Kalaburagi | ಜ್ಞಾನೇಶ್ ಕುಮಾರ್ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ
ಎಸ್‌ಐಆರ್ ಕುರಿತು ಏಕಪಕ್ಷೀಯ ನಿರ್ಧಾರ ಆರೋಪ; ಕ್ರಮಕ್ಕೆ ಕಾಂಗ್ರೆಸ್ ಆಗ್ರಹ
ಕಲಬುರಗಿ: ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿಚಾರದಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದ್ದಾರೆ ಎಂದು ಆರೋಪಿಸಿ, ಅವರನ್ನು ಬಂಧಿಸಬೇಕು ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಕಿರಣ್ ದೇಶಮುಖ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿ, ಚುನಾವಣಾ ಆಯೋಗದ ಎಸ್‌ಐಆರ್ ಪ್ರಕ್ರಿಯೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರು ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ಈ ವೇಳೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜ್ಞಾನೇಶ್ ಕುಮಾರ್ ಅವರ ಪ್ರತಿಕೃತಿಯನ್ನು ದಹಿಸಿ ಪ್ರತಿಭಟನೆ ನಡೆಸಿದ ಮುಖಂಡರು, ಎಸ್‌ಐಆರ್ ಪ್ರಕ್ರಿಯೆಯಲ್ಲಿ ನಡೆದಿರುವ ಆರೋಪಗಳ ಕುರಿತು ಸಮಗ್ರ ಮತ್ತು ಪಾರದರ್ಶಕ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡರು, ಎಸ್‌ಐಆರ್‌ಗೆ ಸಂಬಂಧಿಸಿದಂತೆ ಸೂಕ್ತ ಪರಿಶೀಲನೆ ನಡೆಸಿ, ಅಕ್ರಮ ಅಥವಾ ನಿಯಮ ಉಲ್ಲಂಘನೆ ನಡೆದಿದ್ದರೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಮತದಾರರ ಪಟ್ಟಿಯ ಪರಿಷ್ಕರಣೆ ಸಂದರ್ಭದಲ್ಲಿ ಅರ್ಹ ಮತದಾರರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಚುನಾವಣಾ ಆಯೋಗ ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು. ಮತದಾರರ ಹಕ್ಕುಗಳಿಗೆ ಧಕ್ಕೆಯಾಗದಂತೆ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸುವ ಜವಾಬ್ದಾರಿ ಚುನಾವಣಾ ಆಯೋಗದ ಮೇಲಿದೆ ಎಂದು ಕಾಂಗ್ರೆಸ್ ಮುಖಂಡರು ಹೇಳಿದರು.
ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ, ಮುಖಂಡರಾದ ಭೀಮರಾವ ಟಿ.ಟಿ., ಮಹಾಂತಪ್ಪ ಸಂಗಾವಿ, ಕುಡಾ ಅಧ್ಯಕ್ಷ ಮಝಾರ್ ಖಾನ್ ಆಲಂ, ಯುವ ಘಟಕದ ಅಧ್ಯಕ್ಷ ಶಕೀಲ್ ಸರಡಗಿ, ಚಂದ್ರಿಕಾ ಪರಮೇಶ್ವರ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರೇಣುಕಾ ಸಿಂಗೆ, ಈರಣ್ಣ ಝಳಕಿ, ಶಿವಾನಂದ ಹೊನಗುಂಟಿ, ರಾಜೀವ್ ಜಾನೆ, ಅಭಿಷೇಕ್ ಪಾಟೀಲ್, ಫಾರುಕ್ ಮಾನಿಯಾಲ್, ಅಶೋಕ ವೀರನಾಯಕ್, ದಿನೇಶ ದೊಡ್ಡಮನಿ, ಕಾರ್ತಿಕ್ ನಾಟೇಕರ್, ಪರಶುರಾಮ್ ನಾಟೇಕರ್, ಟೈಗರ್ ವಿಘ್ನೇಶ್ವರ, ಮಹೇಶ್ ತೆಲ್ಲೂರಕರ್, ಧರ್ಮರಾಜ ಹೇರೂರ, ಆಸೀಫ್ ಗಾಣಗಾಪೂರಿ, ಮೋದಿನ್ ಪಟೇಲ್ ಅಣಬಿ, ಫಾರೂಕ್ ಪಟೇಲ್, ಚಂದ್ರಶೇಖರ್ ಹಡಪದ್, ಪ್ರಜ್ಞಾನಂದ ಸಂಗೊಳ್ಳಗಿ, ವಾಣಿಶ್ರೀ ಸಗರಕರ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.