Kalaburagi | ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಪ್ರಕರಣ ದಾಖಲು
ಸಾಂದರ್ಭಿಕ ಚಿತ್ರ | Photo credit : PTI
ಕಲಬುರಗಿ: ನಗರದ ಹೊರವಲಯದ ಗ್ರಾಮವೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಬಾಲಕಿ ತನ್ನ ತಾಯಿಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಳು. ದಸರಾ ರಜೆ ಇದ್ದ ಕಾರಣ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಳು ಎನ್ನಲಾಗಿದೆ. ತಾಯಿ ಕೂಲಿ ಕೆಲಸಕ್ಕೆ ತೆರಳಿದ್ದ ಸಂದರ್ಭದಲ್ಲಿ, ಪಕ್ಕದ ಮನೆಯ ನಿವಾಸಿ ಎನ್ನಲಾದ 30 ವರ್ಷದ ವ್ಯಕ್ತಿಯೊಬ್ಬ ಮನೆಗೆ ಪ್ರವೇಶಿಸಿ ಬಾಲಕಿಯ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಬಾಲಕಿಯ ಕೂಗಾಟ ಕೇಳಿ ಪಕ್ಕದ ಮನೆಯ ವ್ಯಕ್ತಿಯೊಬ್ಬರು ಸ್ಥಳಕ್ಕೆ ಬಂದಾಗ ಆರೋಪಿ ಅಲ್ಲಿಂದ ತೆರಳಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಸಂಬಂಧ ಆರೋಪಿಯ ವಿರುದ್ಧ ಪೋಕ್ಸೊ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ಕಲಂಗಳಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.