×
Ad

ಕಲಬುರಗಿ ವಿಭಾಗದ ಪ್ರಗತಿ ಪರಿಶೀಲನಾ ಸಭೆ

Update: 2025-05-26 18:07 IST

ರಾಯಚೂರು : ಕಲ್ಯಾಣ ಕರ್ನಾಟಕ ಭಾಗದ ರೈತರ ಅವಶ್ಯಕತೆಗೆ ಅನುಗುಣವಾಗಿ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ಪೂರೈಕೆ ಮಾಡಬೇಕು ಎಂದು ಕೃಷಿ ಇಲಾಖೆಯ ಆಯುಕ್ತರಾದ ವೈ.ಎಸ್.ಪಾಟೀಲ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮೇ 26ರಂದು ಸೋಮವಾರ ನಗರದ ಕೃಷಿ ವಿವಿಯ ಆಡಳಿತ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಲಬುರಗಿ ವಿಭಾಗದ ಜಿಲ್ಲೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಮುಂಗಾರು ಮಳೆ ಉತ್ತಮವಾಗಿದ್ದು, ಮುಂದಿನ ದಿನಗಳಲ್ಲಿ ಕೃಷಿ ಚಟುವಟಿಕೆಗಳು ಗರಿಗೆದರಿವೆ. ರೈತರಿಗೆ ಅಗತ್ಯವಿರುವ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ವಿತರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಯಾವುದೇ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಬಿತ್ತನೆ ಬೀಜ, ರಸಗೊಬ್ಬರಗಳ ಕೃತಕ ಅಭಾವ ಸೃಷ್ಟಿಸಿದರೆ ಅಥವಾ ಸರ್ಕಾರ ನಿಗದಿ ಪಡಿಸಿದ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ, ಅಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಗೊಬ್ಬರ ಮಾರಾಟ ಕೇಂದ್ರಗಳಲ್ಲಿ ಗೊಬ್ಬರದ ದರಗಳನ್ನು ಫಲಕದಲ್ಲಿ ಪ್ರದರ್ಶಿಸಬೇಕು ಎಂದರು.

ಹೋಬಳಿ ಮಟ್ಟದ ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ, ಗೊಬ್ಬರ ಮತ್ತಿತರ ಪರಿಕರಗಳನ್ನು ರಿಯಾಯಿತಿ ದರದಲ್ಲಿ ವಿತರಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿತ್ತನೆ ಬೀಜ ರಸಗೊಬ್ಬರ ಹಾಗೂ ಮತ್ತಿತರ ಪರಿಕರಗಳ ದಾಸ್ತಾನುಗಳ ಬಗ್ಗೆ ರೈತರಿಗೆ ತಿಳಿಸಬೇಕು. ಈ ಬಗ್ಗೆ ಹೆಚ್ಚಿನ ಮಟ್ಟದಲ್ಲಿ ಪ್ರಚಾರ ಕೈಗೊಳ್ಳಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಜಿಲ್ಲೆಯ ವಿವಿಧ ಕಡೆ ನಿರಂತರ ಭೇಟಿ ನೀಡಿ ಪರಿಶೀಲನೆ ಮಾಡಬೇಕೆಂದರು.

ಈ ಸಂದರ್ಭದಲ್ಲಿ ಬೆಂಗಳೂರಿನ ಜಲಾನಯನ ಆಯುಕ್ತರಾದ ಮಹೇಶ್ ಬಿ.ಶಿರೂರ್, ಕೃಷಿ ನಿರ್ದೇಶಕರಾದ ಜಿ.ಟಿ.ಪುತ್ರ, ರಾಜ್ಯ ಸಕೆಂಡರಿ ಕೃಷಿ ನಿರ್ದೇಶಕರಾದ ವೆಂಕಟರಾಮರೆಡ್ಡಿ ಜೆ. ಪಾಟೀಲ್, ಕರ್ನಾಟಕ ರಾಜ್ಯ ಬೀಜ ನಿಯಮಿತದ ವ್ಯವಸ್ಥಾಪನ ನಿರ್ದೇಶಕರಾದ ಅನೂಪ್ ಕೆ.ಜಿ., ಅಪರ ಕೃಷಿ ನಿರ್ದೇಶಕರಾದ ಆಂಥೋನಿ, ಕರ್ನಾಟಕ ಬೀಜ ಮತ್ತು ಸಾವಯವ ಅಪರ ಕೃಷಿ ನಿರ್ದೇಶಕರಾದ ಸದಾಶಿವ, ರಾಯಚೂರು ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಜಯಪ್ರಕಾಶ್ ಟಿ.ಸಿ, ರಾಯಚೂರು ಜಿಲ್ಲೆಯ ವಿವಿಧ ತಾಲೂಕಿನ ಕೃಷಿ ಅಧಿಕಾರಿಗಳಾದ ದೀಪಾ, ಶ್ರೀನಿವಾಸ್, ಗುರುನಾಥ, ನಜೀರ್ ಅಹಮ್ಮದ್, ಮಲ್ಲಿಕಾರ್ಜುನ ಸೇರಿದಂತೆ ವಿವಿಧ ಜಿಲ್ಲೆಯ ಜಂಟಿ ನಿರ್ದೇಶಕರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News