣೆಗೆ ಬಂದು ಹಾಜರಾತಿ ದಾಖಲಿಸಿಕೊಳ್ಳುವಂತೆ ಒತ್ತಾಯಿಸುತ್ತಿದ್ದರು. ಅಲ್ಲದೆ, ಹಾಜರಾಗದಿದ್ದರೆ ಜಾಮೀನು ರದ್ದುಪಡಿಸಿ ಮತ್ತೆ ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗೆ ಪದೇಪದೇ ಅಲೆದಾಡುವುದನ್ನು ತಪ್ಪಿಸಲು ಮಧ್ಯವರ್ತಿಯೊಬ್ಬರ ಮೊಬೈಲ್ ಸಂಖ್ಯೆಗೆ 3 ಸಾವಿರ ರೂ. ಲಂಚದ ಹಣವನ್ನು ಫೋನ್‌ಪೇ ಮೂಲಕ ವರ್ಗಾಯಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದೂರಿನ ಆಧಾರದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಲಂಚದ ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ ಕಾನ್‌ಸ್ಟೆಬಲ್ ಅನಿಲ್ ಕುಮಾರ್ ಅವರನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕಲಬುರಗಿ ಪೊಲೀಸ್ ಅಧೀಕ್ಷಕ ಸಿದ್ಧರಾಜು ಸಿ. ಅವರ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್ ಹಾಗೂ ತನಿಖಾಧಿಕಾರಿ ರವಿಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor