ಕಲಬುರಗಿ | ಜ.21, 22ರಂದು ಸರಕಾರಿ ನೌಕರರ ಕ್ರೀಡಾಕೂಟ ಆಯೋಜನೆ : ಡಿಸಿ ಬಿ.ಫೌಝಿಯಾ ತರನ್ನುಮ್
ಕಲಬುರಗಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಲಬುರಗಿ ಜಿಲ್ಲಾ ಘಟಕ ಸಂಯುಕ್ತಾಶ್ರಯದಲ್ಲಿ ಜ.21 ಮತ್ತು 22 ರಂದು ರಾಜ್ಯ ಸರ್ಕಾರಿ ನೌಕರರಿಗಾಗಿ 2025-26ನೇ ಸಾಲಿನ ಜಿಲ್ಲಾ ಮಟ್ಟದ ವಾರ್ಷಿಕ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಆಯೋಜನೆಗೆ ಶುಕ್ರವಾರ ಜರುಗಿದ ಸಭೆಯಲ್ಲಿ ನಿರ್ಧರಿಸಲಾಗಿದೆ.
ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕ್ರೀಡಾಕೂಟ ಸಂಬಂಧ ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಬಿ. ಫೌಝಿಯಾ ತರನ್ನುಮ್ ಅವರು, ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಮತ್ತು ಇದಕ್ಕಾಗಿ ಕೂಡಲೇ ಹೆಸರು ನೋಂದಣಿ ಮಾಡಿಕೊಳ್ಳಬೇಕೆಂದ ಅವರು, ಈ ಕುರಿತು ಎಲ್ಲಾ ಇಲಾಖೆಯ ಸೂಚನಾ ಪಲಕದಲ್ಲಿ ಕ್ರೀಡಾಕೂಟದ ಬಗ್ಗೆ ಪೋಸ್ಟರ್ ಅಂಟಿಸಿ ಪ್ರಚಾರ ಮಾಡಬೇಕು ಎಂದು ನೌಕರರ ಸಂಘದ ಪದಾಧಿಕಾರಿಗಳಿಗೆ ಸೂಚಿಸಿದರು.
ಜ.21 ರಂದು ಇಲ್ಲಿನ ಚಂದ್ರಶೇಖರ್ ಪಾಟೀಲ ಕ್ರೀಡಾಂಗಣದಲ್ಲಿ ಎಲ್ಲಾ ಮಾದರಿಯ ಕ್ರೀಡೆಗಳು ಜರುಗಲಿವೆ. ಅದೇ ರೀತಿ ಜ.22 ರಂದು ನಗರದ ಕನ್ನಡ ಭವನದಲ್ಲಿ ಸಾಂಸ್ಕೃತಿಕ ಸ್ಪರ್ಧೆ ಆಯೋಜನೆ ಮಾಡಿದ್ದು, ನೌಕರರು ದೈನಂದಿದ ಕೆಲಸದ ಒತ್ತಡದಿಂದ ಹೊರಬರಲು ಇದೊಂದು ಉತ್ತಮ ಅವಕಾಶವಾಗಿದ್ದು, ಕ್ರೀಡೆ ಮತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಬೇಕು. ಕ್ರೀಡಾಕೂಟದಲ್ಲಿ ಭಾಗವಹಿಸುವ ನೌಕರರಿಗೆ ಓ.ಓ.ಡಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಡಿ.ಸಿ. ಅವರು ತಿಳಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಸಂಗಮೇಶ ಅವರು ಕ್ರೀಡಾಕೂಟಕ್ಕೆ ಇದೂವರೆಗೆ ತೆಗೆದುಕೊಂಡ ಪೂರ್ವಸಿದ್ಧತೆ ಕ್ರಮಗಳು ಮತ್ತು ವಿವಿಧ ಸ್ಪರ್ಧೆಗಳ ಕುರಿತು ಸಭೆಗೆ ಮಾಹಿತಿ ನೀಡಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ಮಾತನಾಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಹೆಚ್ಚುವರಿ ಎಸ್.ಪಿ.ಮಹೇಶ ಮೇಘಣ್ಣನವರ್, ಸಹಾಯಕ ಆಯುಕ್ತೆ ಸಾಹಿತ್ಯ ಆಲದಕಟ್ಟಿ, ಮಹಾನಗರ ಪಾಲಿಕೆ ಉಪ ಆಯುಕ್ತೆ (ಆಡಳಿತ) ಪ್ರಮೀಳಾ ಎಂ.ಕೆ. ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.