ಕಲಬುರಗಿ | ಯುವಕನ ಮೇಲಿನ ಹಲ್ಲೆ ಖಂಡಿಸಿ ಜು. 31ರಂದು ಬೃಹತ್ ಪ್ರತಿಭಟನೆ: ಅವ್ವಣ್ಣ ಮ್ಯಾಕೇರಿ

Update: 2026-07-26 18:54 IST

ಅಫಜಲಪುರ: ದೇವಲ್ ಗಾಣಗಾಪುರದಲ್ಲಿ ಕೋಲಿ ಸಮಾಜದ ಯುವಕನ ಮೇಲೆ ನಡೆದಿರುವ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ, ಜುಲೈ 31ರಂದು ಕಲಬುರಗಿ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕೋಲಿ ಕಬ್ಬಲಿಗ ಹೋರಾಟ ಸಮನ್ವಯ ಸಮಿತಿ ಮುಖಂಡ ಅವ್ವಣ್ಣ ಮ್ಯಾಕೇರಿ ಹೇಳಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಕಲಬುರಗಿ ನಗರದ ಸರ್ದಾರ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಹಾಗೂ ಸಂಕೇತಿಕ ಧರಣಿ ನಡೆಸಲಾಗುವುದು ಎಂದರು.

ಸಂತ್ರಸ್ತ ಯುವಕನಿಗೆ 25 ಲಕ್ಷ ಪರಿಹಾರ ಘೋಷಿಸಬೇಕು. ಅಲ್ಲದೆ, ಉತ್ತಮ ಚಿಕಿತ್ಸೆಗಾಗಿ ಬೆಂಗಳೂರು ಅಥವಾ ಹೈದರಾಬಾದ್‌ನ ವಿಶೇಷ ಆಸ್ಪತ್ರೆಗಳಿಗೆ ಸ್ಥಳಾಂತರಿಸಿ, ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು, ಅವರಿಗೆ ತಕ್ಕ ಶಿಕ್ಷೆ ವಿಧಿಸಬೇಕು. ಸಂತ್ರಸ್ತ ಯುವಕನ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಜುಲೈ 31ರಂದು ನಡೆಯುವ ಪ್ರತಿಭಟನೆಯಲ್ಲಿ ಸಮಾಜದ ಎಲ್ಲ ಮುಖಂಡರು, ಯುವಕರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News