ಕಲಬುರಗಿ | ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್‌ರಿಗೆ ನಿಂದಿಸಿದ ಆರೋಪಿಗಳ ಬಂಧನಕ್ಕೆ ಬಿಜೆಪಿ ಆಗ್ರಹ
ಕಲಬುರಗಿ: ಬಿಜೆಪಿ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ (ಅಪ್ಪುಗೌಡ) ರೇವೂರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ 18 ಕಿಡಿಗೇಡಿಗಳ ವಿರುದ್ಧ ತಕ್ಷಣ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿರುವ ಜಿಲ್ಲಾ ಬಿಜೆಪಿ, ಸರ್ಕಾರಕ್ಕೆ ಮೂರು ದಿನಗಳ ಗಡುವು ನೀಡಿದೆ. ನಿಗದಿತ ಅವಧಿಯಲ್ಲಿ ಕ್ರಮ ಕೈಗೊಳ್ಳದಿದ್ದರೆ ವಾರದೊಳಗೆ 10 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರೊಂದಿಗೆ ನಗರದಲ್ಲಿ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದೆ.
ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ಗ್ರಾಮೀಣ ಘಟಕದ ಅಧ್ಯಕ್ಷ ಅಶೋಕ ಬಗಲಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಜೂನ್ 1ರಂದು ನಡೆದ ಪ್ರತಿಭಟನಾ ರ‍್ಯಾಲಿಯಲ್ಲಿ ದತ್ತಾತ್ರೇಯ ಪಾಟೀಲ್ ರೇವೂರ ಅವರು ಕೇವಲ ಹಿಂದಿನ ರಾಜಕೀಯ ಬೆಳವಣಿಗೆಗಳನ್ನು ಉಲ್ಲೇಖಿಸಿ ಮಾತನಾಡಿದ್ದರು. ಆದರೆ ಅವರ ಭಾಷಣವನ್ನು ಉದ್ದೇಶಪೂರ್ವಕವಾಗಿ ತಪ್ಪಾಗಿ ಅರ್ಥೈಸಿ, ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನದ ಭಾಗವಾಗಿ ಸುಳ್ಳು ಆರೋಪಗಳನ್ನು ಮಾಡಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಕೆಲ ಪಾಲಿಕೆ ಸದಸ್ಯರು ಮತ್ತು ಕಾರ್ಯಕರ್ತರು ನಗರದ ಜಗತ್ ವೃತ್ತದಿಂದ ರೈಲ್ವೆ ನಿಲ್ದಾಣದವರೆಗೆ ಯಾವುದೇ ಪೂರ್ವಾನುಮತಿಯಿಲ್ಲದೆ ಬೈಕ್ ರ‍್ಯಾಲಿ ನಡೆಸಿ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಿಸಿದ್ದಾರೆ. ಅಲ್ಲದೆ, ರೇವೂರ ವಿರುದ್ಧ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಹಾಕಿರುವ ವಿಡಿಯೊಗಳು ಮತ್ತು ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ಕುರಿತು ದೂರು ನೀಡಲು ಹೋದರೂ ಪೊಲೀಸರು ಪ್ರಕರಣ ದಾಖಲಿಸಲು ಮುಂದಾಗುತ್ತಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಮಾತನಾಡಿ, “ರೇವೂರ ವಿರುದ್ಧ ಕಾಂಗ್ರೆಸ್ ಮುಖಂಡರು ನೀಡಿರುವ ಆಧಾರರಹಿತ ದೂರನ್ನು ಸರ್ಕಾರ ತಕ್ಷಣ ವಜಾಗೊಳಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಅವರ ತೇಜೋವಧೆ ಮಾಡಿದ 18 ಮಂದಿಯ ವಿರುದ್ಧ ಪ್ರಕರಣ ದಾಖಲಿಸದಿದ್ದರೆ ಬಿಜೆಪಿ ಹೋರಾಟದ ಹಾದಿ ಹಿಡಿಯಲಿದೆ. ಆಳಂದ ಪ್ರಕರಣವನ್ನು ಸರ್ಕಾರವೇ ದಾಖಲಿಸಿ ನಂತರ ವಾಪಸ್ ಪಡೆದಿರುವುದು ಆಶ್ಚರ್ಯಕರ ಬೆಳವಣಿಗೆ. ರೇವೂರ ಅವರೊಂದಿಗೆ ಪಕ್ಷ ಸಂಪೂರ್ಣವಾಗಿ ನಿಂತಿದೆ” ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ, ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಗೂಂಡಾಗಿರಿ ಮತ್ತು ಅರಾಜಕತೆಯ ವಿರುದ್ಧ ಜನರು ಸಂಘಟಿತರಾಗಿ ಹೋರಾಡಲು ಕಲಬುರಗಿ ಜನ ಸಿದ್ಧರಾಗಿದ್ದಾರೆ ಎಂದು ಹೇಳಿದರು.
ಈ ವೇಳೆ ಮಾಜಿ ಶಾಸಕರಾದ ಅಮರನಾಥ ಪಾಟೀಲ್, ಸುಭಾಷ್ ಗುತ್ತೇದಾರ್, ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಶಿವರಾಜ್ ಪಾಟೀಲ್ ರದ್ದೇವಾಡಗಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ನಿತಿನ್ ಗುತ್ತೇದಾರ್, ಶರಣಪ್ಪ ತಳವಾರ, ಅವ್ವಣ್ಣ ಮ್ಯಾಕೇರಿ, ರಾಜು ವಾಡೇಕರ್, ಮಹಾದೇವ್ ಬೆಳಮಗಿ, ಲಿಂಗರಾಜ ಬಿರಾದಾರ, ವಿಶಾಲ ದರ್ಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.