Kalaburagi | ಬೆಳೆ ವಿಮೆ, ಬರ ಪರಿಹಾರ ಬಿಡುಗಡೆಗೆ ಆಗ್ರಹ: ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿಯಾದ ಹರ್ಷ ಗುತ್ತೇದಾರ್
ಕಲಬುರಗಿ: ಆಳಂದ ತಾಲ್ಲೂಕಿನ ರೈತರಿಗೆ ಬೆಳೆ ವಿಮೆ ಹಣ ಬಿಡುಗಡೆ ಮಾಡುವುದು, ಬರ ಪರಿಹಾರ ಒದಗಿಸುವುದು ಹಾಗೂ ಸ್ಥಳೀಯವಾಗಿ ಕೈಗಾರಿಕೆ ಸ್ಥಾಪಿಸುವ ಕುರಿತು ಬಿಜೆಪಿ ಮುಖಂಡ ಹರ್ಷ ಎಸ್.ಗುತ್ತೇದಾರ್ ಅವರು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಚರ್ಚೆ ನಡೆಸಿದರು.
ಶನಿವಾರ ಬೆಂಗಳೂರಿನ ಜೆ.ಪಿ. ನಗರದ ನಿವಾಸದಲ್ಲಿ ಕೇಂದ್ರ ಸಚಿವರನ್ನು ಭೇಟಿಯಾದ ಹರ್ಷ ಗುತ್ತೇದಾರ್, ಆಳಂದ ತಾಲ್ಲೂಕಿನ ರೈತರು ಮತ್ತು ಯುವಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು.
ಮಳೆಯ ಕೊರತೆಯಿಂದ ತಾಲ್ಲೂಕಿನಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರೈತರಿಗೆ ಬರಬೇಕಿರುವ ಬೆಳೆ ವಿಮೆ ಹಣವನ್ನು ಶೀಘ್ರವಾಗಿ ಜಮೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಮನವಿ ಮಾಡಿದರು. ಬರ ಪರಿಹಾರ ಒದಗಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ ಎಂಬ ಬಗ್ಗೆಯೂ ಸಚಿವರ ಗಮನ ಸೆಳೆದರು.
ಇದೇ ವೇಳೆ ಆಳಂದ ತಾಲ್ಲೂಕಿನಲ್ಲಿ ಹೊಸ ಕೈಗಾರಿಕೆ ಸ್ಥಾಪಿಸಲು ಕ್ರಮ ಕೈಗೊಳ್ಳುವಂತೆ ಕೋರಿದರು. ಕೈಗಾರಿಕೆ ಆರಂಭವಾದರೆ ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶಗಳು ದೊರೆಯುವುದರ ಜೊತೆಗೆ ತಾಲ್ಲೂಕಿನ ಆರ್ಥಿಕ ಹಾಗೂ ಕೈಗಾರಿಕಾ ಅಭಿವೃದ್ಧಿಗೂ ಉತ್ತೇಜನ ಸಿಗಲಿದೆ ಎಂದು ತಿಳಿಸಿದರು.
ರೈತರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದು, ಯುವಕರಿಗೆ ಸ್ಥಳೀಯವಾಗಿಯೇ ಉದ್ಯೋಗಾವಕಾಶ ಒದಗಿಸುವುದು ಹಾಗೂ ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ನೆರವು ನೀಡುವಂತೆ ಸಚಿವರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಶರಣಗೌಡ ಪಾಟೀಲ ದೇವಂತಗಿ, ಶಿವಪ್ರಕಾಶ ಹೀರಾ ಹಾಗೂ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ನಾಗರಾಜ ಶೇಗಜಿ ಉಪಸ್ಥಿತರಿದ್ದರು.