ಯಡ್ರಾಮಿ: ಸಂವಿಧಾನ ದಿನದಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಹಾಗೂ ಸಂವಿಧಾನದ ಪೀಠಿಕೆಯನ್ನು  ನೆಲದ ಮೇಲೆ ಇರಿಸಿ ಅಧಿಕಾರಿಗಳು ಅಗೌರವ ತೋರಿರುವ ಘಟನೆ ಯಡ್ರಾಮಿ ತಾಲೂಕಿನ ಇಜೇರಿ ಗ್ರಾಮದಲ್ಲಿ ಕೇಳಿಬಂದಿದೆ.

ಇಜೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಮೃತ ಸರೋವರ ಯೋಜನೆಯಡಿ ಕೆರೆ ಪುನರುಜ್ಜೀವನ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಸಂವಿಧಾನ ದಿನದ ಅಂಗವಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಧ್ವಜಾರೋಹಣದ ವೇದಿಕೆಯ ಸಮೀಪವೇ ಅಂಬೇಡ್ಕರ್ ಅವರ ಭಾವಚಿತ್ರ ಹಾಗೂ ಸಂವಿಧಾನದ ಪೀಠಿಕೆಯನ್ನು ನೆಲದ ಮೇಲೆ ಇರಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಇಜೇರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜೇಶ್ ಕಂಬಾರ, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಅನಿಲಕುಮಾರ ಮಾನಪಡೆ, ಪಂಚಾಯಿತಿ ಸಿಬ್ಬಂದಿ ಹಾಗೂ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳಿಗೆ ಸಂವಿಧಾನದ ಮಹತ್ವ ಮತ್ತು ಆಶಯಗಳನ್ನು ತಿಳಿಸಬೇಕಾದ ಕಾರ್ಯಕ್ರಮದಲ್ಲಿಯೇ ಸಂವಿಧಾನ ಶಿಲ್ಪಿಯ ಭಾವಚಿತ್ರ ಹಾಗೂ ಪೀಠಿಕೆಯನ್ನು ನೆಲದ ಮೇಲೆ ಇರಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಸಂವಿಧಾನ ದಿನದಂತಹ ಮಹತ್ವದ ಸಂದರ್ಭದಲ್ಲಿ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯ. ಅದರಲ್ಲೂ ಜವಾಬ್ದಾರಿಯುತ ಹುದ್ದೆಯಲ್ಲಿರುವ ಅಧಿಕಾರಿಗಳು ಕಾರ್ಯಕ್ರಮ ಆಯೋಜಿಸುವಾಗ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಿತ್ತು. ಈ ಕುರಿತು ಮೇಲಧಿಕಾರಿಗಳು ಸಮಗ್ರ ತನಿಖೆ ನಡೆಸಿ, ನಿರ್ಲಕ್ಷ್ಯ ಸಾಬೀತಾದಲ್ಲಿ ಸಂಬಂಧಪಟ್ಟವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಇಜೇರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜೇಶ್ ಕಂಬಾರ, ಪ್ರತಿ ವರ್ಷ ಯಾವ ರೀತಿಯಲ್ಲಿ ಸಂವಿಧಾನ ಸಮರ್ಪಣೆ ದಿನ ಆಚರಿಸುತ್ತೇವೆಯೋ ಅದೇ ರೀತಿಯಲ್ಲಿ ಈ ವರ್ಷವೂ ಆಚರಿಸಲಾಗಿದೆ ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಸ್ಥಳೀಯ ನಿವಾಸಿ ಮಾಂತೇಶ, ಎರಡು ಫೋಟೋಗಳನ್ನು ಗೌರವಯುತವಾಗಿ ಧ್ವಜದ ಕಟ್ಟಿ ಅಥವಾ ಸೂಕ್ತ ವೇದಿಕೆಯ ಮೇಲೆ ಇಡಬಹುದಿತ್ತು. ಅದಕ್ಕೆ ಅವಕಾಶವಿದ್ದರೂ ನೆಲದ ಮೇಲೆ ಇಟ್ಟಿರುವುದೇಕೆ? ಸಂವಿಧಾನ ದಿನದಂದೇ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಹಾಗೂ ಸಂವಿಧಾನದ ಪೀಠಿಕೆಗೆ ಈ ರೀತಿ ಅಗೌರವ ತೋರಿಸಿರುವುದು ಖಂಡನೀಯ ಎಂದು ತಿಳಿಸಿದ್ದಾರೆ.  

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor