ಕಲಬುರಗಿ: ಮರತೂರಿನ ವಿಜ್ಞಾನೇಶ್ವರ ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯರನ್ನು ಕೂಡಲೇ ವರ್ಗಾವಣೆಗೊಳಿಸಿ, ಕಾಲೇಜಿನಲ್ಲಿನ ಅವ್ಯವಸ್ಥೆ ಹಾಗೂ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳ ಪರವಾಗಿ ಶಿಷ್ಟಾಚಾರ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಅಧೀನದಲ್ಲಿರುವ ಈ ಕಾಲೇಜಿನಲ್ಲಿ ಅಗತ್ಯ ಮೂಲಸೌಕರ್ಯಗಳ ಕೊರತೆಯಿದ್ದು, ವಿದ್ಯಾರ್ಥಿಗಳಿಗೆ ಸಮರ್ಪಕ ಶೈಕ್ಷಣಿಕ ವಾತಾವರಣ ಕಲ್ಪಿಸುವಲ್ಲಿ ಆಡಳಿತ ವಿಫಲವಾಗಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. ಪ್ರಾಚಾರ್ಯರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುವುದರ ಜತೆಗೆ ಮಾನಸಿಕ ಒತ್ತಡ ಹೇರುತ್ತಿದ್ದಾರೆ ಎಂಬ ಗಂಭೀರ ಆರೋಪವನ್ನೂ ಮಾಡಿದ್ದಾರೆ.

2022-23ನೇ ಸಾಲಿನ ವಿದ್ಯಾರ್ಥಿಗಳ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಅಂಕಪಟ್ಟಿಗಳನ್ನು ಇದುವರೆಗೂ ವಿತರಿಸಿಲ್ಲ. ವಿವಿಧ ಕಾರಣಗಳನ್ನು ಮುಂದಿಟ್ಟುಕೊಂಡು ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡಲಾಗುತ್ತಿದೆ. ಕಾರಾಗೃಹ ವೀಕ್ಷಣೆಯ ಹೆಸರಿನಲ್ಲಿ ತಲಾ 1,000 ರೂ. ಹಾಗೂ ಕಾಲೇಜಿನ ಸಮವಸ್ತ್ರಕ್ಕಾಗಿ ಕಳಪೆ ಗುಣಮಟ್ಟದ ಬಟ್ಟೆಗಳನ್ನು ಖರೀದಿಸಿ ತಲಾ 4,000 ರೂ. ಪಡೆಯಲಾಗಿದೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ಕಳೆದ ಹಲವು ವರ್ಷಗಳಿಂದ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಆಯೋಜಿಸಿಲ್ಲ. ಅಗತ್ಯ ಸೌಲಭ್ಯಗಳನ್ನೂ ಒದಗಿಸಿಲ್ಲ ಎಂದು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಆರೋಪಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಮನವಿಯೊಂದಿಗೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ಪ್ರಾಚಾರ್ಯ ಶಿವಾನಂದ ಎಚ್. ಲೇಗಂಟಿ ಅವರು ಸುಮಾರು ಹತ್ತು ವರ್ಷಗಳಿಂದ ಇದೇ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದು ನಾಗರಿಕ ಸೇವಾ ನಿಯಮಗಳಿಗೆ ವಿರುದ್ಧವಾಗಿರುವ ಸಾಧ್ಯತೆಯಿದೆ ಎಂದು ವಿದ್ಯಾರ್ಥಿಗಳು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡುವುದು, ಕಾಲೇಜಿನ ಶೈಕ್ಷಣಿಕ ವಾತಾವರಣ ಸುಧಾರಿಸುವುದು ಹಾಗೂ ಆಡಳಿತದಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಆರೋಪಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಪ್ರಾಚಾರ್ಯರನ್ನು ಕೂಡಲೇ ವರ್ಗಾವಣೆಗೊಳಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಕಾನೂನು ವಿದ್ಯಾರ್ಥಿಗಳಾದ ಸಾಹೇಬ್ ಹುಸೇನ್, ಸುಧಾಕರ, ವಾಯ್.ಎಸ್. ಸಿಂದಗೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಾಜಿದ್‌ ಅಲಿ/ವಾರ್ತಾಭಾರತಿ

ಕಲಬುರಗಿ ಜಿಲ್ಲಾ ವರದಿಗಾರರು

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ