Kalaburagi | ಗಾಂಧೀಜಿ, ಶಾಸ್ತ್ರಿ ಅವರ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ : ಡಾ.ತಾತ್ಯಾರಾವ ಕಾಂಬಳೆ
ಕಲಬುರಗಿ: ಮಹಾತ್ಮ ಗಾಂಧೀಜಿ ಅವರ ಜೀವನದ ವಿವಿಧ ಆಯಾಮಗಳನ್ನು ತಿಳಿದುಕೊಳ್ಳುವ ಅವಶ್ಯಕತೆ ಇದೆ. ಅವರು ಪ್ರತಿಪಾದಿಸಿದ ಮೌಲ್ಯಗಳು ಹಾಗೂ ವಿಚಾರಧಾರೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಡಾ.ತಾತ್ಯಾರಾವ ಕಾಂಬಳೆ ಹೇಳಿದರು.
ನಗರದ ನೂತನ ವಿದ್ಯಾಲಯ ಸಂಸ್ಥೆಯ ಪದವಿ ಮಹಾವಿದ್ಯಾಲಯದ ಅನಂತರಾವ ದೇಶಮುಖ ಸಭಾಗೃಹದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 158ನೇ ಹಾಗೂ ಶಾಂತಿದೂತ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 123ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾರುತಿರಾವ ಗೋವಿಂದರಾವ ಮುಳೆ, ಎಂ.ಎಲ್.ಸಿ., ಅವರು ನೂತನ ವಿದ್ಯಾಲಯ ಸಂಸ್ಥೆಯ ಹಿರಿಮೆ ಹಾಗೂ ಗರಿಮೆ ಕುರಿತು ಅಭಿಮಾನದ ನುಡಿಗಳನ್ನಾಡಿದರು. ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜೀವನ ಚರಿತ್ರೆ ಕುರಿತು ಮಾತನಾಡಿದರು.
ಮುಖ್ಯ ಅತಿಥಿಯಾಗಿ ಮಾತನಾಡಿದ ಡಾ. ತಾತ್ಯಾರಾವ ಕಾಂಬಳೆ ಅವರು, ಸುಭಾಷ್ ಚಂದ್ರ ಬೋಸ್ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಮಾಡಿದ ತ್ಯಾಗವನ್ನು ಸ್ಮರಿಸಿದರು. ಗಾಂಧೀಜಿ ಕಂಡ ಕನಸಿನ ಭಾರತದ ಕುರಿತು ಮಾತನಾಡಿದ ಅವರು, ಮಹಾತ್ಮ ಗಾಂಧೀಜಿ ಅವರ ಜೀವನ ಹಾಗೂ ವಿಚಾರಧಾರೆಗಳನ್ನು ಅರಿತುಕೊಳ್ಳುವ ಅಗತ್ಯವಿದೆ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ನೂತನ ವಿದ್ಯಾಲಯ ಸಂಸ್ಥೆಯ ಅಧ್ಯಕ್ಷ ಡಾ. ಗೌತಮ ಆರ್. ಜಹಗೀರದಾರ, ಮಹಾನ್ ವ್ಯಕ್ತಿಗಳ ಜಯಂತಿಗಳ ಮೂಲಕ ಅವರ ವ್ಯಕ್ತಿತ್ವದ ಪರಿಚಯವಾಗುತ್ತದೆ. ಅವರು ಅಳವಡಿಸಿಕೊಂಡಿದ್ದ ಮಾನವೀಯ ಮೌಲ್ಯಗಳನ್ನು ನಮ್ಮ ಜೀವನದಲ್ಲಿಯೂ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ವೇದಿಕೆಯಲ್ಲಿ ನೂತನ ವಿದ್ಯಾಲಯ ಸಂಸ್ಥೆಯ ಕಾರ್ಯದರ್ಶಿ ಅಭಿಜಿತ ಎ. ದೇಶಮುಖ, ನೂತನ ವಿದ್ಯಾಲಯ ಸಂಸ್ಥೆಯ ಟ್ರಸ್ಟಿನ ಅಧ್ಯಕ್ಷ ಸುರೇಂದ್ರ ಜಾಜಿ, ಟ್ರಸ್ಟಿನ ಕಾರ್ಯದರ್ಶಿ ರವೀಂದ್ರ ಟೆಂಗಳಿ ಹಾಗೂ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ದಯಾನಂದ ಎಂ. ಶಾಸ್ತ್ರಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ನೂತನ ವಿದ್ಯಾಲಯ ಸಂಸ್ಥೆಯ ಪದಾಧಿಕಾರಿಗಳು, ವಿವಿಧ ಪ್ರಕಲ್ಪಗಳ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ಗಣ್ಯರು ಮತ್ತು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ‘ಅವರ ವಿಚಾರಧಾರೆಗಳ ಪ್ರಸ್ತುತತೆ–ಒಂದು ಸಪ್ತಾಹ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಹುಮಾನ ಪಡೆದ ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.
ನೂತನ ವಿದ್ಯಾಲಯ ಪದವಿ ಮಹಾವಿದ್ಯಾಲಯದ ನಿರ್ದೇಶಕ ಪ್ರೊ. ಗೋವಿಂದ ಪೂಜಾರ ಸ್ವಾಗತಿಸಿದರು. ಡಾ. ವಿಷ್ಣು ಗುಂಡಗುರ್ಕಿ ಕಾರ್ಯಕ್ರಮ ನಿರೂಪಿಸಿದರು. ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ದಯಾನಂದ ಎಂ. ಶಾಸ್ತ್ರಿ ವಂದಿಸಿದರು.
ಕಾರ್ಯಕ್ರಮದ ಬಳಿಕ ಡಾ. ಮಹೇಶಕುಮಾರ ಬಡಿಗೇರ ಹಾಗೂ ಸಂಗೀತ ವಿಭಾಗದ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಸುಶ್ರಾವ್ಯವಾಗಿ ರಾಮಧುನ್ ಹಾಡಿದರು. ಇದೇ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಅವರ ಮೂರ್ತಿಗೆ ಹೂವಿನ ಹಾರ ಹಾಕಿ ನಮನ ಸಲ್ಲಿಸಲಾಯಿತು.
ಕಲಬುರಗಿ ದಕ್ಷಿಣ ವಲಯ ಶಾಸಕ ಅಲ್ಲಮಪ್ರಭು ಪಾಟೀಲ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.