Kalaburagi | ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದಲ್ಲಿ 'ನಶಾ ಮುಕ್ತ ಯುವ ಸಂಕಲ್ಪ' ಅಭಿಯಾನ

Update: 2026-08-02 23:16 IST

ಕಲಬುರಗಿ: ಮೈ ಭಾರತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನ್ಯಾಷನಲ್ ಇನ್‌ಫಾರ್ಮ್ಯಾಟಿಕ್ಸ್ ಸೆಂಟರ್ (ಎನ್‌ಐಸಿ) ಸಹಯೋಗದಲ್ಲಿ ಆಯೋಜಿಸಲಾದ “ವಿಕಸಿತ ಭಾರತಕ್ಕಾಗಿ ನಶಾ ಮುಕ್ತ ಯುವ ಸಂಕಲ್ಪ” ರಾಷ್ಟ್ರೀಯ ಅಭಿಯಾನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ವರ್ಚುವಲ್ ಮೂಲಕ ಚಾಲನೆ ನೀಡಿದರು.

ದೇಶಾದ್ಯಂತ ಸುಮಾರು 10 ಸಾವಿರಕ್ಕೂ ಅಧಿಕ ಕೇಂದ್ರಗಳಲ್ಲಿ ಕಾರ್ಯಕ್ರಮದ ನೇರ ಪ್ರಸಾರ ಏರ್ಪಡಿಸಲಾಗಿದ್ದು, ಕಲಬುರಗಿಯ ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯ ಆಯ್ಕೆಯಾದ ಕೇಂದ್ರಗಳಲ್ಲಿ ಒಂದಾಗಿತ್ತು. ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಧಾನಮಂತ್ರಿಯವರ ಸಂದೇಶವನ್ನು ಆಲಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾತನಾಡಿ, ಇಂದಿನ ಸಮಾಜದಲ್ಲಿ ಯುವಜನತೆ ಹಾಗೂ ವಿದ್ಯಾರ್ಥಿಗಳು ದುಶ್ಚಟಗಳತ್ತ ಆಕರ್ಷಿತರಾಗುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ. ಯುವಕರು ವ್ಯಸನಗಳಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ವ್ಯಸನವು ಕೇವಲ ವ್ಯಕ್ತಿಯನ್ನಷ್ಟೇ ಅಲ್ಲ, ಕುಟುಂಬ ಹಾಗೂ ಸಮಾಜದ ಮೇಲೂ ಗಂಭೀರ ದುಷ್ಪರಿಣಾಮ ಬೀರುತ್ತದೆ. ಒಬ್ಬ ವಿದ್ಯಾರ್ಥಿ ವ್ಯಸನಕ್ಕೆ ಬಲಿಯಾದರೆ ಅದು ಆತನ ಕನಸುಗಳಷ್ಟೇ ಅಲ್ಲ, ಪೋಷಕರ ನಿರೀಕ್ಷೆಗಳಿಗೂ ಹೊಡೆತ ನೀಡುತ್ತದೆ ಎಂದು ಅವರು ಹೇಳಿದರು.

“ವಿಕಸಿತ ಭಾರತಕ್ಕಾಗಿ ನಶಾ ಮುಕ್ತ ಯುವ” ಅಭಿಯಾನವು ಯುವಜನರ ನೇತೃತ್ವದ ಜನಾಂದೋಲನವಾಗಿದ್ದು, ಜಾಗೃತಿ, ಕ್ರಿಯಾಶೀಲತೆ ಮತ್ತು ಸಮುದಾಯದ ಸಹಭಾಗಿತ್ವದ ಮೂಲಕ ಆರೋಗ್ಯಕರ ಹಾಗೂ ಮಾದಕವಸ್ತು ಮುಕ್ತ ಭಾರತ ನಿರ್ಮಾಣದ ಸಂಕಲ್ಪವನ್ನು ಬಲಪಡಿಸುವ ಉದ್ದೇಶ ಹೊಂದಿದೆ. ದೇಶಾದ್ಯಂತ ಒಂದು ಕೋಟಿಗೂ ಅಧಿಕ ವಿದ್ಯಾರ್ಥಿಗಳು ಮತ್ತು ಯುವಕರು ವ್ಯಸನ ವಿರೋಧಿ ಪ್ರತಿಜ್ಞೆ ಸ್ವೀಕರಿಸಿದರು.

ಪ್ರಧಾನಮಂತ್ರಿಗಳ ಭಾಷಣಕ್ಕೂ ಮುನ್ನ ನಡೆದ ಕಾಲೇಜು ಕಾರ್ಯಕ್ರಮದಲ್ಲಿ ಶರಣಬಸವ ವಿಶ್ವವಿದ್ಯಾಲಯದ ನಿರ್ದೇಶಕ ಡಾ. ವಿ.ಡಿ. ಮೈತ್ರಿ ಮಾತನಾಡಿ, ಯುವಕರು ವ್ಯಸನಮುಕ್ತ ಭಾರತ ನಿರ್ಮಾಣಕ್ಕೆ ಸಂಕಲ್ಪಬದ್ಧರಾಗಿ ಸದೃಢ ಸಮಾಜ ನಿರ್ಮಾಣದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.

ಬಳಿಕ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವ್ಯಸನಮುಕ್ತ ಭಾರತ ನಿರ್ಮಾಣದ ಪ್ರತಿಜ್ಞೆ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಬಿ. ರಾಮಕೃಷ್ಣ ರೆಡ್ಡಿ, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿಗಳಾದ ಡಾ.ಬಸವರಾಜ್ ನರಿಬೋಳಿ ಹಾಗೂ ಡಾ. ಶ್ವೇತಾ ಸಿ. ಗುಮ್ಮಾ, ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿ ಅಭಿಯಾನಕ್ಕೆ ಬೆಂಬಲ ಸೂಚಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News