Kalaburagi | ಸಾಲಬಾಧೆಯಿಂದ ರೈತ ಆತ್ಮಹತ್ಯೆ
ಕಲಬುರಗಿ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಬೆಳಗ್ಗೆ ಕಮಲಾಪುರ ತಾಲ್ಲೂಕಿನ ಕುದಮೂಡ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಮೃತ ರೈತನನ್ನು ಸಂತೋಷ ಗುರುಪಾದ ಬಿರಾದಾರ (40) ಎಂದು ಗುರುತಿಸಲಾಗಿದೆ. ಸೋಮವಾರ ಬೆಳಗ್ಗೆ ಗ್ರಾಮದ ಹೊರವಲಯದಲ್ಲಿರುವ ತಮ್ಮ ಹೊಲದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮೃತ ರೈತನ ತಾಯಿ ಹೆಸರಿನಲ್ಲಿ ಜಮೀನಿದ್ದು, ಅಂಬಲಗಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಕೃಷ್ಣಾ ಗ್ರಾಮೀಣ ಬ್ಯಾಂಕ್ನಲ್ಲಿ ಸಾಲ ಹೊಂದಿದ್ದರು. ಇದರೊಂದಿಗೆ ಖಾಸಗಿಯಾಗಿಯೂ ಸುಮಾರು 20 ಲಕ್ಷ ರೂ. ಸಾಲ ಮಾಡಿದ್ದರು ಎಂದು ಮೂಲಗಳು ತಿಳಿಸಿವೆ.
ಘಟನಾ ಸ್ಥಳಕ್ಕೆ ನರೋಣಾ ಪೊಲೀಸ್ ಠಾಣೆಯ ಪಿಎಸ್ಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ರೈತರ ಸಾಲಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.