ತೌಸಿಫ್ ಹುಸೇನ್

ಕಲಬುರಗಿ: ಪೊಲೀಸ್ ಕಾನ್‌ಸ್ಟೇಬಲ್ ಓರ್ವ 40 ವರ್ಷದ ಮಹಿಳೆಯೊಂದಿಗೆ ಸಲುಗೆ ಬೆಳೆಸಿಕೊಂಡು, ಮನೆಗೆ ನುಗ್ಗಿ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೇಳಿಬಂದಿದೆ.

ಎಂಎಸ್‌ಕೆ ಮಿಲ್ ಪ್ರದೇಶದ ಗಲೀಬ್ ಕಾಲೋನಿ ನಿವಾಸಿ, ಪೊಲೀಸ್ ಪೇದೆ ಸೈಯದ್ ತೌಸಿಫ್ ಹುಸೇನ್ (41) ಆರೋಪಿಯಾಗಿದ್ದಾರೆ. 2023ರಲ್ಲಿ ಪೊಲೀಸ್ ಠಾಣೆಯೊಂದರ ಪ್ರಕರಣದಲ್ಲಿ ಸಹಾಯ ಮಾಡುವ ಮೂಲಕ ಮಹಿಳೆಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದ ಆರೋಪಿ, ತನ್ನನ್ನು ಪ್ರೀತಿಸುವಂತೆ ಪದೇಪದೇ ಒತ್ತಾಯಿಸುತ್ತಿದ್ದ. ಇದಕ್ಕೆ ಸಹಕರಿಸದಿದ್ದರೆ ಕಲಬುರಗಿಯಲ್ಲಿ ಜೀವನ ನಡೆಸಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕುತ್ತಿದ್ದ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಆಗಸ್ಟ್ 7ರಂದು ರಾತ್ರಿ ಮಹಿಳೆಯ ಮನೆಗೆ ಬಂದ ಆರೋಪಿ, ಆಕೆಯ ಮುಖಕ್ಕೆ ಹೊಡೆದು, ಬಳಿಕ ಚಾಕು ತೋರಿಸಿ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಕೃತ್ಯದ ವೇಳೆ ಮೊಬೈಲ್‌ನಲ್ಲಿ ಫೋಟೋ ತೆಗೆದಿದ್ದು, ಬಳಿಕ ಬಟ್ಟೆಗಳನ್ನು ತೊಳೆಯುವಂತೆ ಸೂಚಿಸಿ ಸಾಕ್ಷ್ಯ ನಾಶಪಡಿಸಲು ಯತ್ನಿಸಿದ್ದಾನೆ. ಈ ಕುರಿತು ದೂರು ನೀಡಿದರೆ ಮಹಿಳೆ ಮತ್ತು ಆಕೆಯ ಕುಟುಂಬದವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ನವೆಂಬರ್ 15ರಂದು ಮಹಿಳೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಹಿಳೆ ನೀಡಿದ ದೂರಿನ ಮೇರೆಗೆ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್)-2023ರ ಕಲಂ 64(2)(ಎ), 115(2), 351(2), 352 ಹಾಗೂ 238(ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಾಜಿದ್‌ ಅಲಿ/ವಾರ್ತಾಭಾರತಿ

ಕಲಬುರಗಿ ಜಿಲ್ಲಾ ವರದಿಗಾರರು

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ