ಕಲಬುರಗಿ | ಜೆಜೆಎಂ ಕಾಮಗಾರಿಯಲ್ಲಿ ಕಳಪೆ ಗುಣಮಟ್ಟ ಆರೋಪ: ಬಿಲ್ ತಡೆಹಿಡಿಯಲು ಕರವೇ ಆಗ್ರಹ
ಸೇಡಂ: ತಾಲೂಕಿನ ಬೇನಕನಹಳ್ಳಿ–ನಾಮವಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆಯಡಿ ನಡೆಯುತ್ತಿರುವ ವಿವಿಧ ಕಾಮಗಾರಿಗಳು ಕಳಪೆ ಗುಣಮಟ್ಟದಿಂದ ಕೂಡಿವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಆರೋಪಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
2024–25ನೇ ಸಾಲಿನ ಜೆಜೆಎಂ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿರುವ ಕಾಮಗಾರಿಗಳಲ್ಲಿ ನಿಯಮಾನುಸಾರ ಗುಣಮಟ್ಟ ಕಾಪಾಡಲಾಗಿಲ್ಲ. ಸಾರ್ವಜನಿಕರ ತೆರಿಗೆ ಹಣದಿಂದ ನಡೆಯುತ್ತಿರುವ ಯೋಜನೆಗಳಲ್ಲಿ ಗುಣಮಟ್ಟದ ಕೊರತೆ ಕಂಡುಬಂದಿದ್ದು, ಇದರಿಂದ ಗ್ರಾಮಸ್ಥರಿಗೆ ಸಮರ್ಪಕ ಸೌಲಭ್ಯ ದೊರೆಯುವಲ್ಲಿ ಸಮಸ್ಯೆಯಾಗುವ ಸಾಧ್ಯತೆ ಇದೆ ಎಂದು ಕರವೇ ಮುಖಂಡರು ತಿಳಿಸಿದ್ದಾರೆ.
ಕಾಮಗಾರಿ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಕಾಮಗಾರಿಯ ಗುಣಮಟ್ಟದ ಬಗ್ಗೆ ಸಮಗ್ರ ತನಿಖೆ ನಡೆಸಿ, ದೋಷಗಳು ಕಂಡುಬಂದಲ್ಲಿ ಸಂಬಂಧಪಟ್ಟ ಗುತ್ತಿಗೆದಾರರ ಬಿಲ್‌ಗಳನ್ನು ತಕ್ಷಣ ತಡೆಹಿಡಿಯಬೇಕು ಎಂದು ಆಗ್ರಹಿಸಿದರು.
ಈ ಕುರಿತು ಬೇನಕನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಈಗಾಗಲೇ ಮನವಿ ಪತ್ರ ಸಲ್ಲಿಸಲಾಗಿದ್ದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ಬೇಸರದ ಸಂಗತಿಯಾಗಿದೆ ಎಂದು ಅವರು ಆರೋಪಿಸಿದರು. ಅಧಿಕಾರಿಗಳು ನಿರ್ಲಕ್ಷ್ಯ ಮುಂದುವರಿಸಿದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಾರ್ವಜನಿಕರ ಹಿತದೃಷ್ಟಿಯಿಂದ ಜೆಜೆಎಂ ಕಾಮಗಾರಿಗಳ ಗುಣಮಟ್ಟದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕರವೇ ಕಾರ್ಯಕರ್ತರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ನರಸಪ್ಪ, ಸಾಗರ, ಸಂತೋಷ, ಅರ್ಜುನ್, ನಾಗೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.