ಕಲಬುರಗಿ |ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಪೋಸ್ಟ್ : ಫೇಸ್‌ಬುಕ್ ಖಾತೆ ಅಡ್ಮಿನ್ ಬಂಧನ
ಕಲಬುರಗಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಸೇರಿದಂತೆ ಪರಿಶಿಷ್ಟ ಸಮುದಾಯದ ವಿವಿಧ ರಾಜಕೀಯ ಮುಖಂಡರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡುತ್ತಿದ್ದ 'ಗುಲಾಮರ ಅಪ್ಪ' ಎನ್ನುವ ಫೇಸ್‌ಬುಕ್ ಖಾತೆಯ ಅಡ್ಮಿನ್ ನನ್ನು ಸಬ್ ಅರ್ಬನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ವಿದ್ಯಾಮಾನ್ಯ ನಗರದ ನಿವಾಸಿ ಆನಂದ್ ಅಂಜನಪ್ಪ (41) ಬಂಧಿತ ಆರೋಪಿ.
'ಗುಲಾಮರ ಅಪ್ಪ' ಹೆಸರಲ್ಲಿ ಫೇಸ್‌ಬುಕ್ ಖಾತೆ ತೆರೆದಿದ್ದ ಆನಂದ್ ಅಂಜನಪ್ಪ, ಡಾ.ಅಂಬೇಡ್ಕರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಪರಿಶಿಷ್ಟ ಸಮುದಾಯದ ನಾಯಕರ ಬಗ್ಗೆ ಅವಹೇಳನಕಾರಿ ಬರಹ ಪ್ರಕಟಿಸುತ್ತಿದ್ದ. ಈ ಬಗ್ಗೆ ಕ್ರಮಕ್ಕೆ ಆಗ್ರಹಿಸಿ, ರಾಜ್ಯದ ದಲಿತ ಮುಖಂಡರು ಸಬ್ ಅರ್ಬನ್ ಪೊಲೀಸ್ ಠಾಣೆ ಸೇರಿದಂತೆ ರಾಜ್ಯದೆಲ್ಲೆಡೆ ಪ್ರಕರಣ ದಾಖಲಿಸಿದ್ದರು.
ನಕಲಿ ಖಾತೆ ನಡೆಸುತ್ತಿದ್ದ ಆರೋಪಿಯನ್ನು ಬಂಧಿಸಬೇಕೆಂದು ಒತ್ತಾಯಿಸಿ, ಗೃಹ ಸಚಿವ ಜಿ.ಪರಮೇಶ್ವರ, ಸಚಿವ ಎಚ್.ಸಿ. ಮಹದೇವಪ್ಪ, ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಸಲ್ಲಿಸಿದ್ದರು.
ಸದ್ಯ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.