ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಅವರು ಭಾರತೀಯ ಉನ್ನತ ಶಿಕ್ಷಣ ಕ್ಷೇತ್ರಕ್ಕೆ, ವಿಶೇಷವಾಗಿ ರಸಾಯನಶಾಸ್ತ್ರ ಶಿಕ್ಷಣ ಮತ್ತು ಸಂಶೋಧನೆಗೆ ಸಲ್ಲಿಸಿರುವ ಜೀವಮಾನದ ಕೊಡುಗೆ ಹಾಗೂ ವಿಶ್ವವಿದ್ಯಾಲಯದ ನಿರ್ಮಾಣ ಮತ್ತು ಅಭಿವೃದ್ಧಿಯಲ್ಲಿ ವಹಿಸಿರುವ ನಾಯಕತ್ವವನ್ನು ಗುರುತಿಸಿ, ‘ಪದ್ಮಭೂಷಣ ಮುರಳಿ ಮನೋಹರ ಜೋಶಿ ವಿಶಿಷ್ಟ ಶಿಕ್ಷಕ ಸನ್ಮಾನ–2026’ಕ್ಕೆ ಭಾಜನರಾಗಿದ್ದಾರೆ.

ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಪದ್ಮಭೂಷಣ ಮುರಳಿ ಮನೋಹರ ಜೋಶಿ ಅವರು ಪ್ರೊ. ಬಟ್ಟು ಸತ್ಯನಾರಾಯಣ ಅವರಿಗೆ ಪದಕ ಮತ್ತು ಪ್ರಶಂಸಾಪತ್ರ ಪ್ರದಾನ ಮಾಡಿ ಗೌರವಿಸಿದರು.

ಇದೇ ಸಂದರ್ಭದಲ್ಲಿ ನವದೆಹಲಿಯಲ್ಲಿ ಫೆಡರೇಷನ್ ಫಾರ್ ವರ್ಲ್ಡ್ ಅಕಾಡೆಮಿಕ್ಸ್ (ಎಫ್‌ಡಬ್ಲ್ಯುಎ) ಆಯೋಜಿಸಿದ್ದ 9ನೇ ವಾರ್ಷಿಕ ಸಮ್ಮೇಳನ–2026ರಲ್ಲಿ ಪ್ರೊ. ಬಟ್ಟು ಸತ್ಯನಾರಾಯಣ ಅವರು ವಿಶೇಷ ಭಾಷಣಕಾರರಾಗಿ ಭಾಗವಹಿಸಿದ್ದರು.

ಸಮ್ಮೇಳನದ ಅಂಗವಾಗಿ ಆಯೋಜಿಸಿದ್ದ ‘ಭಾರತದಲ್ಲಿ ಉದಾರ ಕಲೆಗಳು ಮತ್ತು ಸಮಾಜ ವಿಜ್ಞಾನ ಶಿಕ್ಷಣ: ಸಮಕಾಲೀನ ಹಾಗೂ ಭವಿಷ್ಯದ ಅಗತ್ಯಗಳಿಗೆ ಅನುಗುಣವಾಗಿ ಪುನರ್ರಚನೆ’ ಎಂಬ ವಿಷಯದ ಗೋಷ್ಠಿಯಲ್ಲಿ ಪಾಲ್ಗೊಂಡು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಭಾರತದ ಉನ್ನತ ಶಿಕ್ಷಣ ಕ್ಷೇತ್ರವು ಎದುರಿಸುತ್ತಿರುವ ಬದಲಾವಣೆಗಳು ಮತ್ತು ಸವಾಲುಗಳ ಕುರಿತು ಮಾತನಾಡಿದ ಅವರು, ಸಮಕಾಲೀನ ಸವಾಲುಗಳನ್ನು ಎದುರಿಸುವುದರ ಜೊತೆಗೆ ಭವಿಷ್ಯದ ಶೈಕ್ಷಣಿಕ ಅಗತ್ಯಗಳಿಗೆ ಸ್ಪಂದಿಸಲು ಉದಾರ ಕಲೆಗಳು ಮತ್ತು ಸಮಾಜ ವಿಜ್ಞಾನ ಶಿಕ್ಷಣದ ಪಠ್ಯಕ್ರಮ ಹಾಗೂ ಬೋಧನಾ ವಿಧಾನಗಳನ್ನು ಕಾಲಕ್ಕೆ ತಕ್ಕಂತೆ ಪುನರ್ರಚಿಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

ಪ್ರೊ. ಬಟ್ಟು ಸತ್ಯನಾರಾಯಣ ಅವರಿಗೆ ಸಂದಿರುವ ಈ ಗೌರವವು ಉನ್ನತ ಶಿಕ್ಷಣ, ಶೈಕ್ಷಣಿಕ ನಾಯಕತ್ವ, ರಸಾಯನಶಾಸ್ತ್ರ ಶಿಕ್ಷಣ ಮತ್ತು ಸಂಶೋಧನೆ ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳ ನಿರ್ಮಾಣ ಮತ್ತು ಅಭಿವೃದ್ಧಿಗೆ ಅವರು ಸಲ್ಲಿಸಿರುವ ಮಹತ್ವದ ಕೊಡುಗೆಗಳಿಗೆ ಸಂದ ಮನ್ನಣೆಯಾಗಿದೆ. ವಿಶೇಷವಾಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಬೆಳವಣಿಗೆ ಮತ್ತು ಅಭಿವೃದ್ಧಿಯಲ್ಲಿ ಅವರು ವಹಿಸಿರುವ ಪ್ರಮುಖ ಪಾತ್ರಕ್ಕೆ ಈ ಸನ್ಮಾನ ಮತ್ತೊಂದು ಗೌರವವಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಾಜಿದ್‌ ಅಲಿ/ವಾರ್ತಾಭಾರತಿ

ಕಲಬುರಗಿ ಜಿಲ್ಲಾ ವರದಿಗಾರರು

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ