ಕಲಬುರಗಿ : ಸರ್ಕಾರಿ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಎಸ್‌ಎಫ್‌ಐ (ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ) ವತಿಯಿಂದ ಗುರುವಾರ ನಗರದಲ್ಲಿ ನಡೆದ ಪ್ರತಿಭಟನೆ ವೇಳೆ, ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ ಸಂದರ್ಭದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್‌ವೊಬ್ಬರು ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದ ಬಳಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮುತ್ತಿಗೆ ಹಾಕಲು ಪ್ರತಿಭಟನಾಕಾರರು ಯತ್ನಿಸಿದ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆಯಲು ಮುಂದಾದರು. ಈ ವೇಳೆ ಎಸ್‌ಎಫ್‌ಐ ರಾಜ್ಯ ಸಮಿತಿಯ ಸದಸ್ಯ ಇಮಾಮ್ ನದಾಫ್, ಜಿಲ್ಲಾಧ್ಯಕ್ಷ ಸರ್ವೇಶ್ ಮಾವಿನಕರ್ ಸೇರಿದಂತೆ ಹಲವು ಕಾರ್ಯಕರ್ತರ ಮೇಲೆ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗುರು ಪಾಟೀಲ್ ಹಲ್ಲೆ ನಡೆಸಿದ್ದಾರೆ ಎಂದು ಎಸ್‌ಎಫ್‌ಐ ಆರೋಪಿಸಿದೆ.

ಘಟನೆಗೆ ಸಂಬಂಧಿಸಿದ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಕಾರ್ಯಕರ್ತರನ್ನು ವಶಕ್ಕೆ ಪಡೆಯುವ ವೇಳೆ ಪೊಲೀಸ್ ಅಧಿಕಾರಿ ಲಾಠಿ ಹಾಗೂ ಕೈಯಿಂದ ಹಲ್ಲೆ ನಡೆಸಿರುವುದಾಗಿ ಎಸ್‌ಎಫ್‌ಐ ಆರೋಪಿಸಿದೆ.

ಸರ್ಕಾರಿ ಶಾಲೆಗಳ ಉಳಿವಿಗಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ ಎಂದು ಎಸ್‌ಎಫ್‌ಐ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಿಂದ ಅಧಿಕೃತ ಪ್ರತಿಕ್ರಿಯೆ ಇನ್ನೂ ಲಭ್ಯವಾಗಿಲ್ಲ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor