×
Ad

ಕಲಬುರಗಿ | ಯುವಕನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ: ಕೊಲೆ ಆರೋಪಿಸಿದ ಕುಟುಂಬಸ್ಥರು

Update: 2026-06-09 19:44 IST

ಕಲಬುರಗಿ: ಆಳಂದ ತಾಲೂಕಿನ ದುತ್ತರಗಾಂವ್ ಗ್ರಾಮದಲ್ಲಿ 21 ವರ್ಷದ ಯುವಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಯುವಕನ ಕುಟುಂಬಸ್ಥರು ಕೊಲೆ ಆರೋಪವನ್ನು ಮಾಡಿದ್ದಾರೆ.  

ಮೃತನನ್ನು ಆಕಾಶ್ ಅಮೃತ ಮಾಂಗ್ (21) ಎಂದು ಗುರುತಿಸಲಾಗಿದೆ.

ಮೂಲಗಳ ಪ್ರಕಾರ, ಆಕಾಶ್ ಮಾಂಗ್‌ಗೆ ದುತ್ತರಗಾಂವ್ ಗ್ರಾಮದ ಯುವತಿಯೊಂದಿಗೆ ಪ್ರೇಮ ಸಂಬಂಧವಿತ್ತು. ಆ ಬಳಿಕ ಯುವತಿಗೆ ಬೇರೊಬ್ಬ ಯುವಕನೊಂದಿಗೆ ವಿವಾಹ ನಡೆದಿತ್ತು. ಆದರೆ, ಆಕಾಶ್ ಮತ್ತು ಯುವತಿಯ ನಡುವೆ ಸಂಪರ್ಕ ಮುಂದುವರಿದಿತ್ತು ಎನ್ನಲಾಗಿದೆ. ಈ ವಿಚಾರ ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು.

ಸೋಮವಾರ ಆಕಾಶ್ ಮಾಂಗ್ ಮೃತದೇಹ ಗ್ರಾಮದ ಸಮೀಪದ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತನ ಪೋಷಕರು ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಆರೋಪಿಸಿದ್ದಾರೆ. ಯುವತಿಯ ಕುಟುಂಬದವರೇ ಆಕಾಶ್ ನನ್ನು ಕೊಲೆ ಮಾಡಿ ಆತ್ಮಹತ್ಯೆಯಂತೆ ಬಿಂಬಿಸಲು ಮರಕ್ಕೆ ನೇಣು ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.  

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. 

ಈ ಕುರಿತು ಮೃತನ ತಂದೆ ಅಮೃತ ಮಾಂಗ್ ಅವರು ನೀಡಿದ ದೂರಿನ ಮೇರೆಗೆ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಓರ್ವ ಮಹಿಳೆ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.

"ಹುಣಸಿನ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಸಲಾಗುವುದು" ಎಂದು  ಕಲಬುರಗಿ ಎಸ್‌ಪಿ ಅಡ್ಡೂರು ಶ್ರೀನಿವಾಸಲು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News