×
Ad

ಕಲಬುರಗಿ: ಗೋದುತಾಯಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪೌರತ್ವ ತರಬೇತಿ ಶಿಬಿರ-2025

Update: 2025-05-22 12:55 IST

ಕಲಬುರಗಿ : ಪೌರತ್ವ ತರಬೇತಿ ಶಿಬಿರದಿಂದ ವಿದ್ಯಾರ್ಥಿಗಳಲ್ಲಿ ಬೌದ್ಧಿಕ ಬೆಳವಣಿಗೆ ಮತ್ತು ಉತ್ತಮ ನಾಗರಿಕ ಗುಣಗಳನ್ನು ಬೆಳೆಸುತ್ತದೆ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಹೇಳಿದರು.

ನಗರದ ಗೋದುತಾಯಿ ಶಿಕ್ಷಣ ಮಹಾವಿದ್ಯಾಲಯದಲ್ಲಿ(ಬಿ.ಎಡ್) ಬುಧವಾರ ಪೌರತ್ವ ತರಬೇತಿ ಶಿಬಿರ-2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಈ ಶಿಬಿರವು ರಾಷ್ಟ್ರಕ್ಕೆ ತನ್ನನ್ನು ತಾನು ಅರ್ಪಿಸಿಕೊಳ್ಳಲು ಸಮರ್ಪಕ ಶಕ್ತಿಯನ್ನು ಅಭಿವೃದ್ಧಿಪಡಿಸುತ್ತದೆ. ವಿದ್ಯಾರ್ಥಿಗಳು ಇದರ ಲಾಭ ಪಡೆಯಬೇಕು. ಪುರುಷರಿಗಿಂತ ಮಹಿಳೆಯರಲ್ಲಿ ಸಹನೆ, ತಾಳ್ಮೆ, ಉತ್ತಮ ಸಂಸ್ಕಾರ ನೀಡುವ ಗುಣಗಳು ಇರುತ್ತವೆ. ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆ ಅಪಾರವಾಗಿದೆ. ಈ ಭಾಗದ ಹೆಣ್ಣು ಮಕ್ಕಳು ಇನ್ನು ಹೆಚ್ಚಿನ ರೀತಿಯಲ್ಲಿ ಬೆಳೆಯಬೇಕು, ಅಗಾಧವಾದ ಸಾಧನೆ ಮಾಡಬೇಕು ಎಂದು ಕಿವಿ ಮಾತು ಹೇಳಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಫರತಹಬಾದ್‌ನ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಇಂದುಮತಿ ಪಾಟೀಲ ಮಾತನಾಡಿ, ದೇಶದ ಅಭಿವೃದ್ಧಿಯನ್ನು ಬೆಳೆಸುವಲ್ಲಿ ಮೌಲ್ಯಗಳು ಮತ್ತು ಕೌಶಲ್ಯಗಳನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಯುವ ಜನತೆಯನ್ನು ಶಕ್ತಿಯುತಗೊಳಿಸುವುದು ಉತ್ತಮ ಕೌಶಲಗಳನ್ನು ಬೆಳೆಸುವುದು ಹಾಗೂ ಪ್ರಜಾಪ್ರಭುತ್ವ ಗುಣಗಳ ಬೆಳವಣಿಗೆಗೆ ಮತ್ತು ಸಮಾಜದ ಸಾರ್ವಜನಿಕ ಬದುಕಿನ ಅಭ್ಯಾಸವನ್ನು ಹೊಂದುವುದು ಈ ತರಬೇತಿಯ ಮುಖ್ಯ ಉದ್ದೇಶವಾಗಿದೆ ಎಂದರು.

ಕಾರ್ಯಕ್ರಮದ ಇ‌ನ್ನೋರ್ವ ಮುಖ್ಯ ಅತಿಥಿಗಳಾದ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಪುಟ್ಟಮಣಿ ದೇವಿದಾಸ ಮಾತನಾಡಿ, ವಿದ್ಯಾರ್ಥಿಗಳ ಜೀವನದಲ್ಲಿ ಗುರುವಿನ ಪಾತ್ರ ಬಹಳ ಪ್ರಮುಖವಾಗಿರುತ್ತದೆ, ಗುರುಗಳು ವಿದ್ಯಾರ್ಥಿಗಳ ಏಳ್ಗೆಗಾಗಿ ಶ್ರಮಿಸುತ್ತಾರೆ. ಅದೇ ರೀತಿ ಮುಂಬರುವ ದಿನಗಳಲ್ಲಿ ಶಿಕ್ಷಕರಾಗುವ ತಾವುಗಳು ಹೆಚ್ಚಿನ ಜ್ಞಾನ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಮಹಿಳೆಯರ ಹಕ್ಕುಗಳು ಮತ್ತು ಸಮಾನತೆ ಕುರಿತು ತಿಳಿದುಕೊಳ್ಳಬೇಕು ಎಂದು ಹೇಳಿದರು.

ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಕಲ್ಪನಾ ಭೀಮಳ್ಳಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಪ್ರಾಧ್ಯಾಪಕಿ ಸುಂದರಬಾಯಿ ನಾಗಶೆಟ್ಟಿ ವಂದಿಸಿದರು. ಕು. ಶ್ವೇತಾ ನಿರೂಪಿಸಿದರು. ಮಹಾವಿದ್ಯಾಲಯದ ಎಲ್ಲ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿನಿಯರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News