ಕಲಬುರಗಿ : ನಗರದ ವಾರ್ಡ್ ಸಂಖ್ಯೆ 2ರ ರಾಮನಗರ ಭಾಗ-2ರಲ್ಲಿ ವಾಸಿಸುತ್ತಿರುವ 80ರಿಂದ 90 ಅಲೆಮಾರಿ ಸಮುದಾಯ, ಪರಿಶಿಷ್ಟ ಜಾತಿ ಹಾಗೂ ಅಲ್ಪಸಂಖ್ಯಾತ ಕುಟುಂಬಗಳಿಗೆ ಕುಡಿಯುವ ನೀರು, ವಿದ್ಯುತ್ ಮತ್ತು ಶೌಚಾಲಯದಂತಹ ಕನಿಷ್ಠ ಮೂಲಸೌಕರ್ಯ ಕಲ್ಪಿಸದೆ ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ನಿರ್ಲಕ್ಷ್ಯ ವಹಿಸುತ್ತಿವೆ ಎಂದು ಸ್ಲಂ ಜನಾಂದೋಲನ ಕರ್ನಾಟಕದ ಜಿಲ್ಲಾ ಘಟಕ ಆರೋಪಿಸಿದೆ.

ರಾಮನಗರ ಭಾಗ-2ರ ಪ್ರದೇಶವನ್ನು ಕೊಳಗೇರಿ ಎಂದು ಘೋಷಿಸುವಂತೆ 2022ರಿಂದ ಮಹಾನಗರ ಪಾಲಿಕೆಗೆ ನಿರಂತರವಾಗಿ ಮನವಿ ಸಲ್ಲಿಸುತ್ತಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಪರಿಣಾಮವಾಗಿ ಇಲ್ಲಿನ ಕುಟುಂಬಗಳು ಮೂಲಭೂತ ಸೌಲಭ್ಯಗಳಿಲ್ಲದೆ ಸಂಕಷ್ಟ ಎದುರಿಸುತ್ತಿವೆ ಎಂದು ಸಂಘಟನೆ ತಿಳಿಸಿದೆ.

ಜುಲೈ 1, 2026ರಂದು ಉಚ್ಚ ನ್ಯಾಯಾಲಯ ತಡೆಯಾಜ್ಞೆ ನೀಡಿದ್ದರೂ, ಆಹಾರ ಇಲಾಖೆಯ ಅಧಿಕಾರಿಗಳು ಏಕಾಏಕಿ ಸ್ಥಳಕ್ಕೆ ಆಗಮಿಸಿ ನಿವಾಸಿಗಳು ಸಂಚರಿಸಲು ರಸ್ತೆ ಬಿಡದೆ ಸುತ್ತಲೂ ಟಿನ್‌ಗಳನ್ನು ಅಳವಡಿಸಿ ಗೋಡೆಯಂತೆ ನಿರ್ಮಿಸಿದ್ದಾರೆ. ಇದರಿಂದ ನಿವಾಸಿಗಳಿಗೆ, ಅದರಲ್ಲೂ ಮಹಿಳೆಯರಿಗೆ ಶೌಚಾಲಯಕ್ಕೆ ತೆರಳಲು ಹಾಗೂ ಕುಡಿಯುವ ನೀರು ಪಡೆಯಲು ತೀವ್ರ ತೊಂದರೆಯಾಗುತ್ತಿದೆ ಎಂದು ದೂರಿದೆ.

ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಜ. 19, 2026ರಿಂದ ಮಹಾನಗರ ಪಾಲಿಕೆ ಎದುರು ನಿರಂತರ ಧರಣಿ ನಡೆಸಲಾಗುತ್ತಿದೆ. ನ. 23ರಂದು ಜಿಲ್ಲಾಧಿಕಾರಿಗಳ ಆಪ್ತ ಸಹಾಯಕರು ದೂರವಾಣಿ ಮೂಲಕ ಕರೆ ಮಾಡಿ ಸಂಜೆ 5 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಗೆ ಬರುವಂತೆ ತಿಳಿಸಿದ್ದರು. ಅದರಂತೆ ಕಚೇರಿಗೆ ತೆರಳಿ ಸಮಸ್ಯೆ ವಿವರಿಸಿದಾಗ, ಸ್ಲಂ ಘೋಷಣೆಯಿಂದ ಮೂಲಸೌಕರ್ಯ ಕಲ್ಪಿಸಲು ಸಾಧ್ಯವಿಲ್ಲವೇ ಎಂದು ಜಿಲ್ಲಾಧಿಕಾರಿಗಳು ಪ್ರಶ್ನಿಸಿ, ಸ್ಲಂ ಕಾಯ್ದೆಯ ಬಗ್ಗೆ ಮಾಹಿತಿ ಕೇಳಿದ್ದಾರೆ. ಅಲ್ಲದೆ, ಹೋರಾಟದಿಂದ ಏನು ಪ್ರಯೋಜನ? ಮಹಾನಗರ ಪಾಲಿಕೆ ಎದುರು ಅಡುಗೆ ಮಾಡಿ ಊಟ ಮಾಡಿದರೆ ಏನಾಗುತ್ತದೆ ಎಂದು ಹೇಳಿರುವುದಾಗಿ ಸಂಘಟನೆ ಆರೋಪಿಸಿದೆ.

ಕನಿಷ್ಠ ಕುಡಿಯುವ ನೀರು, ವಿದ್ಯುತ್ ಮತ್ತು ಶೌಚಾಲಯದ ವ್ಯವಸ್ಥೆಯನ್ನಾದರೂ ಕಲ್ಪಿಸುವಂತೆ ಮನವಿ ಮಾಡಿದಾಗ, ನಿವಾಸಿಗಳು ವಾಸಿಸುತ್ತಿರುವ ಜಾಗ ಆಹಾರ ಇಲಾಖೆಗೆ ಸೇರಿರುವುದರಿಂದ ನಿರಾಕ್ಷೇಪಣಾ ಪತ್ರ (ಎನ್‌ಒಸಿ) ನೀಡಲು ಸಾಧ್ಯವಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗಿದೆ. ಆದರೆ, ಎನ್‌ಒಸಿ ನೀಡದಿದ್ದರೂ ಪರವಾಗಿಲ್ಲ, ಮೂಲಸೌಕರ್ಯ ಕಲ್ಪಿಸುವವರೆಗೆ ಹೋರಾಟ ಕೈಬಿಡುವುದಿಲ್ಲ ಎಂದು ಸಂಘಟನೆಯ ಮುಖಂಡರು ಸ್ಪಷ್ಟಪಡಿಸಿದ್ದಾರೆ.

ಸಂವಿಧಾನದ ವಿಧಿ 21 ಹಾಗೂ ಸ್ಲಂ ಕಾಯ್ದೆಯ ಆಶಯಗಳನ್ನು ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ಉಲ್ಲಂಘಿಸುತ್ತಿವೆ. ಬಡ ಕುಟುಂಬಗಳಿಗೆ ಕುಡಿಯುವ ನೀರು, ವಿದ್ಯುತ್ ಮತ್ತು ಶೌಚಾಲಯದಂತಹ ಮೂಲಭೂತ ಸೌಲಭ್ಯ ಕಲ್ಪಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ಹೋರಾಟವನ್ನು ಹತ್ತಿಕ್ಕುವ ರೀತಿಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಮಹಾನಗರ ಪಾಲಿಕೆ ಆಯುಕ್ತರು ನಡೆದುಕೊಳ್ಳುತ್ತಿರುವುದು ಖಂಡನೀಯ ಎಂದು ಸ್ಲಂ ಜನಾಂದೋಲನ ಕರ್ನಾಟಕದ ಜಿಲ್ಲಾ ಸಂಚಾಲಕಿ ರೇಣುಕಾ ಸರಡಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಘಟನೆಯ ಅಧ್ಯಕ್ಷೆ ಗೌರಮ್ಮ ಮಾಕಾ, ಖಜಾಂಚಿ ಸುನಿತ್ರಾ ಹಾಗೂ ರಾಮನಗರ ಭಾಗ-2ರ ನಿವಾಸಿಗಳಾದ ಮಾರುತಿ ಭೋವಿ, ಲಕ್ಷ್ಮಿ ಭೋವಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಾಜಿದ್‌ ಅಲಿ/ವಾರ್ತಾಭಾರತಿ

ಕಲಬುರಗಿ ಜಿಲ್ಲಾ ವರದಿಗಾರರು

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ