ಕಲಬುರಗಿ: ಸಣ್ಣ ಮತ್ತು ಅತಿಸಣ್ಣ ರೈತರ ಕೃಷಿ ವೆಚ್ಚದ ಹೊರೆ ಕಡಿಮೆ ಮಾಡಿ, ಕೃಷಿ ಚಟುವಟಿಕೆಗಳನ್ನು ಸುಗಮಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮುಖ್ಯಮಂತ್ರಿ ನೇಗಿಲ ಯೋಗಿ ಯೋಜನೆ–2026 ಜಾರಿಗೆ ತಂದಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ಮತ್ತು ಚಿತ್ತಾಪುರ ತಾಲೂಕುಗಳನ್ನು ಯೋಜನೆಯ ಅನುಷ್ಠಾನಕ್ಕೆ ಆಯ್ಕೆ ಮಾಡಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯ ರೈತರು ಅಲ್ಪ ಪ್ರಮಾಣದ ಕೃಷಿ ಭೂಮಿ ಹೊಂದಿದ್ದಾರೆ. ಆರ್ಥಿಕ ಅನಾನುಕೂಲತೆಯಿಂದ ಸ್ವಂತ ಟ್ರ್ಯಾಕ್ಟರ್ ಹಾಗೂ ಕೃಷಿ ಯಂತ್ರೋಪಕರಣಗಳನ್ನು ಖರೀದಿಸಲು ಸಾಧ್ಯವಾಗದೆ ಉಳುಮೆ ಸೇರಿದಂತೆ ವಿವಿಧ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ತೊಂದರೆ ಅನುಭವಿಸುತ್ತಿದ್ದಾರೆ. ಖಾಸಗಿ ಟ್ರ್ಯಾಕ್ಟರ್‌ಗಳನ್ನು ಬಾಡಿಗೆಗೆ ಪಡೆಯಲು ಹೆಚ್ಚಿನ ವೆಚ್ಚ ಭರಿಸಬೇಕಾಗಿರುವುದರಿಂದ ಕೃಷಿ ಉತ್ಪಾದನಾ ವೆಚ್ಚವೂ ಹೆಚ್ಚುತ್ತಿದೆ.

ಈ ಹಿನ್ನೆಲೆಯಲ್ಲಿ ಗರಿಷ್ಠ 3 ಎಕರೆವರೆಗೆ ಕೃಷಿ ಭೂಮಿ ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಉಳುಮೆ ಸೇರಿದಂತೆ ಅಗತ್ಯ ಕೃಷಿ ಚಟುವಟಿಕೆಗಳಿಗಾಗಿ ಟ್ರ್ಯಾಕ್ಟರ್ ಹಾಗೂ ಇತರೆ ಕೃಷಿ ಯಂತ್ರೋಪಕರಣಗಳ ಸೇವೆ ಒದಗಿಸುವುದು ಯೋಜನೆಯ ಉದ್ದೇಶವಾಗಿದೆ. ಸ್ಥಳೀಯವಾಗಿ ಲಭ್ಯವಿರುವ ಖಾಸಗಿ ಟ್ರ್ಯಾಕ್ಟರ್‌ಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ರೈತರ ಜಮೀನುಗಳಲ್ಲಿ ಕೃಷಿ ಕಾರ್ಯಗಳನ್ನು ಕೈಗೊಳ್ಳಲು ವ್ಯವಸ್ಥೆ ಕಲ್ಪಿಸಲಾಗುತ್ತದೆ.

ಎಕರೆಗೆ ಅನುಗುಣವಾಗಿ ಪ್ರೋತ್ಸಾಹಧನ :

ಯೋಜನೆಯಡಿ ರೈತರು ಕೈಗೊಳ್ಳುವ ಕೃಷಿ ಚಟುವಟಿಕೆಗಳ ಸಂಖ್ಯೆಗೆ ಅನುಗುಣವಾಗಿ ಪ್ರೋತ್ಸಾಹಧನ ನೀಡಲಾಗುತ್ತದೆ. 20 ಗುಂಟೆಯಿಂದ 1 ಎಕರೆವರೆಗೆ ಒಂದು ಚಟುವಟಿಕೆಗೆ 500 ರೂ., ಎರಡು ಚಟುವಟಿಕೆಗಳಿಗೆ 1,000 ರೂ. ಹಾಗೂ ಮೂರು ಚಟುವಟಿಕೆಗಳಿಗೆ 1,500 ರೂ. ನೀಡಲಾಗುತ್ತದೆ.

ಅದೇ ರೀತಿ 2 ಎಕರೆವರೆಗೆ ಕ್ರಮವಾಗಿ 1,000 ರೂ., 2,000 ರೂ. ಹಾಗೂ 3,000 ರೂ. ಮತ್ತು 3 ಎಕರೆವರೆಗೆ 1,500 ರೂ., 3,000 ರೂ. ಹಾಗೂ ಗರಿಷ್ಠ 4,500 ರೂ. ಪ್ರೋತ್ಸಾಹಧನ ನೀಡುವ ವ್ಯವಸ್ಥೆ ಇದೆ.

ಆನ್‌ಲೈನ್ ನೋಂದಣಿಗೆ ಸೂಚನೆ :

ಅಫಜಲಪುರ ಮತ್ತು ಚಿತ್ತಾಪುರ ತಾಲೂಕುಗಳ ಅರ್ಹ ಹಾಗೂ ಆಸಕ್ತ ಟ್ರ್ಯಾಕ್ಟರ್ ಮತ್ತು ಇತರೆ ಕೃಷಿ ಯಂತ್ರೋಪಕರಣಗಳನ್ನು ಹೊಂದಿರುವ ರೈತರು ಸೇವೆ ಒದಗಿಸಲು ಮುಂದೆ ಬಂದಲ್ಲಿ, ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಆ್ಯಪ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಸಂದರ್ಭದಲ್ಲಿ ಆಧಾರ್ ಕಾರ್ಡ್, ಟ್ರ್ಯಾಕ್ಟರ್‌ನ ಆರ್‌ಸಿ ಕಾರ್ಡ್ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು ಎಂದು ಸಮದ್ ಪಟೇಲ್ ತಿಳಿಸಿದ್ದಾರೆ.

ಯೋಜನೆಯಿಂದ ಸ್ವಂತ ಕೃಷಿ ಯಂತ್ರೋಪಕರಣಗಳಿಲ್ಲದ ರೈತರಿಗೆ ಸಕಾಲದಲ್ಲಿ ಯಂತ್ರೋಪಕರಣಗಳ ಸೇವೆ ದೊರೆಯಲಿದೆ. ಕೃಷಿ ಕಾರ್ಮಿಕರ ಮೇಲಿನ ಅವಲಂಬನೆ ಹಾಗೂ ಕೃಷಿ ವೆಚ್ಚ ಕಡಿಮೆಯಾಗುವುದರೊಂದಿಗೆ ಸೂಕ್ತ ಸಮಯದಲ್ಲಿ ಭೂಮಿ ಸಿದ್ಧತೆ, ಬಿತ್ತನೆ ಮತ್ತು ಇತರೆ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲವಾಗಲಿದೆ. ಇದರಿಂದ ಕೃಷಿ ಉತ್ಪಾದಕತೆ ಹೆಚ್ಚಿಸುವುದರ ಜತೆಗೆ ಸಣ್ಣ ರೈತರ ಆರ್ಥಿಕ ಸ್ಥಿತಿ ಸುಧಾರಿಸುವ ನಿರೀಕ್ಷೆಯಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಾಜಿದ್‌ ಅಲಿ/ವಾರ್ತಾಭಾರತಿ

ಕಲಬುರಗಿ ಜಿಲ್ಲಾ ವರದಿಗಾರರು

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ