ಕಲಬುರಗಿ: ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅವರು ಮಂಗಳವಾರ ಶಹಾಬಾದ್ ತಾಲೂಕು ಪ್ರವಾಸ ಕೈಗೊಂಡು ಬರಗಾಲದಿಂದ ಹಾನಿಗೊಳಗಾದ ಬೆಳೆಗಳನ್ನು ಪರಿಶೀಲಿಸುವುದರ ಜೊತೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಆಡಳಿತಾತ್ಮಕ ಕಾರ್ಯಗಳ ಪ್ರಗತಿಯನ್ನು ವೀಕ್ಷಿಸಿದರು.

ಮೊದಲಿಗೆ ತರನಳ್ಳಿ ಗ್ರಾಮದಲ್ಲಿ ರೈತನ ಹೊಲಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಮಳೆ ಕೊರತೆಯಿಂದ ಹಾನಿಗೊಳಗಾದ ಬೆಳೆಗಳ ಸ್ಥಿತಿಯನ್ನು ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಬಳಿಕ ಮರತೂರ ಗ್ರಾಮಕ್ಕೆ ಭೇಟಿ ನೀಡಿ ವಿಶೇಷ ಸಂಕ್ಷಿಪ್ತ ಮತದಾರರ ಪರಿಷ್ಕರಣೆ (ಎಸ್‌ಐಆರ್) ಅಂಗವಾಗಿ ತಹಶೀಲ್ದಾರ್ ನೀಲಪ್ರಭಾ ಅವರ ನೇತೃತ್ವದಲ್ಲಿ ನಡೆಯುತ್ತಿದ್ದ ಮತದಾರರ ವಿಚಾರಣೆ ಪ್ರಕ್ರಿಯೆಯನ್ನು ವೀಕ್ಷಿಸಿದರು.

ನಂತರ ಶಹಾಬಾದ್ ಪಟ್ಟಣಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ, ನಗರಸಭೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಗರದ ನಿವಾಸಿಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ ಸೂಚಿಸಿದರು. ನಗರದಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ನಾಡ ಕಚೇರಿಗಳ ಮೂಲಕ ಸಾರ್ವಜನಿಕರಿಗೆ ನೀಡಲಾಗುವ ಸೇವೆಗಳು ತ್ವರಿತವಾಗಿ ವಿಲೇವಾರಿಯಾಗಬೇಕು. ಸಾರ್ವಜನಿಕರು ಅನಗತ್ಯವಾಗಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಬರದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಈ ವೇಳೆ ಪಟ್ಟಣದಲ್ಲಿ ಶ್ರೀ ಶರಣಬಸವೇಶ್ವರ ದೇವಸ್ಥಾನದಿಂದ ಬೃಂದಾವನ ಧಾಮದವರೆಗೆ ನಡೆಯುತ್ತಿರುವ ಡಾಂಬರೀಕರಣ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿ, ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡುವಂತೆ ಗುತ್ತಿಗೆದಾರರಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಪರಿಶೀಲನೆ ವೇಳೆ ಪ್ರೊಬೇಷನರಿ ಐಎಎಸ್ ಅಧಿಕಾರಿ ಶಿಖರ್ ಮೋಘಾ, ನಗರಸಭೆ ಪೌರಾಯುಕ್ತ ಮನೋಜ ಗುರಿಕರ್, ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಇತರ ಸಿಬ್ಬಂದಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor