ಕಲಬುರಗಿ : ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಅಕ್ಟೋಬರ್ 23ರಂದು ಮತದಾನ ಹಾಗೂ ಅಕ್ಟೋಬರ್ 27ರಂದು ಮತ ಎಣಿಕೆ ನಡೆಯಲಿದೆ ಎಂದು ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆ ಝಹೀರಾ ನಸೀಮ್ ತಿಳಿಸಿದ್ದಾರೆ.

ಚುನಾವಣೆಗೆ ಸೆಪ್ಟೆಂಬರ್ 29ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ಅದೇ ದಿನದಿಂದ ಅಕ್ಟೋಬರ್ 6ರವರೆಗೆ (ಸರ್ಕಾರಿ ರಜೆ ದಿನಗಳನ್ನು ಹೊರತುಪಡಿಸಿ) ಬೆಳಿಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಇರಲಿದೆ.

ಅಕ್ಟೋಬರ್ 7ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್ 9 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ಅಕ್ಟೋಬರ್ 23 (ಶುಕ್ರವಾರ) ಬೆಳಿಗ್ಗೆ 8ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅಕ್ಟೋಬರ್ 27 (ಮಂಗಳವಾರ) ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ.

ನಾಮಪತ್ರಗಳ ನಮೂನೆಗಳನ್ನು ಕಲಬುರಗಿ ಪ್ರಾದೇಶಿಕ ಆಯುಕ್ತರ ಕಚೇರಿಯ ಚುನಾವಣೆ ಶಾಖೆಯಿಂದ ಪಡೆದು, ಭರ್ತಿ ಮಾಡಿದ ನಾಮಪತ್ರಗಳನ್ನು ಜಿಲ್ಲಾಡಳಿತ ಭವನದ 2ನೇ ಮಹಡಿಯ ಕಾನ್ಫರೆನ್ಸ್ ಹಾಲ್‌ನಲ್ಲಿ ಸಲ್ಲಿಸಬಹುದಾಗಿದೆ.

ಈಶಾನ್ಯ ಶಿಕ್ಷಕರ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಕಲಬುರಗಿ, ಬೀದರ, ರಾಯಚೂರು, ಬಳ್ಳಾರಿ, ಕೊಪ್ಪಳ, ಯಾದಗಿರಿ ಹಾಗೂ ವಿಜಯನಗರ ಜಿಲ್ಲೆಗಳು ಸೇರಿವೆ. ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿ ಹಾಗೂ ಮತದಾರರ ನೋಂದಣಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದು, ಸಂಬಂಧಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸಹಾಯಕ ಚುನಾವಣಾಧಿಕಾರಿಗಳಾಗಿರುತ್ತಾರೆ.

ಮಾದರಿ ನೀತಿ ಸಂಹಿತೆ ಜಾರಿ :

ಚುನಾವಣಾ ವೇಳಾಪಟ್ಟಿ ಪ್ರಕಟಗೊಂಡ ಹಿನ್ನೆಲೆಯಲ್ಲಿ ಈಶಾನ್ಯ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯಲ್ಲಿ ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ (MCC) ಜಾರಿಯಾಗಿದೆ ಎಂದು ಚುನಾವಣಾಧಿಕಾರಿ ಝಹೀರಾ ನಸೀಮ್ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor