×
Ad

ಕಲಬುರಗಿ | ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಡಿವೈಎಫ್ಐ ಬೆಂಬಲ

Update: 2026-03-10 20:58 IST

ಕಲಬುರಗಿ: ರಾಜ್ಯದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವುದು ಹಾಗೂ ವೈದ್ಯರು ಮತ್ತು ಆರೋಗ್ಯ ಇಲಾಖೆಯ ನೌಕರರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವ ಉದ್ದೇಶದಿಂದ ಬುಧವಾರದಿಂದ ಆರಂಭವಾಗಲಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್(ಡಿವೈಎಫ್ಐ) ಕರ್ನಾಟಕ ರಾಜ್ಯ ಸಮಿತಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.

ಈ ಕುರಿತು ಸಂಘಟನೆಯ ರಾಜ್ಯಾಧ್ಯಕ್ಷೆ ಲವೀತ್ರ ವಸ್ತ್ರದ್ ಪತ್ರಿಕಾ ಪ್ರಕಟಣೆ ನೀಡಿ, ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಕಾಲಕಾಲಕ್ಕೆ ಅಗತ್ಯ ಔಷಧಿಗಳನ್ನು ಸಮರ್ಪಕವಾಗಿ ಪೂರೈಸಬೇಕು ಎಂದು ಒತ್ತಾಯಿಸಿದರು.

ಆರೋಗ್ಯ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪ್ರತಿ ಮೂರು ವರ್ಷಕ್ಕೊಮ್ಮೆ ತಿದ್ದುಪಡಿ ಮಾಡಬೇಕೆಂಬ ಸರ್ಕಾರದ ಆದೇಶ ಇದ್ದರೂ, 1973ರಿಂದ ಇಂದಿನವರೆಗೆ ಅವುಗಳನ್ನು ಸಮರ್ಪಕವಾಗಿ ತಿದ್ದುಪಡಿ ಮಾಡಿಲ್ಲ. ಕಳೆದ ನಾಲ್ಕು ವರ್ಷಗಳಿಂದ ಅಧಿಕಾರಿಗಳು ಮತ್ತು ನೌಕರರು ಮೌಖಿಕ ಹಾಗೂ ಲಿಖಿತ ಮನವಿಗಳನ್ನು ಸಲ್ಲಿಸಿದರೂ ಸರ್ಕಾರದಿಂದ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅವರು ಆರೋಪಿಸಿದರು.

ಇದಲ್ಲದೆ ಇಲಾಖೆಯ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ನೌಕರರಿಗೆ ಕಳೆದ ಐದು ವರ್ಷಗಳಿಂದ ಮುಂಬಡ್ತಿ ನೀಡಲಾಗಿಲ್ಲ. ಕೂಡಲೇ ಮುಂಬಡ್ತಿ ನೀಡಬೇಕು ಹಾಗೂ ಸೇವಾನಿರತ ವೈದ್ಯರು, ಅಧಿಕಾರಿಗಳು ಮತ್ತು ನೌಕರರಿಗೆ ಉನ್ನತ ಹಾಗೂ ಸ್ನಾತಕೋತ್ತರ ವ್ಯಾಸಂಗಕ್ಕೆ ಅವಕಾಶ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದರು.

ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ವೈದ್ಯರು, ಅರೆ ವೈದ್ಯಕೀಯ ಹಾಗೂ ಇತರೆ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ವೈದ್ಯರು, ನೌಕರರು ಹಾಗೂ ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಸೇವಾ ಭದ್ರತೆ ಒದಗಿಸಿ, ಕಾಲಕಾಲಕ್ಕೆ ವೇತನ ಹೆಚ್ಚಳ ಮಾಡಬೇಕು ಎಂಬ ಬೇಡಿಕೆಗಳನ್ನು ಹಲವು ವರ್ಷಗಳಿಂದ ಸರ್ಕಾರದ ಗಮನಕ್ಕೆ ತಂದಿದ್ದರೂ ನಿರ್ಲಕ್ಷ್ಯ ತೋರಿರುವುದು ಖಂಡನೀಯ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಪ್ರಮೋದ ಪಾಂಚಾಳ, ಸಲ್ಮಾನ್ ಖಾನ್, ಗಿಡ್ಡಮ್ಮ, ಶಾಂತಕುಮಾರ ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News