ಇಕ್ರಮ್ ಶರೀಫ್ 

ಕಲಬುರಗಿ: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆದ ಎಫ್‌ಎಕ್ಯೂ ಗುಣಮಟ್ಟದ ಹೆಸರು ಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಕೃಷಿ ಉತ್ಪನ್ನಗಳನ್ನು ಖರೀದಿಸಲು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ನಿರ್ಧರಿಸಿದೆ.

ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರದ ಅ.1, 2026ರ ಆದೇಶದಂತೆ ಹೆಸರು ಕಾಳನ್ನು ಪ್ರತಿ ಕ್ವಿಂಟಾಲ್‌ಗೆ 8,780 ರೂ., ಸೋಯಾಬೀನ್‌ಗೆ 5,708 ರೂ. ಹಾಗೂ ಸೂರ್ಯಕಾಂತಿಗೆ 8,343 ರೂ. ಬೆಂಬಲ ಬೆಲೆಯಲ್ಲಿ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಹಾಗೂ ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹೆಸರು ಕಾಳಿಗೆ ಪ್ರತಿ ಎಕರೆಗೆ ಗರಿಷ್ಠ 4 ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್, ಸೋಯಾಬೀನ್‌ಗೆ ಪ್ರತಿ ಎಕರೆಗೆ ಗರಿಷ್ಠ 5 ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 25 ಕ್ವಿಂಟಾಲ್ ಮತ್ತು ಸೂರ್ಯಕಾಂತಿಗೆ ಪ್ರತಿ ಎಕರೆಗೆ ಗರಿಷ್ಠ 4 ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಪ್ರಮಾಣದಲ್ಲಿ ಖರೀದಿಸಲಾಗುವುದು.

ರೈತರು ಹೆಸರು ಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಮಾರಾಟಕ್ಕಾಗಿ ಡಿಸೆಂಬರ್ 19, 2026ರೊಳಗೆ ನೋಂದಣಿ ಮಾಡಿಕೊಳ್ಳಬೇಕು. ಡಿಸೆಂಬರ್ 29ರವರೆಗೆ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶವಿದೆ. ನೋಂದಣಿ ಹಾಗೂ ಖರೀದಿ ಪ್ರಕ್ರಿಯೆ ಏಕಕಾಲದಲ್ಲಿ ನಡೆಯಲಿದ್ದು, ರೈತರಿಂದ ಖರೀದಿಸಿದ ಉತ್ಪನ್ನದ ಮೊತ್ತವನ್ನು ಡಿಬಿಟಿ ಪೋರ್ಟಲ್ ಮೂಲಕ ಪಾವತಿಸಲಾಗುವುದು.

ಪ್ರತಿಯೊಂದು ಖರೀದಿ ಕೇಂದ್ರದಲ್ಲೂ ಪಿಒಎಸ್ ಯಂತ್ರದ ಮೂಲಕ ರೈತರ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆ ನಡೆಸಲಾಗುತ್ತದೆ. ಈ ಸಂದರ್ಭದಲ್ಲಿ ಯುಐಡಿಎಐ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯವಾಗಿರುತ್ತದೆ.

ಜಿಲ್ಲೆಯಲ್ಲಿ ಹೆಸರು ಕಾಳು ಖರೀದಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಹಾಗೂ ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ, ಸೋಯಾಬೀನ್ ಖರೀದಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಮತ್ತು ಸೂರ್ಯಕಾಂತಿ ಖರೀದಿಗೆ ಕರ್ನಾಟಕ ಸಹಕಾರ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ನಿಯಮಿತ ಸಂಸ್ಥೆಗಳನ್ನು ಖರೀದಿ ಸಂಸ್ಥೆಗಳಾಗಿ ನೇಮಿಸಲಾಗಿದೆ.

ಜಿಲ್ಲೆಯಲ್ಲಿ ಹೆಸರು ಕಾಳು ಖರೀದಿಗೆ 67 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಎಫ್‌ಪಿಒಗಳನ್ನು, ಸೋಯಾಬೀನ್ ಖರೀದಿಗೆ 55 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಎಫ್‌ಪಿಒಗಳನ್ನು ಮತ್ತು ಸೂರ್ಯಕಾಂತಿ ಖರೀದಿಗೆ 11 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಖರೀದಿ ಕೇಂದ್ರಗಳಾಗಿ ಗುರುತಿಸಲಾಗಿದೆ.

ರೈತರು ಸಮೀಪದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಎಫ್‌ಪಿಒಗಳನ್ನು ಸಂಪರ್ಕಿಸಿ, ನಿಗದಿತ ಅವಧಿಯಲ್ಲಿ ನೋಂದಣಿ ಮಾಡಿಕೊಂಡು ತಮ್ಮ ಎಫ್‌ಎಕ್ಯೂ ಗುಣಮಟ್ಟದ ಉತ್ಪನ್ನಗಳನ್ನು ಮಾರಾಟ ಮಾಡುವ ಮೂಲಕ ಬೆಂಬಲ ಬೆಲೆ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

ಹೆಸರು ಕಾಳು ಹಾಗೂ ಸೋಯಾಬೀನ್ ನೋಂದಣಿ ಮತ್ತು ಖರೀದಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತವನ್ನು 9449864446 ಸಂಖ್ಯೆಯಲ್ಲಿ, ಹೆಸರು ಕಾಳು ನೋಂದಣಿ ಹಾಗೂ ಖರೀದಿಗೆ ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯನ್ನು 9448641163 ಸಂಖ್ಯೆಯಲ್ಲಿ ಹಾಗೂ ಸೂರ್ಯಕಾಂತಿ ನೋಂದಣಿ ಮತ್ತು ಖರೀದಿಗೆ ಕರ್ನಾಟಕ ಸಹಕಾರ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ನಿಯಮಿತವನ್ನು 9591812142 ಸಂಖ್ಯೆಯಲ್ಲಿ ಸಂಪರ್ಕಿಸಬಹುದು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor