Kalaburagi | ವಾಟ್ಸ್‌ಆ್ಯಪ್‌ನಲ್ಲಿ ಸ್ಟೇಟಸ್‌ನಲ್ಲಿ ಫೋಟೊ ಹಾಕಿ ಕಿರುಕುಳ ಆರೋಪ; ಯುವತಿ ಆತ್ಮಹತ್ಯೆ

ಯುವಕನ ವಿರುದ್ಧ ಪ್ರಕರಣ ದಾಖಲು

Update: 2026-08-10 22:36 IST

ಕಲಬುರಗಿ: ಯುವತಿಯ ಫೋಟೊವನ್ನು ವಾಟ್ಸ್‌ಆ್ಯಪ್ ಸ್ಟೇಟಸ್‌ನಲ್ಲಿ ಪ್ರಕಟಿಸಿ, ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮನನೊಂದು ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಮಲಾಪುರ ತಾಲೂಕಿನ ಹಾಳಸುಲ್ತಾನಪುರ ಗ್ರಾಮದಲ್ಲಿ ನಡೆದಿದೆ.

ಮೃತ ಯುವತಿಯನ್ನು ಸಂಜೀವಿನಿ (22) ಎಂದು ಗುರುತಿಸಲಾಗಿದೆ. ಈ ಸಂಬಂಧ ಯುವತಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಮಹಾಗಾಂವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ದೂರಿನ ಪ್ರಕಾರ, ಸಂಜೀವಿನಿ ಕಾಲೇಜು ವ್ಯಾಸಂಗ ಪೂರ್ಣಗೊಳಿಸಿ ಮನೆಯಲ್ಲಿ ಇದ್ದರು. ಈ ಹಿಂದೆ ಪರಿಚಯವಿದ್ದ ಯುವಕನೊಬ್ಬ ಸಂಜೀವಿನಿ ಹಾಗೂ ಆತನ ಫೋಟೊ ಇರುವ ಚಿತ್ರವನ್ನು ವಾಟ್ಸ್‌ಆ್ಯಪ್ ಸ್ಟೇಟಸ್‌ನಲ್ಲಿ ಪ್ರಕಟಿಸಿದ್ದಾನೆ ಎನ್ನಲಾಗಿದೆ. ಈ ಕುರಿತು ಆತನಿಗೆ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸದಂತೆ ಹಲವು ಬಾರಿ ತಿಳಿಸಿದ್ದರೂ ಮತ್ತೆ ಫೋಟೋ ಪ್ರಕಟಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ವಿಷಯ ತಿಳಿದು ಕುಟುಂಬದವರು ಸಂಜೀವಿನಿಗೆ ಸಮಾಧಾನ ಹೇಳಿದ ಬಳಿಕ, ಅವರು ಮನೆಯ ಕೋಣೆಗೆ ತೆರಳಿದ್ದರು. ಕೆಲ ಸಮಯದ ನಂತರ ಕೋಣೆಯಿಂದ ಹೊರಬರದ ಹಿನ್ನೆಲೆಯಲ್ಲಿ ಕುಟುಂಬದವರು ಪರಿಶೀಲಿಸಿದಾಗ ಸಂಜೀವಿನಿ ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ. ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲು ಮುಂದಾದರೂ, ಅದಾಗಲೇ ಅವರು ಮೃತಪಟ್ಟಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ತಮ್ಮ ಮಗಳ ಸಾವಿಗೆ ವಾಟ್ಸ್‌ಆ್ಯಪ್‌ನಲ್ಲಿ ಫೋಟೊ ಪ್ರಕಟಿಸಿ ಕಿರುಕುಳ ನೀಡಿದ ದೀಪಕ್ ಎನ್ನುವ ಯುವಕನೇ ಕಾರಣ ಎಂದು ಆರೋಪಿಸಿ ಮೃತಳ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನ ಆಧಾರದ ಮೇಲೆ ಮಹಾಗಾಂವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News