ಕಲಬುರಗಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕಿಯಾಗಿದ್ದ ಡಾ.ಅನಿತಾ ಆರ್. ಅಮಾನತು
ಡಾ.ಅನಿತಾ ಆರ್.
ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ‘ಕೈದಿಗಳ ಬಿಂದಾಸ್ ಲೈಫ್’ ಎಂಬ ಶೀರ್ಷಿಕೆಯಡಿ ಕೈದಿಗಳ ವಿಡಿಯೋಗಳು ಸಾಮಾಜಿಕ ಹಾಗೂ ವಿವಿಧ ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಕಂಡುಬಂದ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕಿ ಡಾ.ಅನಿತಾ ಆರ್. ಅವರನ್ನು ಅಮಾನತುಗೊಳಿಸಲಾಗಿದೆ.
ಈ ಕುರಿತು ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಪೊಲೀಸ್ ಮಹಾನಿರ್ದೇಶಕ ಆಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ಆದೇಶದಂತೆ ಡಾ.ಅನಿತಾ ಆರ್. ಅವರ ವಿರುದ್ಧ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ. ಅಲ್ಲದೆ, ಅವರು ಹೊಂದಿದ್ದ ಹುದ್ದೆಯ ಹಕ್ಕನ್ನು ನೂತನ ಕೇಂದ್ರ ಕಾರಾಗೃಹ, ವಿಜಯಪುರಕ್ಕೆ ಸ್ಥಳಾಂತರಿಸಿ ಆದೇಶಿಸಲಾಗಿದೆ.
ಕಲಬುರಗಿ ಕೇಂದ್ರ ಕಾರಾಗೃಹದೊಳಗಿನ ಕೈದಿಗಳ ಚಟುವಟಿಕೆಗಳಿಗೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳು ಹಾಗೂ ವಿವಿಧ ದೃಶ್ಯ ಮಾಧ್ಯಮಗಳಲ್ಲಿ ವೈರಲ್ ಆಗಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದವು. ಈ ಹಿನ್ನೆಲೆಯಲ್ಲಿ ಕಾರಾಗೃಹದ ಆಡಳಿತಾತ್ಮಕ ಜವಾಬ್ದಾರಿ ನಿರ್ವಹಣೆಯಲ್ಲಿ ಮೇಲ್ನೋಟಕ್ಕೆ ಕರ್ತವ್ಯಲೋಪ ಕಂಡುಬಂದಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಹಿಂದೆ ವೀಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಿತಾ ಅವರನ್ನು ಕೂಡಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿತ್ತು.