ಕಲಬುರಗಿ | ಶರಣಬಸವ ವಿವಿಯಲ್ಲಿ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ
ಕಲಬುರಗಿ: ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನವನ್ನು ಶರಣಬಸವ ವಿಶ್ವವಿದ್ಯಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ನಗರದ ಶರಣಬಸವೇಶ್ವರ ದೇವಾಲಯದ ಆವರಣದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳುವ ಮೂಲಕ ಹಾಗೂ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿರುವ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ಹಾಗೂ ಸಂಶೋಧನಾ ವಿಭಾಗದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸುವ ಮೂಲಕ ಗಾಂಧೀಜಿ ಅವರ 157ನೇ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 122ನೇ ಜನ್ಮದಿನವನ್ನು ಆಚರಿಸಲಾಯಿತು.
ಸಮಾಜ ವಿಜ್ಞಾನ ನಿಕಾಯದ ಡೀನ್ ಪ್ರೊ. ಟಿ.ವಿ. ಶಿವಾನಂದನ್, ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಪ್ರೊ. ಎಸ್.ಎಸ್. ಪಾಟೀಲ್, ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಸುಮಂಗಲಾ ರೆಡ್ಡಿ ಸೇರಿದಂತೆ ಕನ್ನಡ, ಇಂಗ್ಲಿಷ್, ಸಂಗೀತ ಹಾಗೂ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗಗಳ ಬೋಧಕ ಸಿಬ್ಬಂದಿ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ, ರಾಷ್ಟ್ರಕ್ಕೆ ಅವರು ಸಲ್ಲಿಸಿದ ಅಮೂಲ್ಯ ಸೇವೆಯನ್ನು ಸ್ಮರಿಸಿದರು.
ಶರಣಬಸವೇಶ್ವರ ದೇವಾಲಯದ ಆವರಣದಲ್ಲಿ ಸ್ವಚ್ಛತಾ ಕಾರ್ಯ:
‘ಸ್ವಚ್ಛ ಭಾರತ ಅಭಿಯಾನ’ದ ಅಂಗವಾಗಿ ಶರಣಬಸವ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಡಾ. ಎಸ್.ಎಚ್. ಹೊನ್ನಳ್ಳಿ ಹಾಗೂ ಡೀನ್ ಡಾ. ಶಿವಕುಮಾರ್ ಜವಳಿಗಿ ಅವರ ನೇತೃತ್ವದಲ್ಲಿ ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಹಾಗೂ ವಿವಿಧ ವಿಭಾಗಗಳ ಬೋಧಕ ಸಿಬ್ಬಂದಿ ಶರಣಬಸವೇಶ್ವರ ದೇವಾಲಯದ ವಿಶಾಲ ಆವರಣದಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು.
ಮಹಾತ್ಮ ಗಾಂಧೀಜಿ ದಕ್ಷಿಣ ಆಫ್ರಿಕಾ ಹಾಗೂ ಭಾರತದಲ್ಲಿ ವಾಸವಿದ್ದ ಸಂದರ್ಭದಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯಕ್ಕೆ ನೀಡಿದ ಮಹತ್ವವನ್ನು ಸ್ಮರಿಸುವ ಉದ್ದೇಶದಿಂದ ಈ ಸ್ವಚ್ಛತಾ ಅಭಿಯಾನ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಉತ್ಸಾಹದಿಂದ ಪಾಲ್ಗೊಂಡು ದೇವಾಲಯದ ಆವರಣವನ್ನು ಸ್ವಚ್ಛಗೊಳಿಸಿದರು.