×
Ad

Kalaburagi | ನೀಟ್ ಪರೀಕ್ಷೆ ಸೂಸೂತ್ರವಾಗಿ ನಡೆಸುವಂತೆ ಅಧಿಕಾರಿಗಳಿಗೆ ಡಿಸಿ ಸೂಚನೆ

Update: 2026-06-17 21:13 IST

ಕಲಬುರಗಿ: ಜೂನ್ 21ರಂದು ನಡೆಯಲಿರುವ ನೀಟ್ (NEET) ಮರು ಪರೀಕ್ಷೆಯನ್ನು ಯಾವುದೇ ಲೋಪದೋಷಗಳಿಲ್ಲದೆ ಸುಸೂತ್ರವಾಗಿ ಹಾಗೂ ಕಟ್ಟುನಿಟ್ಟಾಗಿ ನಡೆಸುವಂತೆ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರೀಕ್ಷಾ ಪೂರ್ವಭಾವಿ ಸಭೆ ನಡೆಸಿದ ಅವರು, ನಗರದಲ್ಲಿ ಸುಮಾರು 20 ಪರೀಕ್ಷಾ ಕೇಂದ್ರಗಳಲ್ಲಿ ನೀಟ್ ಮರು ಪರೀಕ್ಷೆ ನಡೆಯಲಿದ್ದು, 9 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಪರೀಕ್ಷೆಗೆ ಮುನ್ನವೇ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಆಸನ ವ್ಯವಸ್ಥೆ, ವಿದ್ಯುತ್, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪರೀಕ್ಷಾ ದಿನ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದ್ದು, ಯಾವುದೇ ರೀತಿಯ ಅಕ್ರಮಕ್ಕೆ ಅವಕಾಶ ನೀಡಬಾರದು ಎಂದು ಹೇಳಿದರು. ಪರೀಕ್ಷಾ ಕೇಂದ್ರಗಳ ಸುತ್ತ ಪೊಲೀಸ್ ಇಲಾಖೆ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಿದರು.

ವಿದ್ಯಾರ್ಥಿಗಳು ಮೊಬೈಲ್ ಫೋನ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ಪರೀಕ್ಷಾ ಕೇಂದ್ರಕ್ಕೆ ತರಲು ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.

ಪರೀಕ್ಷೆಯ ಪಾವಿತ್ರ್ಯ ಮತ್ತು ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಯಶಸ್ವಿಯಾಗಿ ಪರೀಕ್ಷೆ ನಡೆಸುವಂತೆ ಅವರು ಸೂಚನೆ ನೀಡಿದರು.

ಸಭೆಯಲ್ಲಿ ಎಸ್.ಪಿ ಅಡ್ಡೂರು ಶ್ರೀನಿವಾಸುಲು, ಡಿ.ಸಿ.ಪಿ. ಶಾಲೂ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಪ್ರೊಬೇಷನರ್ ಐ.ಎ.ಎಸ್. ಅಧಿಕಾರಿ ಶಿಖರ್ ಮೋಘಾ, ಪರೀಕ್ಷೆಯ ನಗರ ಸಂಯೋಜಕರಾದ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲ ಭೂಪೇಂದ್ರ, ವಿ.ಟಿ‌.ಯು ಪ್ರಾಧ್ಯಾಪಕ ಶಂಭುಲಿಂಗ ಸೇರಿದಂತೆ ಇತರೆ ಅಧಿಕಾರಿಗಳು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News