ಕಲಬುರಗಿ : ಪ್ರತಿಭಟನೆ ವೇಳೆ ಸಾರ್ವಜನಿಕರಿಗೆ ಅಡ್ಡಿ ಆರೋಪ; ಬಿಜೆಪಿ ಮುಖಂಡರ ವಿರುದ್ಧ ಪ್ರಕರಣ ದಾಖಲು
ಕಲಬುರಗಿ : ಬರಪೀಡಿತ ಪ್ರದೇಶ ಘೋಷಿಸದ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿರುವುದು ಹಾಗೂ ಸಾರ್ವಜನಿಕರಿಗೆ ಅಡ್ಡಿ, ಬೈಕ್ ಸವಾರನ ಹೆಲ್ಮೆಟ್ ಒಡೆದ ಆರೋಪದಡಿ ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಅಶೋಕ ಬಗಲಿ, ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಸೇರಿದಂತೆ ಇತರರ ವಿರುದ್ಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬುಧವಾರ ಮಧ್ಯಾಹ್ನ ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ಕಡೆಗೆ ಬಿಜೆಪಿ ವತಿಯಿಂದ ಪ್ರತಿಭಟನೆ ಹಾಗೂ ಮೆರವಣಿಗೆ ನಡೆಸಲಾಗುತ್ತಿತ್ತು. ಈ ವೇಳೆ ಯಾವುದೇ ಅನುಮತಿ ಪಡೆಯದೆ ಏಕಾಏಕಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ತೆರಳಿ ಕಾನೂನು ಸುವ್ಯವಸ್ಥೆ ಕಾಪಾಡಲು ಬಂದೋಬಸ್ತ್ ಕೈಗೊಂಡಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮಧ್ಯಾಹ್ನ ಸುಮಾರು 1 ಗಂಟೆ ವೇಳೆಗೆ ಅಶೋಕ ಬಗಲಿ, ರಾಜಕುಮಾರ ಪಾಟೀಲ್ ತೇಲ್ಕೂರ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಯ ಮುಖ್ಯ ರಸ್ತೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಆಟೋ, ಬೈಕ್, ಕಾರು ಹಾಗೂ ಬಸ್‌ಗಳನ್ನು ತಡೆದು, ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಏಕೆ ಮಧ್ಯೆ ಬರುತ್ತಿದ್ದೀರಿ ಎಂದು ಅವಾಚ್ಯ ಪದಗಳಿಂದ ನಿಂದಿಸಿ, ಸ್ಥಳದಿಂದ ತೆರಳುವಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಇದೇ ಸಂದರ್ಭದಲ್ಲಿ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಅವರು ಬೈಕ್ ಸವಾರನ ತಲೆಯಲ್ಲಿದ್ದ ಹೆಲ್ಮೆಟ್ ತೆಗೆದು ನೆಲಕ್ಕೆ ಬಡಿದು ಹಾನಿಗೊಳಿಸಿದ್ದಾರೆ. ಹೆಲ್ಮೆಟ್‌ಗೆ ಸುಮಾರು 500 ರೂ. ನಷ್ಟವಾಗಿದೆ ಎಂದು ಪೊಲೀಸರು ನೀಡಿರುವ ದೂರಿನಲ್ಲಿ ದಾಖಲಾಗಿದೆ.
ಈ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS)ಯ ಕಲಂ 189(2), 191(2), 223, 126(2), 324(4), 352, 351(2) ಹಾಗೂ 190ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.