Kalaburagi | ಉರ್ದು ಶಿಕ್ಷಕರ ಖಾಲಿ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಲು ಒತ್ತಾಯ

Update: 2026-08-22 21:22 IST

ಕಲಬುರಗಿ: ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಉರ್ದು ಶಿಕ್ಷಕರ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸುವಂತೆ ಒತ್ತಾಯಿಸಿ ಉನ್ನತ ಮಟ್ಟದ ನಿಯೋಗವು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು.

ಕರ್ನಾಟಕದಾದ್ಯಂತ ಉರ್ದು ಶಿಕ್ಷಕರ ಹುದ್ದೆಗಳು ಖಾಲಿ ಇರುವುದರಿಂದ ಉರ್ದು ಮಾಧ್ಯಮದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ಖಾಲಿ ಹುದ್ದೆಗಳಿಗೆ ಕೂಡಲೇ ನೇಮಕಾತಿ ಪ್ರಕ್ರಿಯೆ ಆರಂಭಿಸುವಂತೆ ನಿಯೋಗವು ಖರ್ಗೆ ಅವರ ಗಮನಕ್ಕೆ ತಂದಿತು.

ರಾಜ್ಯದಲ್ಲಿ ಸುಮಾರು 4,300 ಸರ್ಕಾರಿ ಉರ್ದು ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಇತ್ತೀಚೆಗೆ 15,000 ಕನ್ನಡ ಶಿಕ್ಷಕರ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಆದರೆ, ಉರ್ದು ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನಿಯೋಗದ ಸದಸ್ಯರು ತಿಳಿಸಿದರು.

ಉರ್ದು ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳ ಬುನಾದಿ ಕಲಿಕೆ ಹಾಗೂ ಶೈಕ್ಷಣಿಕ ಪ್ರಗತಿಗೆ ಹಿನ್ನಡೆಯಾಗುತ್ತಿದೆ. ಶಿಕ್ಷಕ ಹುದ್ದೆಗಳ ನಿರೀಕ್ಷೆಯಲ್ಲಿರುವ ಅರ್ಹ ಉದ್ಯೋಗಾಕಾಂಕ್ಷಿಗಳಿಗೂ ಇದರಿಂದ ಅನ್ಯಾಯವಾಗುತ್ತಿದೆ. ಆದ್ದರಿಂದ ಯಾವುದೇ ವಿಳಂಬವಿಲ್ಲದೆ ನೇಮಕಾತಿ ಅಧಿಸೂಚನೆ ಹೊರಡಿಸಬೇಕು ಎಂದು ಒತ್ತಾಯಿಸಿದರು.

ನಿಯೋಗದ ಮನವಿ ಆಲಿಸಿದ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ತುರ್ತು ಪರಿಹಾರಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಈ ಕುರಿತು ಮುಖ್ಯಮಂತ್ರಿ ಅವರೊಂದಿಗೆ ವೈಯಕ್ತಿಕವಾಗಿ ಮಾತನಾಡಿ, ಉರ್ದು ಮಾಧ್ಯಮ ವಿದ್ಯಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ನ್ಯಾಯ ದೊರಕಿಸಲು ಪ್ರಯತ್ನಿಸುವುದಾಗಿ ತಿಳಿಸಿದರು.

ನಿಯೋಗದಲ್ಲಿ ಕುಡಾ ಮಾಜಿ ಅಧ್ಯಕ್ಷ ಡಾ. ಮೊಹಮ್ಮದ್ ಅಸ್ಗರ್ ಚುಲ್ಬುಲ್, ವಕೀಲ ಅಬ್ದುಲ್ ಜಬ್ಬಾರ್ ಗೂಲಾ, ಅಬ್ದುಲ್ ರಹೀಮ್ ಪಟೇಲ್, ರಿಜ್ವಾನ್-ಉರ್-ರಹಮಾನ್ ಸಿದ್ದಿಕಿ, ಅಬ್ದುಲ್ ಬಾರಿ, ಹೈದರ್ ಅಲಿ ಬಾಗ್ಬಾನ್, ಅಬ್ರಾರ್ ಅಹ್ಮದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News