Kalaburagi | ಉದ್ಯೋಗ ಕೌಶಲ್ಯ ತರಬೇತಿಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿ : ಡಿಸಿ ಇಕ್ರಮ್ ಶರೀಫ್
ಜಿಲ್ಲಾ ಕೌಶಲ್ಯ ಸಮಿತಿ ಸಭೆ
ಕಲಬುರಗಿ : ಉದ್ಯಮಗಳ ಬೇಡಿಕೆಗೆ ಅನುಗುಣವಾಗಿ ಯುವಕ-ಯುವತಿಯರಿಗೆ ಉದ್ಯೋಗ ಕೌಶಲ್ಯ ತರಬೇತಿ ನೀಡುವ ಮೂಲಕ ಉದ್ಯೋಗಾವಕಾಶಗಳನ್ನು ಹೆಚ್ಚಿಸಬೇಕು. ಕೌಶಲ್ಯ ಕರ್ನಾಟಕ ಸೇರಿದಂತೆ ವಿವಿಧ ಮಹತ್ವಾಕಾಂಕ್ಷಿ ಯೋಜನೆಗಳು ಹಾಗೂ ತರಬೇತಿ ಕಾರ್ಯಕ್ರಮಗಳಲ್ಲಿ ನಿಗದಿತ ಗುರಿಯಂತೆ ಶೇ.100ರಷ್ಟು ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅಧಿಕಾರಿಗಳಿಗೆ ಸೂಚಿಸಿದರು.
ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕೌಶಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಕೈಗಾರಿಕಾ ವಲಯಗಳೊಂದಿಗೆ ಸಮನ್ವಯ ಸಾಧಿಸುವುದು ಅತ್ಯಗತ್ಯ. ಕೆಲವು ಕೈಗಾರಿಕೆಗಳು ಮತ್ತು ಸಂಸ್ಥೆಗಳು ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವಲ್ಲಿ ನಿರೀಕ್ಷಿತ ಮಟ್ಟದಲ್ಲಿ ಸ್ಪಂದಿಸುತ್ತಿಲ್ಲ ಎಂಬ ದೂರುಗಳಿವೆ. ಅಂತಹ ಸಂಸ್ಥೆಗಳೊಂದಿಗೆ ಅಧಿಕಾರಿಗಳು ನೇರವಾಗಿ ಸಭೆ ನಡೆಸಿ, ಸ್ಥಳೀಯ ಯುವಕರಿಗೆ ಹೆಚ್ಚಿನ ಉದ್ಯೋಗ ಹಾಗೂ ಅಪ್ರೆಂಟಿಸ್‌ಶಿಪ್ ಅವಕಾಶಗಳನ್ನು ಕಲ್ಪಿಸುವ ಜವಾಬ್ದಾರಿ ನಿರ್ವಹಿಸಬೇಕು ಎಂದು ಸೂಚಿಸಿದರು.
ಶಿಕ್ಷಣ, ಆರೋಗ್ಯ, ಕೃಷಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಗ್ರಾಮೀಣ ಹಾಗೂ ನಗರ ಪ್ರದೇಶಗಳ ನಿರುದ್ಯೋಗಿ ಯುವಕ-ಯುವತಿಯರಿಗೆ ಸೂಕ್ತ ಉದ್ಯೋಗ ತರಬೇತಿ ನೀಡಿ ಸ್ವಾವಲಂಬಿಗಳನ್ನಾಗಿ ಮಾಡಲು ವಿಶೇಷ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ, ಕೈಗಾರಿಕೆ, ತರಬೇತಿ ಹಾಗೂ ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರವೀಂದ್ರನಾಥ ಬಾಳ್ಳಿ, ಉಪನಿರ್ದೇಶಕಿ ಡಾ. ರುಬೀನಾ ಪರ್ವೀನ್, ಸಹಾಯಕ ನಿರ್ದೇಶಕ ಟಿ.ಕೆ. ಯರಗಲ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ನಾಗೂಬಾಯಿ ಸೂರ್ಯವಂಶಿ, ಡಿಡಿಪಿಐ ಚೆನ್ನಬಸಪ್ಪ ಮುಧೋಳ, ಕೆಕೆಸಿಸಿಐ ಅಧ್ಯಕ್ಷ ಶರಣಪ್ಪ ಪಪ್ಪಾ, ಕಾರ್ಯದರ್ಶಿ ಶಿವರಾಜ ಇಂಗಿನಶೆಟ್ಟಿ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕಿ ಭಾರತಿ ಎಸ್.ಎಸ್. ಸೇರಿದಂತೆ ಸರ್ಕಾರಿ ಐಟಿಐ ಮತ್ತು ಜಿಟಿಟಿಸಿ ಸಂಸ್ಥೆಗಳ ಪ್ರಾಂಶುಪಾಲರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.