Kalaburagi | ಕಲುಷಿತ ನೀರು ಪೂರೈಕೆ ಆರೋಪ: ಕ್ರಮಕ್ಕೆ ಗ್ರಾಮಸ್ಥರ ಒತ್ತಾಯ
ಕಲಬುರಗಿ: ಕಮಲಾಪುರ ತಾಲೂಕಿನ ಅಂಬಲಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುದಮುಡ ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ಮನೆಗಳಿಗೆ ಕಲುಷಿತ ಹಾಗೂ ಕೆಸರು ಮಿಶ್ರಿತ ಕುಡಿಯುವ ನೀರು ಸರಬರಾಜಾಗುತ್ತಿದ್ದು, ಗ್ರಾಮಸ್ಥರು ಆರೋಗ್ಯ ಸಮಸ್ಯೆ ಎದುರಿಸುವಂತಾಗಿದೆ ಎಂದು ಆರೋಪಿಸಿ ಅಂಬೇಡ್ಕರ್ ಯುವ ಸೇನೆ (ರಿ.) ಗ್ರಾಮ ಘಟಕದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಮನವಿ ಸಲ್ಲಿಸಿದರು.
ಗ್ರಾಮದಲ್ಲಿ ಸರಬರಾಜಾಗುತ್ತಿರುವ ನೀರು ಕಲುಷಿತಗೊಂಡಿದ್ದು, ಕುಡಿಯಲು ಬಳಸಿದರೆ ಸಾಂಕ್ರಾಮಿಕ ರೋಗಗಳು ಹರಡುವ ಆತಂಕ ಎದುರಾಗಿದೆ. ಈಗಾಗಲೇ ಅನೇಕ ಗ್ರಾಮಸ್ಥರಿಗೆ ಹೊಟ್ಟೆನೋವು, ವಾಂತಿ ಹಾಗೂ ಜ್ವರದಂತಹ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಕುಡಿಯುವ ನೀರಿನ ಪೈಪ್‌ಲೈನ್‌ನಲ್ಲಿ ಸೋರಿಕೆ ಉಂಟಾಗಿರುವ ಅಥವಾ ಒಳಚರಂಡಿ ನೀರು ಬೆರೆತಿರುವ ಸಾಧ್ಯತೆ ಇದೆ. ಈ ಕುರಿತು ಕೂಡಲೇ ಪರಿಶೀಲನೆ ನಡೆಸಿ, ಸಮಸ್ಯೆಯ ಮೂಲ ಪತ್ತೆಹಚ್ಚಬೇಕು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ತಕ್ಷಣ ಮರುಸ್ಥಾಪಿಸಬೇಕು ಎಂದು ಅವರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಅಂಬೇಡ್ಕರ್ ಯುವ ಸೇನೆ ಅಧ್ಯಕ್ಷ ಶ್ರೀಕಾಂತ್ ತಳಕೇರಿ, ಉಪಾಧ್ಯಕ್ಷ ವಿಜಯಕುಮಾರ್ ತಳಕೇರಿ, ಖಜಾಂಚಿ ಕಾರ್ತಿಕ್ ತಳಕೇರಿ, ಸಹ ಖಜಾಂಚಿ ಪ್ರವೀಣ್ ತಳಕೇರಿ, ಸಂಘಟನಾ ಸಹ ಕಾರ್ಯದರ್ಶಿ ಮಲ್ಲಿಕಾರ್ಜುನ ಕೆ. ತಳಕೇರಿ ಸೇರಿದಂತೆ ಇತರ ಯುವಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.