Kalaburagi | ಅಂಬೇಡ್ಕರ್ ನಿವಾಸ ಯೋಜನೆ ಅನುದಾನ ಬಿಡುಗಡೆಗೆ ಲಂಚ: ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ಕಲಬುರಗಿ : ಡಾ. ಬಿ.ಆರ್. ಅಂಬೇಡ್ಕರ್ ನಿವಾಸ ಯೋಜನೆಯ ಅನುದಾನ ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು, ಫೋನ್‌ಪೇ ಮೂಲಕ 15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಕರದಾಳ ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್‌ರನ್ನು ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಬಲೆಗೆ ಬೀಳಿಸಿ ಬಂಧಿಸಿದ್ದಾರೆ.
ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮ ಪಂಚಾಯಿತಿಯ ಕರ ವಸೂಲಿಗಾರ (ಬಿಲ್ ಕಲೆಕ್ಟರ್) ಸಂತೋಷ ರಾಠೋಡ ಬಂಧಿತ ಆರೋಪಿ.
ಹನಿಕೆರಾ ಗ್ರಾಮದ ರಾಮನಾಯಕ ತಾಂಡಾದ ನಿವಾಸಿ ಸಿಖಂದರ್ ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.
ದೂರಿನ ಪ್ರಕಾರ, ಸಿಖಂದರ್ ಅವರ ಅಕ್ಕ ಸವಿತಾ ಅವರಿಗೆ ಡಾ. ಬಿ.ಆರ್. ಅಂಬೇಡ್ಕರ್ ನಿವಾಸ ಯೋಜನೆಯಡಿ ಮಂಜೂರಾಗಿದ್ದ ಮೂರನೇ ಹಾಗೂ ನಾಲ್ಕನೇ ಕಂತಿನ ಅನುದಾನ ಬಿಡುಗಡೆ ಮಾಡಲು ಆರೋಪಿ 22 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಬಳಿಕ ಮೊದಲ ಕಂತಾಗಿ ಫೋನ್‌ಪೇ ಮೂಲಕ 15 ಸಾವಿರ ರೂ. ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಈ ಕಾರ್ಯಾಚರಣೆಯನ್ನು ಲೋಕಾಯುಕ್ತ ಕಲಬುರಗಿ ಪೊಲೀಸ್ ಅಧೀಕ್ಷಕ ಸಿದ್ದರಾಜು ಸಿ. ಅವರ ಮಾರ್ಗದರ್ಶನದಲ್ಲಿ, ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ರಾಜಶೇಖರ ಬಡದೇಸಾರ ಅವರ ನೇತೃತ್ವದಲ್ಲಿ ನಡೆಸಲಾಯಿತು.
ಬಂಧಿತ ಆರೋಪಿಯನ್ನು ವಿಚಾರಣೆ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುವುದು ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.