ಕಲಬುರಗಿ: ಸರ್ಕಾರಿ ಶಾಲೆಗಳ ವಿಲೀನ ಹಾಗೂ ಮುಚ್ಚುವಿಕೆ ಕ್ರಮವನ್ನು ಖಂಡಿಸಿ, ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ರಕ್ಷಣೆಗಾಗಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್ (ಎಐಡಿಎಸ್‌ಒ) ನೇತೃತ್ವದಲ್ಲಿ ಶುಕ್ರವಾರ ನಗರದ ಎಸ್‌ವಿಪಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಮಾತನಾಡಿದ ಎಐಡಿಎಸ್‌ಒ ಕಲಬುರಗಿ ಜಿಲ್ಲಾ ಕಾರ್ಯದರ್ಶಿ ವೆಂಕಟೇಶ ದೇವದುರ್ಗ, ಕಾಂಗ್ರೆಸ್ ನಾಯಕರು ದೇಶಾದ್ಯಂತ ಪ್ರಜಾಪ್ರಭುತ್ವ ಉಳಿಸುವ ಯಾತ್ರೆ ನಡೆಸುತ್ತಿದ್ದಾರೆ. ಆದರೆ, ರಾಜ್ಯದಲ್ಲಿ ಬಡ ಮಕ್ಕಳಿಗೆ ಶಿಕ್ಷಣ ನೀಡುವ ಸರ್ಕಾರಿ ಶಾಲೆಗಳನ್ನು ಮುಚ್ಚುವ ಮೂಲಕ ಯಾವ ಪ್ರಜಾಪ್ರಭುತ್ವವನ್ನು ಉಳಿಸಲು ಹೊರಟಿದ್ದಾರೆ ಎಂದು ಪ್ರಶ್ನಿಸಿದರು.

ಸರ್ಕಾರಿ ಶಾಲೆಗಳನ್ನು ಮುಚ್ಚುವ ಮತ್ತು ವಿಲೀನಗೊಳಿಸುವ ಮೂಲಕ ಬಡ ಹಾಗೂ ಕೂಲಿ ಕಾರ್ಮಿಕರ ಮಕ್ಕಳ ಶಿಕ್ಷಣದ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಸರ್ಕಾರ ಕೂಡಲೇ ಈ ಜನವಿರೋಧಿ ಕ್ರಮವನ್ನು ಕೈಬಿಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕಾಂಗ್ರೆಸ್ ಸರ್ಕಾರದ ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆಯ ಹೆಸರಿನಲ್ಲಿ ರಾಜ್ಯದ 45 ಸಾವಿರ ಸರ್ಕಾರಿ ಶಾಲೆಗಳನ್ನು ಮುಚ್ಚುವ ಉದ್ದೇಶ ಹೊಂದಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ-2020) ಜಾರಿಯೊಂದಿಗೆ ಏಷ್ಯನ್ ಅಭಿವೃದ್ಧಿ ಬ್ಯಾಂಕ್ (ಎಡಿಬಿ) ವಿಧಿಸಿರುವ ಅಪಾಯಕಾರಿ ಷರತ್ತುಗಳಿಗೆ ಸರ್ಕಾರ ಮಣಿದು, ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಖಾಸಗಿಯವರ ಮಾರುಕಟ್ಟೆಗೆ ಒಪ್ಪಿಸಲು ಮುಂದಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವ ಬದಲು ಸರ್ಕಾರಿ ಶಾಲೆಗಳನ್ನು ಮುಚ್ಚುವ ಕ್ರಮ ಕೈಬಿಡಬೇಕು ಹಾಗೂ ಬಡ ಮಕ್ಕಳ ಶಿಕ್ಷಣದ ಹಕ್ಕನ್ನು ರಕ್ಷಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಅಬ್ದುಲ್ ವಾಹೀದ್, ಪ್ರೀತಿ ದೊಡ್ಡಮನಿ, ಗೋವಿಂದ ಯಳವಾರ, ನಾಗರಾಜ್, ಸ್ಪೂರ್ತಿ, ಯುವರಾಜ್, ಬಾಬು ಸೇರಿದಂತೆ ಎಐಡಿಎಸ್‌ಒ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor