Kalaburagi | ಬುದ್ಧ-ಬಸವ-ಅಂಬೇಡ್ಕರ್ ತತ್ವಗಳು ಸಮಾಜಕ್ಕೆ ದಾರಿದೀಪ: ಶಾಸಕ ಅಲ್ಲಮಪ್ರಭು ಪಾಟೀಲ
ಕಲಬುರಗಿ : ಗೌತಮ ಬುದ್ಧ, ವಿಶ್ವಗುರು ಬಸವಣ್ಣ ಹಾಗೂ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವ ಮತ್ತು ಆದರ್ಶಗಳು ಇಂದಿನ ಸಮಾಜಕ್ಕೆ ದಾರಿದೀಪವಾಗಿದ್ದು, ಯುವ ಪೀಳಿಗೆ ಅವರು ತೋರಿದ ಮಾನವೀಯತೆ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಮಾರ್ಗದಲ್ಲಿ ಸಾಗಬೇಕು ಎಂದು ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಹೇಳಿದರು.
ನಗರದ ಕನ್ನಡ ಭವನದಲ್ಲಿ ಜೈ ಕನ್ನಡಿಗರ ರಕ್ಷಣಾ ವೇದಿಕೆ ರಾಜ್ಯ ಘಟಕ ಹಾಗೂ ಸನ್‌ರೈಸ್ ಆಸ್ಪತ್ರೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ “ಬುದ್ಧ, ಬಸವ, ಅಂಬೇಡ್ಕರ್ ರತ್ನ ಪ್ರಶಸ್ತಿ” ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಗೌರವಿಸುವುದು ಶ್ಲಾಘನೀಯ ಕಾರ್ಯವಾಗಿದ್ದು, ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಸೌಹಾರ್ದತೆ, ಮಾನವೀಯ ಮೌಲ್ಯಗಳು ಮತ್ತು ಯುವಕರಿಗೆ ಪ್ರೇರಣೆಯನ್ನು ಹೆಚ್ಚಿಸುತ್ತವೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸನ್‌ರೈಸ್ ಆಸ್ಪತ್ರೆಯ ಮುಖ್ಯಸ್ಥ ಡಾ. ಸಲ್ಮಾನ ಪಟೇಲ್ ವಹಿಸಿದ್ದರು. ಜೈ ಕನ್ನಡಿಗರ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಸಚಿನ್ ಫರತಹಾಬಾದ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.
ವೇದಿಕೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯ ನೀಲಕಂಠರಾವ್ ಮೂಲಗೆ, ಐದು ಗ್ಯಾರಂಟಿ ಯೋಜನೆಗಳ ಸದಸ್ಯ ವಿಜಯಕುಮಾರ ಕಟ್ಟಿಮನಿ, ಮಾಜಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ಸುರೇಶ ಬಡಿಗೇರ, ಕಾಂಗ್ರೆಸ್ ಯುವ ಮುಖಂಡರಾದ ಮಲ್ಲಿಕಾರ್ಜುನ ನೀಲೂರ, ಕುಮಾರ ದೋಡಮನಿ, ರಾಜಕುಮಾರ ಪಾಟೀಲ ಹಾಗೂ ಸುರೇಶ ಹನಗುಂಡಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ, ಸಮಾಜ ಸೇವಕರಾದ ಗಿರೀಶ ಬೋರೆ ಹಾಗೂ ಗೋಪಾಲ ಫಾಸ್ಟರ್, ಪತ್ರಕರ್ತ ರಾಜು ದೇಶಮುಖ್, ಡಿಎಸ್ಎಸ್ ಜಿಲ್ಲಾಧ್ಯಕ್ಷ ಸುರೇಶ ಹಾದಿಮನಿ, ಸಮಾಜ ಸೇವಕ ಶಿವಕುಮಾರ ದೊಡ್ಡಮನಿ, ಯುವ ಮುಖಂಡ ಶ್ರೀಕಾಂತ ವಂಟಿ ಮತ್ತು ಕರ್ನಾಟಕ ಡೋರ ಹಾಗೂ ಕಕ್ಕಯ್ಯ ಸಮಾಜದ ರಾಜ್ಯ ಕಾರ್ಯಾಧ್ಯಕ್ಷ ನರೇಶಕುಮಾರ ಎಸ್. ಕಟಕೆ ಅವರಿಗೆ “ಬುದ್ಧ, ಬಸವ, ಅಂಬೇಡ್ಕರ್ ರತ್ನ ಪ್ರಶಸ್ತಿ” ಪ್ರದಾನ ಮಾಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಸಮಾಜ ಹೋರಾಟಗಾರ ಜೈಭೀಮ್ ಸಾವಳಗಿ ಸ್ವಾಗತಿಸಿದರು. ಮಕ್ಕಳಿಂದ ಆಕರ್ಷಕ ಭರತನಾಟ್ಯ ನೃತ್ಯ ಪ್ರದರ್ಶನ ನಡೆಯಿತು. ವಿವಿಧ ರಾಜಕೀಯ, ಸಾಮಾಜಿಕ, ಧಾರ್ಮಿಕ ಹಾಗೂ ಸಾಹಿತ್ಯ ಕ್ಷೇತ್ರಗಳ ಮುಖಂಡರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.