×
Ad

Kalaburagi | ದಂಡೋತಿ ವಸತಿ ನಿಲಯ ಪ್ರಕರಣದ ಸಮಗ್ರ ತನಿಖೆಗೆ ಡಿವೈಎಫ್‌ಐ–ಎಸ್‌ಎಫ್‌ಐ ಆಗ್ರಹ

Update: 2026-07-12 19:42 IST

ಕಲಬುರಗಿ: ಚಿತ್ತಾಪುರ ತಾಲೂಕಿನ ದಂಡೋತಿ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ನಿಲಯದಲ್ಲಿ ಊಟ ಸೇವಿಸಿದ ಬಳಿಕ ಹಲವು ವಿದ್ಯಾರ್ಥಿಗಳಿಗೆ ವಾಂತಿ ಹಾಗೂ ಭೇದಿ ಕಾಣಿಸಿಕೊಂಡಿರುವ ಘಟನೆ ತೀವ್ರ ಆತಂಕಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಡಿವೈಎಫ್‌ಐ ಹಾಗೂ ಎಸ್‌ಎಫ್‌ಐ ಒತ್ತಾಯಿಸಿವೆ.

ಈ ಕುರಿತು ಜಂಟಿ ಪತ್ರಿಕಾ ಪ್ರಕಟಣೆ ನೀಡಿರುವ ಡಿವೈಎಫ್‌ಐ ರಾಜ್ಯಾಧ್ಯಕ್ಷ ಲವಿತ್ರ ವಸ್ತ್ರದ್ ಹಾಗೂ ಎಸ್‌ಎಫ್‌ಐ ರಾಜ್ಯ ಸಮಿತಿ ಸದಸ್ಯ ಇಮಾಮ್ ಸಾಬ್, ಪ್ರಾಥಮಿಕ ಮಾಹಿತಿಯ ಪ್ರಕಾರ ವಿದ್ಯಾರ್ಥಿಗಳು ಆಹಾರ ವಿಷಬಾಧೆಗೆ ಒಳಗಾಗಿರುವ ಶಂಕೆ ವ್ಯಕ್ತವಾಗಿದ್ದು, ವಿದ್ಯಾರ್ಥಿಗಳ ಆರೋಗ್ಯ ಮತ್ತು ಸುರಕ್ಷತೆಯ ವಿಚಾರದಲ್ಲಿ ಅಧಿಕಾರಿಗಳು ತೋರಿರುವ ನಿರ್ಲಕ್ಷ್ಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.

ಘಟನೆಯ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ನಿರ್ಲಕ್ಷ್ಯಕ್ಕೆ ಕಾರಣರಾದ ಅಧಿಕಾರಿಗಳು ಹಾಗೂ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ವಸತಿ ನಿಲಯಗಳಲ್ಲಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಗುಣಮಟ್ಟದ, ಶುಚಿಯಾದ ಹಾಗೂ ಪೌಷ್ಟಿಕ ಆಹಾರವನ್ನು ನಿರಂತರವಾಗಿ ಒದಗಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯದ ಎಲ್ಲಾ ವಸತಿ ನಿಲಯಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಆಹಾರದ ಗುಣಮಟ್ಟ, ಸ್ವಚ್ಛತೆ ಹಾಗೂ ಆರೋಗ್ಯದ ಮಾನದಂಡಗಳನ್ನು ಪರಿಶೀಲಿಸಬೇಕು. ನಿಗದಿತ ಮೆನು ಪ್ರಕಾರ ಪೌಷ್ಟಿಕ ಆಹಾರ ಒದಗಿಸುವುದರ ಜೊತೆಗೆ ವಿದ್ಯಾರ್ಥಿಗಳ ಕುಂದುಕೊರತೆಗಳನ್ನು ಆಲಿಸಿ, ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಅವರು ತಿಳಿಸಿದ್ದಾರೆ.

ಇಂತಹ ಘಟನೆಗಳು ಮರುಕಳಿಸದಂತೆ ರಾಜ್ಯದ ಎಲ್ಲ ವಸತಿ ನಿಲಯಗಳಲ್ಲಿ ಆಹಾರದ ಗುಣಮಟ್ಟ ಮತ್ತು ಸ್ವಚ್ಛತೆಯ ಕುರಿತು ಕಟ್ಟುನಿಟ್ಟಿನ ಮೇಲ್ವಿಚಾರಣೆ ನಡೆಸಿ ಶಾಶ್ವತ ಕ್ರಮಗಳನ್ನು ಜಾರಿಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಎಸ್‌ಎಫ್‌ಐ ಮುಖಂಡ ಮಂಜು ಹಾಗೂ ಡಿವೈಎಫ್‌ಐ ಮುಖಂಡ ನಾಗರಾಜ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News